ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಕಠಿಣ ಕ್ರಮಕ್ಕೆ ಆಗ್ರಹ
Demand for strict action condemning atrocities against Dalits
ಗದಗ 11: ದಲಿತ ಸಮುದಾಯದ ಮೇಲೆ ನಡೆಯುತ್ತಿರುವ ದೌರ್ಜನ್ಯ, ಅನ್ಯಾಯ, ತಾರತಮ್ಯ ಹಾಗೂ ಹತ್ಯೆ ಪ್ರಕರಣಗಳನ್ನು ಖಂಡಿಸಿ, ತಪ್ಪಿತಸ್ಥರ ವಿರುದ್ಧ ತಕ್ಷಣ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಾದಿಗ ಮಹಾಸಭಾ ಗದಗ ಜಿಲ್ಲಾ ಘಟಕ ಆಗ್ರಹಿಸಿದೆ.
ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾದಿಗ ಮಹಾಸಭಾ ಗದಗ ಜಿಲ್ಲಾಧ್ಯಕ್ಷ ಉಡಚಪ್ಪ ಹಳ್ಳಿಕೇರಿ, ಸಂವಿಧಾನವು ಎಲ್ಲರಿಗೂ ಸಮಾನತೆ, ಸ್ವಾತಂತ್ರ್ಯ ಹಾಗೂ ಗೌರವಯುತ ಜೀವನದ ಹಕ್ಕು ನೀಡಿದ್ದರೂ ದಲಿತರ ಮೇಲಿನ ದೌರ್ಜನ್ಯಗಳು ಮುಂದುವರಿದಿರುವುದು ಆತಂಕಕಾರಿ ಎಂದರು.
ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪಿಗಳನ್ನು ತಕ್ಷಣ ಬಂಧಿಸಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳಬೇಕು. ಸಂತ್ರಸ್ತ ಕುಟುಂಬಗಳಿಗೆ ಸೂಕ್ತ ರಕ್ಷಣೆ, ಕಾನೂನು ನೆರವು ಹಾಗೂ ತ್ವರಿತ ಪರಿಹಾರ ನೀಡಬೇಕು ಎಂದು ಅವರು ಒತ್ತಾಯಿಸಿದರು.
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಸಂಕೇಶ್ವರಹಾಳ ಗ್ರಾಮದ ಮಾದಿಗ ಮುಖಂಡ ಹಾಗೂ ಸಾಮಾಜಿಕ ಹೋರಾಟಗಾರ ಭೂಮಾನಂದ ಹದ್ದಿನಹಾಳ ಅವರ ಹತ್ಯೆಯನ್ನು ಖಂಡಿಸಿದ ಅವರು, ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ಅವರನ್ನು ರಾಜ್ಯದಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು.
ಮೃತರ ಕುಟುಂಬಕ್ಕೆ ?50 ಲಕ್ಷ ಪರಿಹಾರ, ಭೂ ಒಡೆತನ ಯೋಜನೆಯಡಿ 10 ಎಕರೆ ಜಮೀನು, ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ಹಾಗೂ ಪ್ರಕರಣವನ್ನು ತ್ವರಿತ ನ್ಯಾಯಾಲಯದ ಮೂಲಕ ವಿಚಾರಣೆ ನಡೆಸಬೇಕು ಎಂದು ಒತ್ತಾಯಿಸಲಾಯಿತು.
ಅದೇ ರೀತಿ, ರೋಣ ತಾಲೂಕಿನ ಅರಹುಣಸಿ ಗ್ರಾಮದ ದಲಿತ ಯುವತಿಯ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಗದಗ ಜಿಲ್ಲೆಯಿಂದ ಗಡಿಪಾರು ಮಾಡಬೇಕು. ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಕುಂಬಾರಕೊಪ್ಪ ಗ್ರಾಮದ ದಲಿತ ವ್ಯಕ್ತಿಯ ಹತ್ಯೆ ಪ್ರಕರಣದಲ್ಲೂ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಲಾಯಿತು.
ದಾವಣಗೆರೆ ಜಿಲ್ಲೆಯ ಚಳಗೇರಿ ಗ್ರಾಮದಲ್ಲಿ ದಲಿತ ಯುವಕರು ದೇವಸ್ಥಾನ ಪ್ರವೇಶಿಸಿದ ಹಿನ್ನೆಲೆಯಲ್ಲಿ ಹಲ್ಲೆ ಹಾಗೂ ಜಾತಿನಿಂದನೆ ನಡೆದಿರುವ ಆರೋಪದ ಬಗ್ಗೆಯೂ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಹಾಸಭಾ ಒತ್ತಾಯಿಸಿತು.
ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳದಿದ್ದರೆ, ಮುಂದಿನ ದಿನಗಳಲ್ಲಿ ಗದಗ ಜಿಲ್ಲಾದ್ಯಂತ ಹಂತ ಹಂತವಾಗಿ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಉಡಚಪ್ಪ ಹಳ್ಳಿಕೇರಿ ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾದಿಗ ಮಹಾಸಭಾ ಮುಖಂಡರಾದ ಸುನಿಲ್ ಬಂಡೇಣ್ಣವರ್, ರಾಘವೇಂದ್ರ ಪರಾಪುರ, ವಿನಾಯಕ ಕಟ್ಟಿಮನಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 