ಮಾದಕ ವ್ಯಸನದಿಂದ ದೂರವಿದ್ದು ಆರೋಗ್ಯಕರ ಜೀವನ ರೂಪಿಸಿಕೊಳ್ಳಿ: ತಜ್ಞರ ಕರೆ
ಲೋಕದರ್ಶನ ವರದಿ
ಧಾರವಾಡ, ಆ. 3: ಜೆ.ಎಸ್.ಎಸ್. ಬನಶಂಕರಿ ಕಲಾ, ವಾಣಿಜ್ಯ ಮತ್ತು ಶಾಂತಕುಮಾರ ಗುಬ್ಬಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ ಎನ್ಎಸ್ಎಸ್ ಹಾಗೂ ಧಾರವಾಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಶ್ರೀ ಮಹಾಂತ ಶಿವಯೋಗಿಗಳ ಜನ್ಮದಿನದ ಅಂಗವಾಗಿ "ವ್ಯಸನ ಮುಕ್ತ ದಿನಾಚರಣೆ" ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಧಾರವಾಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ. ಪರಶುರಾಮ ಎಫ್.ಕೆ. ಮಾತನಾಡಿ, ಯುವಕರು ಯಾವುದೇ ಮಾದಕ ವ್ಯಸನಗಳಿಗೆ ಬಲಿಯಾಗದೆ ಆರೋಗ್ಯಕರ ಜೀವನ ನಡೆಸಬೇಕು. ವೈಯಕ್ತಿಕ ಆರೋಗ್ಯದ ಜೊತೆಗೆ ಕುಟುಂಬ ಹಾಗೂ ಸಮಾಜದ ಆರೋಗ್ಯ ಕಾಪಾಡುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಹೇಳಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರ ಎಂ.ಐ. ಕಲ್ಲಪ್ಪನವರ್ ಅವರು, ಇತ್ತೀಚಿನ ದಿನಗಳಲ್ಲಿ ಯುವಕರು ಹಾಗೂ ಮಕ್ಕಳಲ್ಲಿ ತಂಬಾಕು ಮತ್ತು ಇತರ ಮಾದಕ ವ್ಯಸನಗಳ ಬಳಕೆ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಇಂತಹ ದುಶ್ಚಟಗಳಿಂದ ಕ್ಯಾನ್ಸರ್ ಸೇರಿದಂತೆ ಅನೇಕ ಗಂಭೀರ ಕಾಯಿಲೆಗಳು ಉಂಟಾಗುತ್ತವೆ. ಸಮಾಜಘಾತುಕ ಚಟುವಟಿಕೆಗಳಿಗೂ ವ್ಯಸನ ಪ್ರಮುಖ ಕಾರಣವಾಗುತ್ತಿದೆ ಎಂದು ಎಚ್ಚರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ವೆಂಕಟೇಶ ಮುತಾಲಿಕ್ ವಿದ್ಯಾರ್ಥಿಗಳಿಗೆ ವ್ಯಸನಮುಕ್ತ ಜೀವನದ ಪ್ರತಿಜ್ಞಾವಿಧಿ ಬೋಧಿಸಿದರು. ಆರೋಗ್ಯವಂತ ಯುವಜನತೆಯೇ ದೇಶದ ನಿಜವಾದ ಸಂಪತ್ತಾಗಿದ್ದು, ತಂಬಾಕು, ಗುಟ್ಕಾ, ಮದ್ಯಪಾನ ಸೇರಿದಂತೆ ಎಲ್ಲ ರೀತಿಯ ದುಶ್ಚಟಗಳಿಂದ ದೂರವಿದ್ದು ಉತ್ತಮ ಜೀವನಶೈಲಿ ರೂಢಿಸಿಕೊಳ್ಳಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿವಿಧ ಅಧಿಕಾರಿಗಳು, ಐಕ್ಯೂಎಸಿ ಸಂಯೋಜಕ ಡಾ. ಶೌಕತ್ ಅಲಿ ಮೇಗಳಮನಿ, ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಗಳಾದ ಡಾ. ವೀರ್ಪ ಪೂಜಾರ ಹಾಗೂ ಡಾ. ಜಯಶ್ರೀ ಕುರಂದವಾಡ, ಉಪನ್ಯಾಸಕರು, ವಿದ್ಯಾರ್ಥಿಗಳು ಮತ್ತು ಎನ್ಎಸ್ಎಸ್ ಸ್ವಯಂಸೇವಕರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ದವಳಮ್ಮ ಮತ್ತು ತಂಡ ಪ್ರಾರ್ಥನೆ ನಡೆಸಿದರು. ಅಮೃತಾ ಬಡಿಗೇರ ನಿರೂಪಣೆ ಮಾಡಿದ್ದು, ಸ್ಪೂರ್ತಿ ವಂದಿಸಿದರು.