ಮತದಾನದ ಹಕ್ಕು ಕಳೆದುಕೊಳ್ಳಬೇಡಿ: ಶಾಸಕ ಬಸವರಾಜ ಶಿವಣ್ಣವರ ಕರೆ
ಬ್ಯಾಡಗಿ, ಜು. 4: ಅರ್ಹ ಮತದಾರರು ಯಾವುದೇ ಕಾರಣಕ್ಕೂ ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಎಸ್ಐಆರ್ (ಖಋ) ಪ್ರಕ್ರಿಯೆ ಕುರಿತು ಮನೆ ಮನೆಗೆ ತೆರಳಿ ಸ್ಪಷ್ಟ ಮಾಹಿತಿ ನೀಡಿ ಜಾಗೃತಿ ಮೂಡಿಸಬೇಕು ಎಂದು ಶಾಸಕ ಬಸವರಾಜ ಶಿವಣ್ಣವರ ಕರೆ ನೀಡಿದರು.
ಪಟ್ಟಣದ ಕಾಂಗ್ರೆಸ್ ಪಕ್ಷದ ಸಭಾಭವನದಲ್ಲಿ ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾಗವಹಿಸುವ ಬಿಎಲ್ಎ-2 ಹಾಗೂ ಪಕ್ಷದ ಪದಾಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಮತದಾರರ ಪಟ್ಟಿಯಲ್ಲಿರುವ ಅರ್ಹರ ಹೆಸರುಗಳು ಯಾವುದೇ ಕಾರಣಕ್ಕೂ ಕೈಬಿಡದಂತೆ ವಿಶೇಷ ಕಾಳಜಿ ವಹಿಸಬೇಕು ಎಂದು ಸೂಚಿಸಿದರು.
ಪಕ್ಷದ ಬೆಂಬಲಿಗರು ಹಾಗೂ ಪ್ರಮುಖ ಮತದಾರರ ಹೆಸರುಗಳು ಮತದಾರರ ಪಟ್ಟಿಯಲ್ಲಿ ಯಥಾಸ್ಥಿತಿಯಲ್ಲಿ ಉಳಿದಿವೆಯೇ ಎಂಬುದನ್ನು ನಿರಂತರವಾಗಿ ಪರೀಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಎಸ್ಐಆರ್ ಪ್ರಕ್ರಿಯೆ ವೇಳೆ ಪ್ರತಿಯೊಬ್ಬ ಮತದಾರನಿಗೂ ಅಗತ್ಯ ದಾಖಲೆಗಳು, ಪರೀಶೀಲನಾ ವಿಧಾನ ಹಾಗೂ ಮತದಾರರ ಪಟ್ಟಿಯಲ್ಲಿ ಹೆಸರು ಉಳಿಸಿಕೊಳ್ಳುವ ಕುರಿತು ಸಮಗ್ರ ಮಾಹಿತಿ ನೀಡಿ ಜಾಗೃತಿ ಮೂಡಿಸುವಂತೆ ಬಿಎಲ್ಎ-2 ಕಾರ್ಯಕರ್ತರಿಗೆ ಸಲಹೆ ನೀಡಿದರು.
ಮತದಾನದ ಹಕ್ಕು ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕಾಗಿದೆ. ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಅರ್ಹ ಮತದಾರರ ಹೆಸರು ತಪ್ಪದಂತೆ ಎಚ್ಚರಿಕೆ ವಹಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಸರ್ಕಾರಿ ಯೋಜನೆಗಳ ಸೌಲಭ್ಯ ಪಡೆಯುವಲ್ಲಿಯೂ ತೊಂದರೆ ಉಂಟಾಗುವ ಸಾಧ್ಯತೆ ಇದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ತಾಲೂಕು ಕಾಂಗ್ರೆಸ್ ಅಧ್ಯಕ್ಷ ದಾನಪ್ಪ ಚೂರಿ, ಶಿವನಗೌಡ ವೀರನಗೌಡ, ಪ್ರಧಾನ ಕಾರ್ಯದರ್ಶಿ ರಮೇಶ್ ಸುತ್ತಕೋಟಿ, ಕಾರ್ಯದರ್ಶಿ ಮಾರುತಿ ಅಚ್ಚಗೇರಿ, ಬಸವರಾಜ ಸವಣೂರ, ಸುರೇಶಗೌಡ ಪಾಟೀಲ, ಶಂಭನಗೌಡ ಪಾಟೀಲ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.