ಗ್ರಾಮೀಣ ಕುಡಿಯುವ ನೀರಿನ ಗುಣಮಟ್ಟ ನಿರಂತರ ಪರೀಶೀಲನೆಗೆ ಸೂಚನೆ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಕ್ರಮದ ಎಚ್ಚರಿಕೆ
ಲೋಕದರ್ಶನ ವರದಿ
ಧಾರವಾಡ 02: ಗ್ರಾಮೀಣ ಭಾಗದ ಜನರಿಗೆ ಸರಬರಾಜಾಗುವ ಕುಡಿಯುವ ನೀರಿನ ಗುಣಮಟ್ಟವನ್ನು ಕಾಲಕಾಲಕ್ಕೆ ಪರೀಶೀಲಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ್ ಸೂಚನೆ ನೀಡಿದ್ದಾರೆ.
ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಜುಲೈ 2ರಂದು ನಡೆದ ಜಿಲ್ಲಾ ಮಟ್ಟದ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆ ಹಾಗೂ ಜಿಲ್ಲಾ ತಾಂತ್ರಿಕ ಅನುಮೋದನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವುದು ಅಧಿಕಾರಿಗಳ ಪ್ರಮುಖ ಜವಾಬ್ದಾರಿ ಎಂದು ಹೇಳಿದರು.
ಕುಡಿಯುವ ನೀರಿನ ವ್ಯವಸ್ಥೆ ಸಮರ್ಕವಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಬೋರ್ವೆಲ್ ನೀರು ಬಳಕೆಯಾಗುವ ಪ್ರದೇಶಗಳಲ್ಲಿ ನಿಯಮಿತವಾಗಿ ನೀರಿನ ಗುಣಮಟ್ಟ ಪರೀಕ್ಷೆ ನಡೆಸಬೇಕು ಹಾಗೂ ಅಗತ್ಯವಿದ್ದರೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚಿಸಿದರು.
ಕಲುಷಿತ ನೀರು ಸರಬರಾಜಾಗುತ್ತಿರುವ ಸ್ಥಳಗಳಲ್ಲಿ ನಿರ್ಲಕ್ಷ್ಯ ತೋರಿದ ಗುತ್ತಿಗೆದಾರರು ಹಾಗೂ ಸಂಬಂಧಿತ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಜಲ ಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಸೂಚನೆ ನೀಡಲಾಯಿತು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಪರಶುರಾಮ ಎಫ್.ಕೆ., ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಡಾ. ಕಮಲಾ ಬೈಲೂರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ತಾಲೂಕು ಪಂಚಾಯತ್ ಅಧಿಕಾರಿಗಳು ಹಾಗೂ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.