ನಿಗದಿತ ಅವಧಿಯಲ್ಲಿ ಗುರಿ ಸಾಧಿಸಿ, ಅನುದಾನ ಲ್ಯಾಪ್ಸ್ ಆಗದಂತೆ ನೋಡಿಕೊಳ್ಳಿ: ಎಡಿಸಿ ಸೂಚನೆ
ವಿಜಯಪುರ,ಸೆ.22(ಕರ್ನಾಟಕ ವಾರ್ತೆ): ಸರ್ಕಾರದ ನಿಯಮಾವಳಿಗಳ ಪ್ರಕಾರ ಪರಿಶಿಷ್ಟ ಜಾತಿ ಉಪ ಹಂಚಿಕೆ ಹಾಗೂ ಗಿರಿಜನ ಉಪ ಹಂಚಿಕೆ ಯೋಜನೆಯಡಿ ಅನುದಾನವನ್ನು ಸಂಪೂರ್ಣವಾಗಿ ವೆಚ್ಚ ಮಾಡಬೇಕು. ನಿಗದಿತ ಅವಧಿಯಲ್ಲಿ ಗುರಿ ಸಾಧಿಸಬೇಕು. ಯಾವುದೇ ಕಾರಣಕ್ಕೂ ಅನುದಾನ ಲ್ಯಾಪ್ಸ್ ಆಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಓದ್ರಾಮ್ ಹೇಳಿದರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ 2026-27ನೇ ಸಾಲಿನ ಪರಿಶಿಷ್ಟ ಜಾತಿ ಉಪ ಹಂಚಿಕೆ ಹಾಗೂ ಗಿರಿಜನ ಉಪ ಹಂಚಿಕೆ ಯೋಜನೆಯಡಿ ಕೇಂದ್ರ, ರಾಜ್ಯ ಹಾಗೂ ಜಿಲ್ಲಾ ವಲಯ ಯೋಜನೆ ಕಾರ್ಯಕ್ರಮಗಳ ಇಲಾಖಾವಾರು ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರದ ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಗಳ ನೈಜ ಫಲಾನುಭವಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಅತ್ಯಂತ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವ ಮೂಲಕ ಅರ್ಹರಿಗೆ ಯೋಜನೆಗಳನ್ನು ತಲುಪಿಸಬೇಕು ಎಂದರು. ಜೊತೆಗೆ, ತಾಲೂಕು ಮಟ್ಟದಲ್ಲಿ ಪ್ರಗತಿ ಪರೀಶೀಲನೆಗೆ ಸಂಬಂಧಿಸಿದಂತೆ ತಹಶೀಲ್ದಾರರು ಹಾಗೂ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳ ನೇತೃತ್ವದಲ್ಲಿ ನಿರಂತರ ಸಭೆಗಳನ್ನು ನಡೆಸಿ ಅನುಷ್ಠಾನಕ್ಕೆ ವೇಗ ನೀಡಬೇಕು ಎಂದು ವಿವರಿಸಿದರು. ಇದೇ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ರೇಷ್ಮೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿಯನ್ನು ಸಮಗ್ರವಾಗಿ ಪರೀಶೀಲಿಸಿದ ಅವರು, ಅಗತ್ಯ ಸೂಚನೆ ನೀಡಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಹೇಶ ಪೋತದಾರ, ಜಂಟಿ ಕೃಷಿ ನಿರ್ದೇಶಕರಾದ ಶಿವನಗೌಡ ಪಾಟೀಲ, ಹೆಸ್ಕಾಂ ಅಧೀಕ್ಷಕ ಅಭಿಯಂತರರಾದ ಸಿದ್ದಪ್ಪ ಬಿಂಜಗೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಹಣಮಂತ ಕಾಲತಿಪ್ಪಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಮಲ್ಲಿನಾಥ ಕುಸನಾಳ, ಕ್ರೀಡಾಧಿಕಾರಿ ರಾಜಶೇಖರ ಧೈವಾಡಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.