ವಿದ್ಯಾರ್ಥಿಗಳಿಗೆ ಸೂಕ್ತ ಬಸ್ನ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಮನವಿ
ಲೋಕದರ್ಶನ ವರದಿ,
ಜಮಖಂಡಿ 29: ರಾಜ್ಯ ಸರ್ಕಾರ ಶಕ್ತಿ ಯೋಜನೆ ಜಾರಿಗೊಳಿಸಿದ್ದರಿಂದ ಗ್ರಾಮೀಣ ಪ್ರದೇಶದ ವಿದ್ಯಾಥರ್ಿಗಳಿಗೆ ಸೂಕ್ತ ಬಸ್ ವ್ಯವಸ್ಥೆಯಾಗುತ್ತಿಲ್ಲ, ಗ್ರಾಮೀಣ ಭಾಗಕ್ಕೆ ಹೋಗಿ ಬರುವ ಬಸ್ಗಳೆಲ್ಲ ಭರ್ತಿಯಾಗಿದ್ದು, ವಿದ್ಯಾರ್ಥಿಗಳಿಗೆ ಅದರಲ್ಲಿ ಜಾಗ ಸಿಗದೇ ಶಾಲೆ, ಕಾಲೇಜುಗಳಿಗೆ ಚಕ್ಕರ್ ಹೊಡೆಯುವ ಪ್ರಸಂಗ ಬಂದೊದಗಿದೆ. ರಾಜ್ಯ ಸರ್ಕಾರ ಕೂಡಲೇ ವಿದ್ಯಾರ್ಥಿಗಳಿಗೆ ಸೂಕ್ತ ಬಸ್ಸಿನ ವ್ಯವಸ್ಥೆ ಕಲ್ಪಿಸಿ ವಿದ್ಯಾರ್ಥಿಗಳ ಅಧ್ಯಯನಕ್ಕೆ ಅನೂಕೂಲ ಮಾಡಿ ಕೊಡಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತಹಸೀಲ್ದಾರ ಮತ್ತು ಸಾರಿಗೆ ಘಟಕದ ವ್ಯವಸ್ಥಾಪಕ ಸಂಗಮೇಶ ಮಟೋಳ್ಳಿ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಜೂನ್ ತಿಂಗಳಿಂದ ಶೈಕ್ಷಣಿಕ ವರ್ಷ ಪ್ರಾರಂಭವಾಗಿ ಎಲ್ಲಾ ವಿದ್ಯಾರ್ಥಿಗಳು, ಶಾಲಾ, ಕಾಲೇಜುಗಳಿಗೆ ಹಾಜರಾಗಬೇಕಾಗುತ್ತಿದೆ. ವಿದ್ಯಾರ್ಥಿಗಳು ಹಳ್ಳಿಯಿಂದ ಪಟ್ಟಣದ ಕಾಲೇಜುಗಳಿಗೆ ವಿದ್ಯಾಭ್ಯಾಸ ಮಾಡಲು ಬರುವತಂಹ ವಿದ್ಯಾರ್ಥಿಗಳಿಗೆ ಬಸ್ಸಿನ ಸಮಸ್ಯೆ ಉಂಟಾಗಿದೆ. ಇದರಿಂದ ಸರಿಯಾಗಿ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಪರೀಕ್ಷೆಗಳಿಗೆ ಹಾಜರಾಗಲು ವಿದ್ಯಾರ್ಥಿಗಳಿಗೆ ಕಷ್ಟದ ಪರಿಸ್ಥಿತಿಯನ್ನುಂಟು ಮಾಡಿದೆ.
ಸಾಮಾನ್ಯವಾಗಿ ಹಳ್ಳಿಗಳಲ್ಲಿ ಸಮರ್ಪಕವಾಗಿ ಎಷ್ಟು ಸಂಖ್ಯೆಯಲ್ಲಿ ಬಸ್ಸಿನ ಸಂಖ್ಯೆ ಬೇಕೋ ಅಷ್ಟು ಸಂಖ್ಯೆಯಲ್ಲಿ ಬಸ್ಸುಗಳು ಸಂಚರಿಸುವುದಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳು ಶಾಲಾ, ಕಾಲೇಜುಗಳಿಗೆ ನಡೆದುಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.
ವಿದ್ಯಾರ್ಥಿಗಳು, ಶಾಲಾ-ಕಾಲೇಜಿಗೆ ತೆರಳುವ ಸಮಯದಲ್ಲಿ ಹಾಗೂ ಹಿಂತಿರುಗುವ ವೇಳೆ ಬಸ್ಸಿನ ಸಂಖ್ಯೆ ಹೆಚ್ಚಿಸಿಕೊಡಬೇಕು.ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಬಸ್ಸಿನ ವ್ಯವಸ್ಥೆಯನ್ನು ಕಲ್ಪಿಸಿಕೊಡಬೇಕು. ಈಗಾಗಲೇ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಬಸ್ಸಿನ ಪ್ರಯಾಣವನ್ನು ಒದಗಿಸಿಕೊಟ್ಟಿರುವ ಹಾಗೆ ಮುಂದಿನ ಯೋಜನೆಗಳಲ್ಲಿ ವಿದ್ಯಾರ್ಥಿಗಳಿಗೂ ಉಚಿತ ಬಸ್ಸಿನ ಪ್ರಯಾಣ ಒದಗಿಸಿಕೊಡಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಗ್ರಹಿಸಿದರು.