ಪಶ್ಚಿಮ ಪದವೀಧರ ಕ್ಷೇತ್ರ: ಅ.23ರಂದು ಮತದಾನ

 ಪಶ್ಚಿಮ ಪದವೀಧರ ಕ್ಷೇತ್ರ: ಅ.23ರಂದು ಮತದಾನ  West Graduates' Constituency: Polling on October 23

ಲೋಕದರ್ಶನ ವರದಿ 

ಹಾವೇರಿ, ಸೆ.25: ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಅಧಿಸೂಚನೆ ಪ್ರಕಟಿಸಿದ್ದು, ಅಕ್ಟೋಬರ್ 23ರಂದು ಮತದಾನ ನಡೆಯಲಿದೆ. ಹಾವೇರಿ ಜಿಲ್ಲೆಯಲ್ಲಿ 22,160 ಪದವೀಧರ ಮತದಾರರು ಹಾಗೂ 28 ಮತಗಟ್ಟೆಗಳನ್ನು ಸಿದ್ಧಪಡಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ವಿಜಯ್ ಮಾಂತೇಶ್ ದಾನಮ್ಮನವರ್ ತಿಳಿಸಿದರು.  

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಶ್ಚಿಮ ಪದವೀಧರ ಕ್ಷೇತ್ರವು ಧಾರವಾಡ, ಉತ್ತರ ಕನ್ನಡ, ಹಾವೇರಿ ಹಾಗೂ ಗದಗ ಜಿಲ್ಲೆಗಳನ್ನು ಒಳಗೊಂಡಿದೆ. ಪ್ರಾದೇಶಿಕ ಆಯುಕ್ತರು ಚುನಾವಣಾಧಿಕಾರಿಯಾಗಿ ಹಾಗೂ ನಾಲ್ಕು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸಹಾಯಕ ಚುನಾವಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದರು.  

ಚುನಾವಣಾ ವೇಳಾಪಟ್ಟಿಯಂತೆ ಸೆ.29ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಅಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಅ.6 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಅ.7ರಂದು ನಾಮಪತ್ರಗಳ ಪರೀಶೀಲನೆ ನಡೆಯಲಿದೆ. ಅ.9ರಂದು ನಾಮಪತ್ರ ಹಿಂಪಡೆಯಲು ಕೊನೆಯ ಅವಕಾಶವಿದೆ. ಅ.23ರಂದು ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದ್ದು, ಅ.27ರಂದು ಮತಗಳ ಎಣಿಕೆ ನಡೆಯಲಿದೆ. ಅ.31ರೊಳಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಮಾಹಿತಿ ನೀಡಿದರು.