ಶೌಚಾಲಯ ಗುಂಡಿ ಸ್ವಚ್ಛತೆಗೆ ಸಕ್ಕಿಂಗ್, ಜೆಟ್ಟಿಂಗ್ ಯಂತ್ರ ಬಳಸಿ: ಜಿಲ್ಲಾಧಿಕಾರಿ
Use suction and jetting machines to clean toilet pits: Deputy Commissioner
ಲೋಕದರ್ಶನ ವರದಿ
ಹಾವೇರಿ, ಸೆ. 29: ಸರ್ಕಾರಿ ಕಚೇರಿಗಳು, ವಸತಿ ನಿಲಯಗಳು ಹಾಗೂ ಆಸ್ಪತ್ರೆಗಳು ಸೇರಿದಂತೆ ಎಲ್ಲೆಡೆ ಶೌಚಾಲಯ ಗುಂಡಿಗಳನ್ನು ಸ್ವಚ್ಛಗೊಳಿಸಲು ಸಕ್ಕಿಂಗ್ ಮತ್ತು ಜೆಟ್ಟಿಂಗ್ ಯಂತ್ರಗಳನ್ನು ಬಳಸಬೇಕು ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಮ್ಯಾನುಯಲ್ ಸ್ಕ್ಯಾವೆಂಜರ್ ಹಾಗೂ ಇನ್ಸ್ಯಾನಿಟರಿ ಲ್ಯಾಟ್ರಿನ್ ಮತ್ತು ಸಫಾಯಿ ಕರ್ಮಚಾರಿಗಳ ಕುರಿತ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶೌಚಾಲಯ ಗುಂಡಿ ಸ್ವಚ್ಛತೆಗೆ ಆದ್ಯತೆ
ಸವಣೂರಿನಲ್ಲಿ ಶೌಚಾಲಯ ಗುಂಡಿ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ವ್ಯಕ್ತಿಗಳನ್ನು ಬಳಸಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಕುಸನೂರಿನಲ್ಲಿಯೂ ಇಂತಹ ಪ್ರಕರಣ ನಡೆದಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಅಧಿಕಾರಿಗಳು ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಶೌಚಾಲಯ ಗುಂಡಿಗಳು ತುಂಬುವವರೆಗೆ ಕಾಯದೆ, ಮುಂಚಿತವಾಗಿಯೇ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿ ನೀಡಬೇಕು. ಅಗತ್ಯವಿದ್ದಲ್ಲಿ ದೂರವಾಣಿ ಮೂಲಕವೂ ತಿಳಿಸಿ, ಯಂತ್ರಗಳ ಮೂಲಕ ಸ್ವಚ್ಛಗೊಳಿಸುವ ವ್ಯವಸ್ಥೆ ಮಾಡಬೇಕು. ಯಾವುದೇ ಕಾರಣಕ್ಕೂ ಶೌಚಾಲಯ ಗುಂಡಿಗಳನ್ನು ಸ್ವಚ್ಛಗೊಳಿಸಲು ವ್ಯಕ್ತಿಗಳನ್ನು ಬಳಸಬಾರದು ಎಂದು ಅವರು ಸ್ಪಷ್ಟಪಡಿಸಿದರು.
ಸ್ಥಳೀಯ ನಗರ ಸಂಸ್ಥೆಗಳ ಮುಖ್ಯಾಧಿಕಾರಿಗಳು ಶೌಚಾಲಯ ಗುಂಡಿಗಳ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು. ಸಕ್ಕಿಂಗ್ ಮತ್ತು ಜೆಟ್ಟಿಂಗ್ ಯಂತ್ರಗಳನ್ನು ಸುಸ್ಥಿತಿಯಲ್ಲಿಟ್ಟುಕೊಂಡು, ಅಗತ್ಯ ಸಂದರ್ಭದಲ್ಲಿ ತಕ್ಷಣ ಬಳಕೆಗೆ ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ
ಮ್ಯಾನುಯಲ್ ಸ್ಕ್ಯಾವೆಂಜಿಂಗ್ ನಿಷೇಧ ಕಾಯ್ದೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಸಂಬಂಧಿಸಿದ ಇಲಾಖೆಗಳು ಸಮನ್ವಯದಿಂದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಸಮಿತಿ ನಾಮನಿರ್ದೇಶಿತ ಸದಸ್ಯ ಸುಭಾಷ್ ಬೆಂಗಳೂರು ಮಾತನಾಡಿ, ಶೌಚಾಲಯ ಗುಂಡಿಗಳ ಸ್ವಚ್ಛತೆಗೆ ಹ್ಪಳ್ಲಿಳ್ತಿದಿಷ್ಲಹ್ಠಿ್ಲೂ್ತೂದಿಷ್ಲ ಮಿಷನ್ ಕಳುಹಿಸುವ ಪ್ರಕ್ರಿಯೆ ವಿಳಂಬವಾಗುತ್ತಿದೆ. ಅಗತ್ಯವಿದ್ದಾಗ ತಕ್ಷಣ ಯಂತ್ರಗಳನ್ನು ಕಳುಹಿಸುವ ವ್ಯವಸ್ಥೆ ಮಾಡಬೇಕು ಎಂದು ಸಭೆಯ ಗಮನಕ್ಕೆ ತಂದರು.
ಮತ್ತೊಬ್ಬ ಸದಸ್ಯ ಭೀಮಪ್ಪ ಮಾತನಾಡಿ, ಕೇಂದ್ರ ಬಸ್ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣಗಳ ಶೌಚಾಲಯಗಳಲ್ಲಿ ಮೂತ್ರ ವಿಸರ್ಜನೆಗೂ ಶುಲ್ಕ ವಿಧಿಸಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳು ಹಾಗೂ ಹಿರಿಯ ನಾಗರಿಕರಿಗೆ ತೊಂದರೆಯಾಗುತ್ತಿದೆ. ಮೂತ್ರ ವಿಸರ್ಜನೆಗೆ ಉಚಿತ ಪ್ರವೇಶ ಕಲ್ಪಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.
ಬಸ್ ನಿಲ್ದಾಣಗಳಲ್ಲಿ ಸೂಚನಾ ಫಲಕ ಅಳವಡಿಸಿ
ಬಸ್ ನಿಲ್ದಾಣಗಳಲ್ಲಿ ಮೂತ್ರ ವಿಸರ್ಜನೆ ಉಚಿತ ಎಂಬುದನ್ನು ತಿಳಿಸುವ ಸೂಚನಾ ಫಲಕಗಳನ್ನು ಅಳವಡಿಸುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು. ಸೂಚನಾ ಫಲಕ ಅಳವಡಿಸಿರುವ ಕುರಿತು ಜಿಪಿಎಸ್ ಆಧಾರಿತ ಛಾಯಾಚಿತ್ರ ವರದಿ ಸಲ್ಲಿಸುವಂತೆ ನಿರ್ದೇಶಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಲ್ಜಿತ್ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಯಶೋಧಾ ವಂಟಗೋಡಿ, ಸವಣೂರು ಉಪವಿಭಾಗಾಧಿಕಾರಿ ಪ್ರಕಾಶ್ ಖೋಡೆ, ಜಿಪಂ ಉಪಕಾರ್ಯದರ್ಶಿ ಡಾ. ಪುನೀತ್, ಜಿಲ್ಲಾ ಸರ್ಕಾರಿ ಅಭಿಯೋಜಕಿ ಶ್ರೀಮತಿ ಸರೋಜಾ ಕೂಡಲಮಠ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸ್ಥಳೀಯ ನಗರ ಸಂಸ್ಥೆಗಳ ಮುಖ್ಯಾಧಿಕಾರಿಗಳು ಹಾಗೂ ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಉಪಸ್ಥಿತರಿದ್ದರು.
ಅಂಗಾರಕ ಸಂಕಷ್ಟಿ : ನೀಲಗಾರ ಗಣೇಶ ದರ್ಶನಕ್ಕೆ ಬೀಗಿ ಬಂದೋಬಸ್ತ್ : ಭಕ್ತರ ಸಂಖ್ಯೆ ಇಳಿಮುಖ
ಹಳೇ ವೈಷಮ್ಯ: ವ್ಯಕ್ತಿಯ ಅಪಹರಣ, ಕೊಲೆ: ನಾಲ್ವರು ಆರೋಪಿಗಳ ಬಂಧನ
ಐವರು ಪೋಲಿಸರಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ನಾಗರಿಕರ ಪ್ರತಿಭಟನೆ, ನೀಲಗಾರ ಗಣಪತಿ ದರ್ಶನ ರದ್ದು
ಗಣೇಶ ವಿಸರ್ಜನೆ ವೇಳೆ ದುರಂತ : ಬೆಳಗಾವಿಯ ಯುವಕ ನೀರಲ್ಲಿ ಮುಳುಗಿ ಸಾವು
ಚನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ನವೆಂಬರ 1ರ ಗಡುವು ನೀಡಿದ ಕನ್ನಡ ಸಂಘಟನೆಗಳು
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ 