ಸಾಮಾಜಿಕ ನ್ಯಾಯದ ಆಶಯವನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು

ಸಾಮಾಜಿಕ ನ್ಯಾಯದ ಆಶಯವನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು  Everyone should internalize the ideal of social justice.

ಲೋಕದರ್ಶನ ವರದಿ 

ಬಳ್ಳಾರಿ 20: ಸಂವಿಧಾನದ ಪೀಠಿಕೆಯಲ್ಲಿ ಪ್ರತಿಪಾದಿಸಿರುವ ಸಾಮಾಜಿಕ ನ್ಯಾಯದ ಆಶಯವನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು ಎಂದು ಡಾ. ಬಾಬು ಜಗಜೀವನ ರಾಮ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ ಹೇಳಿದರು.  

ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಸಾಮಾಜಿಕ ನ್ಯಾಯದ ಹರಿಕಾರ, ಹಿಂದುಳಿದ ವರ್ಗಗಳ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.  

ವಿನೋಬಾ ಭಾವೆ ಅವರ ಭೂದಾನ ಚಳವಳಿಯ ಪ್ರೇರಣೆಯಿಂದ ರಾಜ್ಯದಲ್ಲಿ ‘ಉಳುವವನೇ ಒಡೆಯ’ ಎಂಬ ಐತಿಹಾಸಿಕ ಭೂಸುಧಾರಣಾ ಕಾಯ್ದೆಯನ್ನು ಜಾರಿಗೆ ತಂದ ದೇವರಾಜ ಅರಸು, ಬಡವರು, ದಲಿತರು ಹಾಗೂ ಹಿಂದುಳಿದ ವರ್ಗಗಳಿಗೆ ಭೂಮಿಯ ಹಕ್ಕು ನೀಡಿ ಬಡತನ ನಿರ್ಮೂಲನೆ ಮತ್ತು ಸಾಮಾಜಿಕ ಸಮಾನತೆಗೆ ಅಡಿಪಾಯ ಹಾಕಿದ ಮಹಾನ್ ನಾಯಕ ಎಂದು ಸ್ಮರಿಸಿದರು.  

ಯುವಜನರು ಹಾಗೂ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯರ್ಥವಾಗಿ ಸಮಯ ಕಳೆಯುವುದನ್ನು ಕಡಿಮೆ ಮಾಡಿ, ಮೊಬೈಲ್ ವ್ಯಾಮೋಹದಿಂದ ಹೊರಬಂದು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಡಾ. ಬಿ.ಆರ್‌. ಅಂಬೇಡ್ಕರ್ ಸೇರಿದಂತೆ ಮಹಾನ್ ನಾಯಕರ ಜೀವನ ಮತ್ತು ಚಿಂತನೆಗಳನ್ನು ಅಧ್ಯಯನ ಮಾಡುವ ಮೂಲಕ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.  

ಜಾತಿ, ಧರ್ಮ, ಭಾಷೆ ಹಾಗೂ ಪ್ರಾದೇಶಿಕ ಭೇದಭಾವ ಮರೆತು ದೇಶದ ಏಕತೆ, ಸಮಗ್ರತೆ ಮತ್ತು ಶಾಂತಿ ಕಾಪಾಡುವ ಸಂವಿಧಾನದ ಸಂದೇಶವನ್ನು ಎಲ್ಲರೂ ಪಾಲಿಸಬೇಕು ಎಂದು ಸದ್ಭಾವನಾ ಪ್ರತಿಜ್ಞೆಯ ಮೂಲಕ ಕರೆ ನೀಡಲಾಯಿತು.  

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ. ಚಿದಾನಂದಪ್ಪ, ದೇವರಾಜ ಅರಸು ವೇದಿಕೆಯ ಜಿಲ್ಲಾಧ್ಯಕ್ಷ ಕಲ್ಲುಕಂಭ ಪಂಪಾಪತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಲಾಲಪ್ಪ ಎ.ಕೆ., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ. ನಾಗರಾಜ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.