ಸಿಡ್ನಿ: ಬೀಚ್‌ನಲ್ಲಿ ಗುಂಡಿನ ದಾಳಿ: ಕನಿಷ್ಠ 12 ಮಂದಿ ಸಾವು
ಸಿಡ್ನಿ: ಆಸ್ಟ್ರೇಲಿಯಾದ ಸಿಡ್ನಿ ನಗರದ ಪ್ರಸಿದ್ಧ ಬೋಂಡಿ ಬೀಚ್ನಲ್ಲಿ ನಡೆದ ಭೀಕರ ಗುಂಡಿನ ದಾಳಿಯಲ್ಲಿ ಮಕ್ಕಳು ಮತ್ತು ಪೊಲೀಸ್ ಅಧಿಕಾರಿಯೊಬ್ಬರು ಸೇರಿದಂತೆ ಕನಿಷ್ಠ 12 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡ ಘಟನೆ ಭಾನುವಾರ ಸಂಜೆ ನಡೆದಿದೆ.
ಮಕ್ಕಳ ಆಟದ ಮೈದಾನದ ಬಳಿಯ ಬೋಂಡಿ ಬೀಚ್ ಪಾರ್ಕ್ನಲ್ಲಿ ಹನುಕ್ಕಾ ಹಬ್ಬದ ಆಚರಣೆಗೆ ಸಂಬಂಧಿಸಿದ ‘ಚಾನುಕಾ ಬೈ ದಿ ಸೀ’ ಕಾರ್ಯಕ್ರಮಕ್ಕಾಗಿ ನೂರಾರು ಜನರು ಬೀಚ್ ನಲ್ಲಿ ಸೇರಿದ್ದ ಸಂದರ್ಭದಲ್ಲೇ ಈ ಘಟನೆ ನಡೆದಿದೆ.
ಯಹೂದಿಗಳ ಹನುಕ್ಕಾ ಆಚರಣೆಯನ್ನು ಗುರಿಯಾಗಿಸಿ ಈ ದಾಳಿ ನಡೆಸಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಈ ಹತ್ಯಾಕಾಂಡದಲ್ಲಿ ಭಾಗಿಯಾಗಿದ್ದ ಒಬ್ಬನನ್ನು ನವೀದ್ ಅಕ್ರಮ್ ಎಂದು ಗುರುತಿಸಲಾಗಿದೆ.
ದಾಳಿಯಲ್ಲಿ ಒಬ್ಬ ಬಂದೂಕುಧಾರಿ ಸ್ಥಳದಲ್ಲೇ ಮೃತಪಟ್ಟಿದ್ದು,ಮತ್ತೊಬ್ಬನಿಗೆ ಗುಂಡು ತಗುಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾಸ್ಥಳಕ್ಕೆ ಎನ್ಎಸ್ಡಬ್ಲ್ಯೂ ಪೊಲೀಸರು ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಪ್ರಧಾನಿ ಆಂಥೋನಿ ಅಲ್ಬನೀಸ್ ಪ್ರತಿಕ್ರಿಯೆ
ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್, ಬೋಂಡಿಯಲ್ಲಿನ ದೃಶ್ಯಗಳು ಅತ್ಯಂತ ಆಘಾತಕಾರಿಯಾಗಿದೆ. ಪೊಲೀಸರು ಮತ್ತು ತುರ್ತು ಸೇವಾ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ,” ಎಂದು ಹೇಳಿದ್ದಾರೆ. NSW ಸರ್ಕಾರ ಮತ್ತು ಫೆಡರಲ್ ಪೊಲೀಸರೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ಅವರು ತಿಳಿಸಿದ್ದಾರೆ.