ಮಕ್ಕಳ ಹಕ್ಕುಗಳ ರಕ್ಷಣೆ ನಮ್ಮೆಲ್ಲರ ಹೊಣೆ: ಶಶಿಧರ ಕೋಸಂಬೆ
ಬಳ್ಳಾರಿ 02:ಮಕ್ಕಳ ಹಕ್ಕುಗಳ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದ್ದು, ಪ್ರತಿಯೊಂದು ಮಗುವಿಗೂ ಶಿಕ್ಷಣ ನೀಡಿ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸಹಕರಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ ಕೋಸಂಬೆ ಅವರು ಹೇಳಿದರು.
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ವಿಶೇಷ ಪೊಲೀಸ್ ಘಟಕ, ಕಾರ್ಮಿಕ ಇಲಾಖೆ, ಶಾಲಾ ಶಿಕ್ಷಣಾ ಮತ್ತು ಸಾಕ್ಷಾರತಾ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಪಂಚಾಯತ್‌ನ ನಜೀರ್ ಸಭಾಂಗಣದಲ್ಲಿ ಆರ್‌ಟಿಇ ಕಾಯ್ದೆಯಡಿ ‘ಶಾಲೆಯಲ್ಲಿದೆ ಶಿಕ್ಷಣ ಜೊತೆಗೆ ರಕ್ಷಣೆ’ ಮತ್ತು ‘ಮಕ್ಕಳೊಂದಿಗೆ ಮುಕ್ತ ಸಂವಾದ ಮತ್ತು ಆಹವಾಲು ಸ್ವೀಕಾರ ಕಾರ್ಯಕ್ರಮ’ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಯೊಂದು ಮಗುವಿಗೂ ಜನ್ಮ ಹೊಂದುವ, ಜೀವಿಸುವ, ಉತ್ತಮ ಆರೋಗ್ಯ ಸೇವೆ, ಪೌಷ್ಠಿಕ ಆಹಾರ ಪಡೆದು ದೇಶದ ಪ್ರಜೆ ಎಂದು ಗುರುತಿಸಿ ಕೊಂಡು ಬದುಕುವ ಹಕ್ಕಿದೆ. ಅದರಂತೆ ಶಿಕ್ಷಣ ಪಡೆದು ವಿಕಾಸ ಹೊಂದುವ ಹಕ್ಕಿದೆ ಎಂದು ಅವರು ತಿಳಿಸಿದರು.
ಉಚಿತ ಮತ್ತು ಕಡ್ಡಾಯ ಶಿಕ್ಷಣ ಪರಿಚ್ಛೇದ ‘21ಎ’ ಅಡಿ ಸಾಂವಿಧಾನಿಕ ಮೂಲಭೂತ ಹಕ್ಕಾಗಿದೆ. ಸರ್ಕಾರಿ ಶಾಲೆಗಳಲ್ಲಿ ಉಚಿತ ಊಟ, ಸಮವಸ್ತ್ರ, ಪೌಷ್ಠಿಕ ಆಹಾರಗಳೊಂದಿಗೆ ಗುಣಮಟ್ಟ ಶಿಕ್ಷಣ ನೀಡಲಾಗುತ್ತಿದೆ. ಪೋಷಕರಲ್ಲಿ ಸರ್ಕಾರಿ ಶಾಲೆಗಳ ಮೇಲಿನ ಪೂರ್ವಾಗ್ರಹವನ್ನು ಹೋಗಲಾಡಿಸಿ ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಮಕ್ಕಳು ದಾಖಲಾಗುವಂತೆ ಕ್ರಮವಹಿಸಬೇಕು ಎಂದು ಹೇಳಿದರು.
ಮಕ್ಕಳಿಗೆ ಮನೆ ಹೊರತುಪಡಿಸಿ, ಅತ್ಯಂತ ಸುರಕ್ಷಿತ ಸ್ಥಳ ಎಂದರೆ ಅದು ಶಾಲೆಯಾಗಿದೆ. ಪ್ರಸ್ತುತ ದಿನಮಾನಗಳಲ್ಲಿ ಸರ್ಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆ ಕ್ಷೀಣಿಸುತ್ತಿದ್ದು, ಕಳೆದ ಸಾಲಿನಲ್ಲಿ ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿಯೇ ಸುಮಾರು 60 ಸಾವಿರಕ್ಕೂ ಹೆಚ್ಚು ಮಕ್ಕಳು ಶಾಲೆಯಿಂದ ಹೊರಗುಳಿದಿರುವುದನ್ನು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ವರದಿ ಮಾಡಿದೆ. ರಾಜ್ಯದಲ್ಲಿ 2012 ರಿಂದ 2024 ರವರೆಗೆ 3,800 ಕ್ಕೂ ಹೆಚ್ಚು ಪೋಕ್ಸೋ ಪ್ರಕರಣಗಳು ದಾಖಲಾಗಿವೆ ಎಂದರು.
ಜಿಲ್ಲೆಯ ಪ್ರತಿ ಶಾಲೆಗಳಲ್ಲಿ ಮಕ್ಕಳ ಸುರಕ್ಷತಾ ಸಮಿತಿ ರಚಿಸಬೇಕು. ತಿಂಗಳಿಗೊಮ್ಮೆ ಕಡ್ಡಾಯವಾಗಿ ಪ್ರಗತಿ ಪರೀಶೀಲನಾ ಸಭೆ ನಡೆಸಬೇಕು. ಮಕ್ಕಳ ರಕ್ಷಣೆ, ಹಕ್ಕುಗಳ ಬಗ್ಗೆ ಚರ್ಚಿಸುವುದರೊಂದಿಗೆ ಅರಿವು ಮೂಡಿಸುವ ಕೆಲಸ ಮಾಡಬೇಕು. ಪ್ರತಿ ಶಾಲೆಯಲ್ಲೂ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಗೋಡೆ ಬರಹದಲ್ಲಿ ಬರೆಯಬೇಕು ಎಂದು ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಮಾತನಾಡಿ, ಮಕ್ಕಳು ಸಂವಿಧಾನಾತ್ಮಕವಾಗಿರುವ ಹಕ್ಕುಗಳನ್ನು ಪಡೆದುಕೊಳ್ಳಬೇಕು. ಜೀವನಾಧಾರಿತ ಮೌಲ್ಯ ಶಿಕ್ಷಣ ಹೊಂದುವ ಮೂಲಕ ಸಮಾಜದಲ್ಲಿ ಜವಾಬ್ದಾರಿಯುತ ನಾಗರಿಕರಾಗಬೇಕು ಎಂದು ಹೇಳಿದರು.
ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ವಿಜಯಲಕ್ಷ್ಮೀ ಮೈದೂರು ಅವರು ಮಾತನಾಡಿ, ಮಕ್ಕಳು ತಮ್ಮ ಭವಿಷ್ಯವನ್ನು ತಾವೇ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾಜಿ ಸದಸ್ಯರಾದ ಹೆಚ್.ಸಿ.ರಾಘವೇಂದ್ರ ಭಟ್ ಅವರು ಮಕ್ಕಳೊಂದಿಗೆ ಸಂವಾದ ನಡೆಸಿದರು.
*ಸಂವಾದ:*
ಕುರುಗೋಡು ತಾಲ್ಲೂಕಿನ ಸೋಮಸಮುದ್ರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ವರಲಕ್ಷ್ಮಿ ಮಾತನಾಡಿ, ಗ್ರಾಮದಲ್ಲಿ ಶಾಲೆಯ ಕಟ್ಟಡ ಅವಶ್ಯವಿದೆ ಎಂದು ಪ್ರಸ್ತಾಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದಲಿಂಗಮೂರ್ತಿ ಅವರು, ಈಗಾಗಲೇ ಶಾಲೆಯು ಉನ್ನತೀಕರಿಸಿದ ಶಾಲೆಯಾಗಿದ್ದು, ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ನೂತನ ಕಟ್ಟಡ ಮಂಜೂರಾಗಿದೆ. ಟೆಂಡರ್ ಪ್ರಕ್ರಿಯೆ ಹಂತದಲ್ಲಿದೆ ಎಂದು ತಿಳಿಸಿದರು.
ದೇವಲಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಶಶಿಕಲಾ ಮಾತನಾಡಿ, ಗ್ರಾಮದಲ್ಲಿ ಬಾಲ್ಯವಿವಾಹ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದ್ದು, ಸುಧಾರಣೆಯಾಗುತ್ತಿಲ್ಲ ಎಂದು ಪ್ರಶ್ನಿಸಿದರು. ಈ ಕುರಿತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಳೆನಾಗಪ್ಪ ಅವರು ಪ್ರತಿಕ್ರಿಯಿಸಿ, ಬಾಲ್ಯವಿವಾಹ ಪ್ರಕರಣಗಳು ಕಂಡುಬಂದಲ್ಲಿ ಕೂಡಲೇ ಸಹಾಯವಾಣಿ ಸಂಖ್ಯೆ 1098 ಕರೆ ಮಾಡಿ ಮಾಹಿತಿ ನೀಡಬೇಕು. ಬಾಲ್ಯವಿವಾಹ ದುಷ್ಪರಿಣಾಮ ಕುರಿತು ಗ್ರಾಮ ಪಂಚಾಯತ್ ಮಟ್ಟದಲ್ಲಿ ಹೆಚ್ಚು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.
ಮತ್ತೋರ್ವ ವಿದ್ಯಾರ್ಥಿನಿ ಸಂಗೀತಾ.ಯು ಮಾತನಾಡಿ, ನಮ್ಮದು ಉಳೂರು ಗ್ರಾಮವಾಗಿದ್ದು, ಪ್ರೌಢ ವಿದ್ಯಾಭ್ಯಾಸಕ್ಕೆ ತಾಳೂರು ಗ್ರಾಮಕ್ಕೆ ಬರಬೇಕು. ಆದರೆ, ಬಸ್ ಕೊರತೆ ಇದ್ದು, ಒಮ್ಮೊಮ್ಮೆ ನಡೆದುಕೊಂಡೇ ಹೋಗಿಬರಬೇಕು. ಸಂಜೆ ಸಮಯದಲ್ಲಿ ಕಷ್ಟಕರವಾಗುತ್ತದೆ ಎಂದು ಸಭೆಗೆ ತಿಳಿಸಿದರು. ಸದಸ್ಯರಾದ ಶಶಿಧರ ಕೋಸಂಬೆ ಅವರು ಪ್ರತಿಕ್ರಿಯಿಸಿ, ಈ ಕುರಿತು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಪತ್ರ ವ್ಯವಹಾರ ನಡೆಸಬೇಕು ಎಂದು ಬಿಇಒಗಳಿಗೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಎಎಸ್ಪಿ ನವೀನ್ ಕುಮಾರ್, ಜಿಲ್ಲಾ ಕಾರ್ಮಿಕ ಅಧಿಕಾರಿ ಸಿದ್ದಪ್ಪ ಖೈನೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಜಲಾಲಪ್ಪ.ಎ.ಕೆ., ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಳೆನಾಗಪ್ಪ ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದಲಿಂಗಮೂರ್ತಿ, ಬಳ್ಳಾರಿ ನಗರ ಉಪವಿಭಾಗ ಡಿವೈಎಸ್ಪಿ ನಂದಾರೆಡ್ಡಿ ಸೇರಿದಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು ಮತ್ತು ಸರ್ಕಾರಿ ಮಕ್ಕಳ ಪಾಲನಾ ಸಂಸ್ಥೆಯ ಅಧೀಕ್ಷಕರುಗಳು, ವಿವಿಧ ಶಾಲೆಗಳ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.