ಉತ್ತಮ ಆರೋಗ್ಯ, ಶಿಸ್ತುಬದ್ಧ ಜೀವನದಿಂದ ಸದೃಢ ಭಾರತ ನಿರ್ಮಾಣ ಸಾಧ್ಯ

ಉತ್ತಮ ಆರೋಗ್ಯ, ಶಿಸ್ತುಬದ್ಧ ಜೀವನದಿಂದ ಸದೃಢ ಭಾರತ ನಿರ್ಮಾಣ ಸಾಧ್ಯ Building a strong India is possible through good health and a disciplined life

ಬಳ್ಳಾರಿ, ಸೆ. 11: ಯುವ ಸಮುದಾಯ ಯಾವುದೇ ರೀತಿಯ ಮಾದಕ ವ್ಯಸನಗಳಿಗೆ ಬಲಿಯಾಗದೆ, ತಮ್ಮ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಕಾಪಾಡಿಕೊಂಡಾಗ ಮಾತ್ರ ಸದೃಢ ದೇಶ ನಿರ್ಮಾಣ ಸಾಧ್ಯ ಎಂದು ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ. ವೀರೇಂದ್ರಕುಮಾರ್ ಹೇಳಿದರು.  

ಭಾರತ ಸರ್ಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯದ ‘ಮೇರಾ ಯುವ ಭಾರತ’ (ಮೈ ಭಾರತ್) ಕೇಂದ್ರ, ಬಳ್ಳಾರಿ, ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಸ್ವಾಯತ್ತ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ, ನಾಟಕ ವಿಭಾಗ ಹಾಗೂ ಸಿರುಗುಪ್ಪದ ನೇತ್ರ ಕಲಾ ಸಂಘದ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ‘ನಶಾ ಮುಕ್ತ ಯುವ, ವಿಕಸಿತ ಭಾರತ’ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.  

ಇತ್ತೀಚಿನ ದಿನಗಳಲ್ಲಿ ಯುವಜನತೆ ಒತ್ತಡ, ಖಿನ್ನತೆ ಹಾಗೂ ದುಶ್ಚಟಗಳಿಂದಾಗಿ ಮಾದಕ ವಸ್ತುಗಳ ದಾಸರಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಮಾದಕ ವ್ಯಸನ ವ್ಯಕ್ತಿಯ ಆರೋಗ್ಯದ ಮೇಲೆ ಮಾತ್ರವಲ್ಲದೆ, ಇಡೀ ಕುಟುಂಬ ಹಾಗೂ ಸಮಾಜದ ಸ್ವಾಸ್ಥ್ಯದ ಮೇಲೂ ದುಷ್ಪರಿಣಾಮ ಬೀರುತ್ತದೆ ಎಂದು ಅವರು ತಿಳಿಸಿದರು.  

ಯುವಜನರು ದುಶ್ಚಟಗಳಿಂದ ದೂರವಿದ್ದು, ತಮ್ಮಲ್ಲಿರುವ ಸೃಜನಶೀಲತೆ ಮತ್ತು ಪ್ರತಿಭೆಯನ್ನು ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಮೂಲಕ ಸಕಾರಾತ್ಮಕವಾಗಿ ಬಳಸಿಕೊಳ್ಳಬೇಕು ಎಂದು ಕರೆ ನೀಡಿದರು.