ನೀರವ್ ಮೋದಿಗೆ ಮತ್ತೊಮ್ಮೆ ಜಾಮೀನು ನಿರಾಕರಿಸಿದ ಬ್ರಿಟನ್ ಕೋರ್ಟ್
ಲಂಡನ್, ಏಪ್ರಿಲ್ 26 ತಲೆಮರೆಸಿಕೊಂಡಿರುವ ಭಾರತೀಯ ವಜ್ರೋದ್ಯಮಿ ನೀರವ್ ಮೋದಿಗೆ ಲಂಡನ್ ನ ವೆಸ್ಟ್ ಮಿನಿಸ್ಟರ್ ಮ್ಯಾಜಿಸ್ಟ್ರೇಟ್ಸ್ ಕೋಟರ್್ ಶುಕ್ರವಾರ ಜಾಮೀನು ನಿರಾಕರಿಸಿದೆ. ನೀರವ್ ಮೋದಿ ಅವರನ್ನು ವೀಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿತ್ತು ಎಂದು ವರದಿ ತಿಳಿಸಿದೆ. ಬ್ರಿಟನ್ ನ್ಯಾಯಾಲಯ ಮತ್ತೊಮ್ಮೆ ಜಾಮೀನು ನಿರಾಕರಿಸುವ ಮೂಲಕ ತಲೆಮರೆಸಿಕೊಂಡಿರುವ ವಜ್ರಾಭರಣ ಉದ್ಯಮಿಗೆ ತೀವ್ರ ಹಿನ್ನಡೆ ಉಂಟಾಗಿದೆ ಎಂದು ಹೇಳಲಾಗುತ್ತಿದೆ..
ಇದರಿಂದಾಗಿ ನೀರವ್ ಮೋದಿ, ಜೈಲಿನಲ್ಲಿ ಕಳೆಯುವಂತಾಗಿದೆ. ವೆಸ್ಟ್ ಮಿನಿಸ್ಟರ್ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸುವ ಸಾಧ್ಯತೆಯಿದೆ ಎಂದು ಕಾನೂನು ತಜ್ಞರು ಹೇಳಿದ್ದಾರೆ.
ಭಾರತದಿಂದ ತಲೆಮರೆಸಿಕೊಂಡಿರುವ ವಜ್ರೋದ್ಯಮಿ ನೀರವ್ ಮೋದಿ ಜಾಮೀನಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಪ್ರಾಸಿಕ್ಯೂಷನ್, ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಸಾಕ್ಷಿದಾರನಾಗಿರುವ ಮಾಜಿ ಉದ್ಯೋಗಿಯೊಬ್ಬರಿಗೆ ಯಾವುದೇ ಮಾಹಿತಿ ಬಹಿರಂಗಪಡಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದು, ಯಾವುದೇ ಕಾರಣಕ್ಕೂ ನೀರವ್ ಮೋದಿಗೆ ಜಾಮೀನು ಮಂಜೂರು ಮಾಡಬಾರದು ಎಂದು ವಾದಿಸಿದ ಪರಿಣಾಮ ಜಾಮೀನು ನಿರಾಕರಿಸಲಾಗಿದೆ.