ಪ್ರಸಾದ ಸೇವಿಸಿ 107 ಮಂದಿ ಅಸ್ವಸ್ಥ: 60 ಜನರು ಚೇತರಿಕೆಕಬ್ಬೂರು ಆರೋಗ್ಯ ಕೇಂದ್ರಕ್ಕೆ ಶಾಸಕ ದುರ್ಯೋಧನ ಐಹೊಳೆ ಭೇಟಿ; ಸೂಕ್ತ ಚಿಕಿತ್ಸೆ ನೀಡಲು ಸೂಚನೆ
ಚಿಕ್ಕೋಡಿ 22: ತಾಲೂಕಿನ ಜೋಡಟ್ಟಿ ಗ್ರಾಮದ ಶಟ್ಟೇವ್ವ ದೇವಿ ದೇವಸ್ಥಾನದಲ್ಲಿ ದಸರಾ ಹಬ್ಬದ ನಿಮಿತ್ತ ಭಕ್ತರು ತಂದಿದ್ದ ಪ್ರಸಾದ ಸೇವಿಸಿ ಅಸ್ವಸ್ಥಗೊಂಡಿದ್ದ 107ರ ಪೈಕಿ 60 ಜನರು ಚೇತರಿಸಿ ಕೊಂಡಿದ್ದಾರೆ. ಉಳಿದವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಘಟನೆಗೆ ಸಂಬಂಧಿಸಿದಂತೆ ಗುರುವಾರ ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಅವರು ಕಬ್ಬೂರು ಗ್ರಾಮದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಚಿಕಿತ್ಸೆ ಪಡೆಯುತ್ತಿದ್ದವರ ಆರೋಗ್ಯ ವಿಚಾರಿಸಿ ಸಾಂತ್ವನ ಹೇಳಿದರು.
ಬಳಿಕ ಚಿಕ್ಕೋಡಿ ಅಫರ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸೋಮನಗೌಡ ಪಾಟೀಲ ಅವರೊಂದಿಗೆ ಸಮಾಲೋಚನೆ ನಡೆಸಿದ ಶಾಸಕರು, ಅಸ್ವಸ್ಥರಾದ ಎಲ್ಲರಿಗೂ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಬೇಕು ಎಂದು ಸೂಚಿಸಿದರು. ಆರೋಗ್ಯದಲ್ಲಿ ಏರುಪೇರು ಕಂಡುಬಂದರೆ ತಕ್ಷಣ ಹೆಚ್ಚಿನ ಚಿಕಿತ್ಸೆಗಾಗಿ ಚಿಕ್ಕೋಡಿ ಹಾಗೂ ಬೆಳಗಾವಿ ಆಸ್ಪತ್ರೆಗಳಿಗೆ ರವಾನಿಸಬೇಕು. ಅಗತ್ಯ ವೈದ್ಯರು, ಓಷಧಗಳು ಹಾಗೂ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಿ, ರೋಗಿಗಳ ಆರೋಗ್ಯದ ಮೇಲೆ ನಿರಂತರ ನಿಗಾ ವಹಿಸಬೇಕು ಎಂದು ನಿರ್ದೇಶನ ನೀಡಿದರು.
ಕಬ್ಬೂರಿನಲ್ಲಿ ವೈದ್ಯರ ನೇಮಕಕ್ಕೆ ಸೂಚನೆ: ಕಬ್ಬೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಪ್ರಮುಖ ಪಟ್ಟಣವಾಗಿದ್ದು, ಸುತ್ತಮುತ್ತಲಿನ ಗ್ರಾಮಗಳ ಜನರು ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರವನ್ನು ಅವಲಂಬಿಸಿದ್ದಾರೆ. ಹೀಗಾಗಿ ಇಲ್ಲಿ ಅಗತ್ಯ ಸಂಖ್ಯೆಯ ನುರಿತ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಯನ್ನು ಪೂರ್ಣ ಪ್ರಮಾಣದಲ್ಲಿ ನಿಯೋಜಿಸಬೇಕು ತುರ್ತು ಸಂದರ್ಭಗಳಲ್ಲಿ ರೋಗಿಗಳಿಗೆ ತಕ್ಷಣ ಚಿಕಿತ್ಸೆ ದೊರೆಯುವಂತೆ ಅಗತ್ಯ ವ್ಯವಸ್ಥೆ ಕಲ್ಪಿಸಬೇಕು. ವೈದ್ಯರು ಮತ್ತು ಸಿಬ್ಬಂದಿಯ ಕೊರತೆಯಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ಶಾಸಕ ಐಹೊಳೆ ತಿಳಿಸಿದರು.