ರಾಷ್ಟ್ರೀಯ

ವಾರ್ಧಾದಲ್ಲಿ 12 ವರ್ಷದ ಬಾಲಕಿ ಹತ್ಯೆ; ಲೈಂಗಿಕ ದೌರ್ಜನ್ಯದ ಶಂಕೆ

ವಾರ್ಧಾದಲ್ಲಿ 12 ವರ್ಷದ ಬಾಲಕಿ ಹತ್ಯೆ; ಲೈಂಗಿಕ ದೌರ್ಜನ್ಯದ ಶಂಕೆ

ವಾರ್ಧಾ, ಜುಲೈ 16: ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯ ರೋಥಾ ಪ್ರದೇಶದಲ್ಲಿ 12 ವರ್ಷದ ಬಾಲಕಿಯೊಬ್ಬಳು ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಹತ್ಯೆಯಾಗಿರುವ ಶಂಕೆ ವ್ಯಕ್ತವಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಸಾವಂಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿರುವ ಈ ಘಟನೆ ನಡೆದಿದೆ. ಬುಧವಾರ ತಡರಾತ್ರಿ ಗ್ರಾಮದ ಪಕ್ಕದ ಕೃಷಿ ಜಮೀನಿನಲ್ಲಿರುವ ಫಾರ್ಮ್‌ಹೌಸ್‌ನಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಆಕೆಯ ತಲೆ ಜಜ್ಜಿದ ಸ್ಥಿತಿಯಲ್ಲಿ ಕಂಡುಬಂದಿದ್ದು, ತೀವ್ರ ಗಾಯಗಳಿಂದ ಸಾವನ್ನಪ್ಪಿರುವುದು ತಿಳಿದುಬಂದಿದೆ.

ಮೃತದೇಹವು ನಗ್ನ ಸ್ಥಿತಿಯಲ್ಲಿ ಪತ್ತೆಯಾಗಿರುವುದರಿಂದ ಲೈಂಗಿಕ ದೌರ್ಜನ್ಯ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಬಾಲಕಿ ಮಧ್ಯಾಹ್ನ ಸಮೀಪದ ಶಾಲೆಯಿಂದ ಮನೆಗೆ ಹಿಂದಿರುಗಿದ್ದಳು. ಆ ಸಮಯದಲ್ಲಿ ಮನೆಯಲ್ಲಿ ಯಾರೂ ಇರಲಿಲ್ಲ ಎನ್ನಲಾಗಿದೆ. ಕೃಷಿ ಕಾರ್ಮಿಕರಾಗಿರುವ ಆಕೆಯ ಕುಟುಂಬದವರು ಹೊಲದ ಕೆಲಸ ಮುಗಿಸಿ ಮನೆಗೆ ಬಂದಾಗ ಬಾಲಕಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಕಂಡುಬಂದಳು. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳದಲ್ಲೇ ಆಕೆ ಮೃತಪಟ್ಟಿರುವುದಾಗಿ ಘೋಷಿಸಲಾಯಿತು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಈ ಪ್ರಕರಣದ ತನಿಖೆಯನ್ನು ಪೊಲೀಸರು ಆರಂಭಿಸಿದ್ದು, ವಿಚಾರಣೆಗಾಗಿ ಮೂವರು ಶಂಕಿತರನ್ನು ವಶಕ್ಕೆ ಪಡೆದಿದ್ದಾರೆ ಎಂದು ಗೃಹ ಖಾತೆ ರಾಜ್ಯ ಸಚಿವ ಪಂಕಜ್ ಭೋಯರ್ ತಿಳಿಸಿದ್ದಾರೆ.

“ಈ ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಿಸಲಾಗಿದೆ ಮತ್ತು ಮೂವರು ಶಂಕಿತ ಆರೋಪಿಗಳನ್ನು ಬಂಧಿಸಲಾಗಿದೆ” ಎಂದು ಸಚಿವರು ಹೇಳಿದ್ದಾರೆ.

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಬಳಿಕ ಹತ್ಯೆ ಮಾಡಿರಬಹುದು ಎಂಬ ಶಂಕೆಯನ್ನೂ ಅವರು ವ್ಯಕ್ತಪಡಿಸಿದ್ದಾರೆ. ಸಾವಿನ ನಿಖರ ಕಾರಣ ಹಾಗೂ ವಿಧಿವಿಜ್ಞಾನ (ಫೊರೆನ್ಸಿಕ್) ವರದಿಯ ವಿವರಗಳು ಇನ್ನೂ ಲಭ್ಯವಾಗಬೇಕಿವೆ.

ಈ ಘಟನೆ ಗ್ರಾಮದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಕುಟುಂಬದಲ್ಲಿ ಹಾಗೂ ಸ್ಥಳೀಯರಲ್ಲಿ ಭಾರೀ ದುಃಖ ಆವರಿಸಿದೆ.


ಸುದ್ದಿ ಓದಿ