ಲೋಕದರ್ಶನ ವರದಿ
ವಿಜಯಪುರ 07:ನಗರ ಪಟ್ಟಣಗಳ ವ್ಯಾಪ್ತಿಯಲ್ಲಿ 24/7 ಕುಡಿಯುವ ನೀರು ಪೂರೈಕೆ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಪಿ.ಎ.ಮೇಘಣ್ಣವರ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ವಿಜಯಪುರ ಜಿಲ್ಲಾ ಬರ ಪರಿಸ್ಥಿತಿ ನಿರ್ವಹಣೆ ಕುರಿತಂತೆ ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ನಗರ, ಪಟ್ಟಣಗಳ ವ್ಯಾಪ್ತಿಯಲ್ಲಿ 24/7 ಕುಡಿಯುವ ನೀರಿನ ಪೂರೈಕೆ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಅಧಿಕಾರಿಗಳು ಕ್ಷೇತ್ರ ಮಟ್ಟದಲ್ಲಿ ಭೇಟಿ ನೀಡುವ ಜೊತೆಗೆ ತಮ್ಮ ವಿವೇಚನೆ ಬಳಸುವ ಮೂಲಕ ದುಂದು ವೆಚ್ಚಕ್ಕೆ ಅವಕಾಶ ನೀಡದೆ ಜನರಿಗೆ ಸಕಾಲಕ್ಕೆ ನೀರು ದೊರೆಯುವಂತೆ ನೋಡಿಕೊಳ್ಳಲು ಸೂಚನೆ ನೀಡಿದರು.
ಜಿಲ್ಲೆಯ ಕೃಷ್ಣಾ ನದಿ ಪಾತ್ರದ ವಿವಿಧ ಗ್ರಾಮ ಹಾಗೂ ಪ್ರದೇಶಗಳಿಗೆ ಪ್ರತಿ ಐದು ದಿನಕ್ಕೊಮ್ಮೆ ನೀರು ಪೂರೈಸುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು, ನದಿಯಾಧಾರಿತ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮೂಲಕ ಜನರಿಗೆ ಶುದ್ಧ ನೀರು ಪೂರೈಸಲು ಪ್ರಯತ್ನಿಸಬೇಕು. ತೀವ್ರ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಿಗೆ ಸಕಾಲಕ್ಕೆ ನೀರು ಪೂರೈಸಬೇಕು. ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದರು.
ಜಿಲ್ಲೆಯಲ್ಲಿನ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಜೊತೆಗೆ ತೀವ್ರ ನೀರಿನ ಸಮಸ್ಯೆಯನ್ನು ಎದುರಿಸುತ್ತಿರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು. ಅಧಿಕಾರಿಗಳು ಆಯಾ ಗ್ರಾಮಗಳಲ್ಲಿನ ವಸ್ತುಸ್ಥಿತಿ ಸಮಸ್ಯೆಯಾಧಾರಿತವಾಗಿ ಕಾರ್ಯನಿರ್ವಹಿಸಿ ಸಕಾಲಕ್ಕೆ ನೀರು ಪೂರೈಸುವಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಕೊಳವೆ ಬಾವಿಗಳ ನೀರು ಹಾಗೂ ಪೈಪ್ಲೈನ್ ಮೂಲಕ ನೀರು ಸರಬರಾಜುಗೆ ಸಂಬಂಧಪಟ್ಟಂತೆ ಪ್ರತ್ಯೇಕ ಕ್ರೀಯಾಯೋಜನೆಯನ್ವಯ ಕಾರ್ಯನಿರ್ವಹಿಸಿ ನೀರಿನ ಸಮಸ್ಯೆ ನೀಗಿಸಬೇಕು. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಮೂಲಕ ನಿರಂತರ ಈ ಕುರಿತು ಪರಿಶೀಲನೆ ನಡೆಸುವಂತೆ ಸೂಚನೆ ನೀಡಿದರು.
ಬರ ಪರಿಸ್ಥಿತಿ ಎದುರಿಸಲು ಪ್ರಕೃತಿ ವಿಕೋಪ ಪರಿಹಾರ ನಿಧಿ, ಟಾಸ್ಕ್ಪೋಸರ್್ ಅಡಿಯಲ್ಲಿ ಹಾಗೂ ಕ್ರೀಯಾ ಯೋಜನೆಗಳನ್ವಯ ಅನುದಾನ ಲಭ್ಯವಿದ್ದು, ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಅನುದಾನ ಸಮರ್ಪಕ ಬಳಕೆಯಾಗುವಂತೆ ನೋಡಿಕೊಳ್ಳಬೇಕು. ಮುಂಗಾರು ಕೈಕೊಟ್ಟಿದ್ದರಿಂದ ಮೇವಿನ ಕೊರತೆಯು ಸಹ ಹೆಚ್ಚಾಗಿರುವ ಹಿನ್ನಲೆಯಲ್ಲಿ ಪಶು ಸಂಗೋಪನಾ ಇಲಾಖೆ ತಮ್ಮ ನಿರೀಕ್ಷಕರನ್ನು ಕ್ಷೇತ್ರ ಮಟ್ಟದಲ್ಲಿ ವಸ್ತುಸ್ಥಿತಿಯನ್ನು ಅರಿತು ಮೇವನ್ನು ಸಂಗ್ರಹ ಮಾಡಬೇಕು. ಅವಶ್ಯಕತೆ ಇರುವ ಕಡೆ ಮೇವು ಬ್ಯಾಂಕ್ ಸ್ಥಾಪನೆ ಕುರಿತಂತೆ ಪರಿಶೀಲನೆ ನಡೆಸಿ, ಕ್ರಮ ಕೈಗೊಳ್ಳಬೇಕು. ಸಂಬಂಧಪಟ್ಟವರಿಗೆ ಮೇವಿನ ಕಿಟ್ಗಳನ್ನು ವಿತರಿಸಿರುವ ಬಗ್ಗೆ ಮಾಹಿತಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಗುಳೆ ಸಮಸ್ಯೆ ಇರದಂತೆ ನಿಗಾ ವಹಿಸಬೇಕು. ಗುಳೆ ಹೆಚ್ಚಿರುವ ಗ್ರಾಮಗಳನ್ನು ಗುರುತಿಸಬೇಕು. ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಬಡಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಮೂಲಕ ಗುಳೆ ಸಮಸ್ಯೆ ನಿವಾರಣೆಗೆ ಗಮನ ಹರಿಸಬೇಕು. ಈ ಕುರಿತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಅವಶ್ಯಕ ಗಮನ ಹರಿಸುವಂತೆ ಸಲಹೆ ನೀಡಿದರು. ಸಭೆಯಲ್ಲಿ ಪಂಚಾಯತ್ ರಾಜ್ ಇಂಜಿನೀಯರಿಂಗ್ ವಿಭಾಗ, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ, ನಗರ ಸ್ಥಳೀಯ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ನಿವಾರಣೆ ಸೇರಿದಂತೆ ಇನ್ನಿತರ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು. ಪಾವರ್ ಪಾಯಿಂಟ್ ಪ್ರಸೆಂಟೇಶನ್ ಮೂಲಕ ಜಿಲ್ಲೆಯಲ್ಲಿ ಕೈಗೊಳ್ಳಲಾಗುತ್ತಿರುವ ಬರ ನಿರ್ವಹಣಾ ಕಾರ್ಯಗಳ ಬಗ್ಗೆ ಪ್ರಾದೇಶಿಕ ಆಯುಕ್ತರಿಗೆ ಮಾಹಿತಿ ನೀಡಲಾಯಿತು.
ಅಪರ ಜಿಲ್ಲಾಧಿಕಾರಿ ಎಚ್.ಪ್ರಸನ್ನ, ಜಿಲ್ಲಾ ಪಂಚಾಯತ್ ಉಪ ಕಾರ್ಯದಶರ್ಿ ಅಮರೇಶ ನಾಯಕ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.