ಕೊರೋನ ಸೋಂಕು ಇಳಿಮುಖ - ಈವರೆಗೆ 89 ಲಕ್ಷ ರೋಗಿಗಳು ಗುಣಮುಖ
ನವದೆಹಲಿ, ಡಿ 3 :ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಇಳಿಮುಖವಾಗಿದೆ. ಕಳೆದ 24 ಗಂಟೆಯಲ್ಲಿ 35551 ಮಂದಿಗೆ ಕೊರೋನ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಈವರೆಗೆ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 95 ಲಕ್ಷ ದಾಟಿದೆ.ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 526 ಮಂದಿ ಸೋಂಕಿಗೆ ಬಲಿಯಾಗಿದ್ದು, ಇದುವರೆಗೂ ಮೃತಪಟ್ಟವರ ಸಂಖ್ಯೆ 1,38,648ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಹೊಸ ಪ್ರಕರಣಗಳಿಗೆ ಹೋಲಿಸಿದರೆ ಗುಣಮುಖರಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಒಂದು ದಿನದಲ್ಲಿ 40,726 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಇದುವರೆಗೂ 89,73,373 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗಳಿಗೆ ಹಿಂತಿರುಗಿದ್ದಾರೆ. ದೇಶದಲ್ಲಿ 4,22,943 ಸಕ್ರಿಯ ಪ್ರಕರಣಗಳಿವೆ.ಕೊರೊನಾ ಸೋಂಕು ಹರಡುವಿಕೆಗೆ ಕಡಿವಾಣ ಹಾಕಲು ತಪಾಸಣೆಯನ್ನು ಹೆಚ್ಚಿಸಲಾಗುತ್ತಿದೆ.
ಕಳೆದ 24 ಗಂಟೆಗಳಲ್ಲೇ 11,11,698 ಜನರನ್ನು ಕೊರೋನ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ. ಇದುವರೆಗೂ 14,35,57,647 ಜನರನ್ನು ಸೋಂಕು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ತಿಳಿಸಿದೆ. ಈವರೆಗೆ ವಿಶ್ವದಲ್ಲಿ 6,ಕೋಟಿ 48,ಲಕ್ಷ ಕ್ಕೂ ಹೆಚ್ಚು ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಮಹಾಮಾರಿಗೆ ಈವರೆಗೂ 15 ಲಕ್ಷ ಜನರು ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಅಮೆರಿಕಾ ಮೊದಲ ಸ್ಥಾನದಲ್ಲಿದೆ.