ಸಮೃದ್ಧಿ ಎಕ್ಸ್‌ಪ್ರೆಸ್‌ವೇನಲ್ಲಿ ಟ್ರಕ್ ಡಿಕ್ಕಿ: ದುರ್ಗಾ ಮೂರ್ತಿ ಸಾಗಿಸುತ್ತಿದ್ದ ಪಿಕಪ್ ವಾಹನದಲ್ಲಿದ್ದ 7 ಮಂದಿ ಸಾವು, 18 ಮಂದಿಗೆ ಗಾಯ
ಅಮರಾವತಿ, ಅ. 2: ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ಸಮೃದ್ಧಿ ಮಹಾಮಾರ್ಗದಲ್ಲಿ ಶುಕ್ರವಾರ ಮುಂಜಾನೆ ಟ್ರಕ್ ಮತ್ತು ದುರ್ಗಾ ಮೂರ್ತಿ ಸಾಗಿಸುತ್ತಿದ್ದ ಬೊಲೆರೊ ಪಿಕಪ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕನಿಷ್ಠ ಏಳು ಮಂದಿ ಮೃತಪಟ್ಟಿದ್ದು, 18 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಮರಾವತಿ-ಧಾಮಣಗಾಂವ್ ರೈಲು ನಿಲ್ದಾಣದ ಸಮೀಪದ 97ನೇ ಚೈನ್‌ೇಜ್ ಬಳಿ ಬೆಳಗ್ಗೆ ಸುಮಾರು 3.30ರ ವೇಳೆಗೆ ಅಪಘಾತ ಸಂಭವಿಸಿದೆ. ಶೇಗಾಂವ್‌ನಿಂದ ವಾರ್ಧಾಕ್ಕೆ ದುರ್ಗಾ ಮೂರ್ತಿಯನ್ನು ಕೊಂಡೊಯ್ಯುತ್ತಿದ್ದ ಪಿಕಪ್ ವಾಹನಕ್ಕೆ ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಪಿಕಪ್ ವಾಹನದಲ್ಲಿದ್ದ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 18 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಕೆಲವರು ವಾಹನದೊಳಗೆ ಸಿಲುಕಿಕೊಂಡಿದ್ದರು.
ಮಾಹಿತಿ ಲಭಿಸಿದ ತಕ್ಷಣ ಪೊಲೀಸರು ಹಾಗೂ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಗಾಯಾಳುಗಳನ್ನು ವಾರ್ಧಾ ಜಿಲ್ಲೆಯ ಸಾವಂಗಿ ಮತ್ತು ಸೇವಾಗ್ರಾಮ್‌ನ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ಹಾಗೂ ಹಾನಿಗೊಳಗಾದ ವಾಹನಗಳನ್ನು ತೆರವುಗೊಳಿಸುವ ಕಾರ್ಯ ನಡೆದಿದ್ದರಿಂದ ಎಕ್ಸ್‌ಪ್ರೆಸ್‌ವೇನಲ್ಲಿ ಸಂಚಾರಕ್ಕೆ ಕೆಲಕಾಲ ಅಡಚಣೆ ಉಂಟಾಯಿತು.
ಅಪಘಾತಕ್ಕೆ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಟ್ರಕ್ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಮೃತಪಟ್ಟವರು ಹಾಗೂ ಗಾಯಗೊಂಡವರ ಗುರುತು ಪತ್ತೆ ಕಾರ್ಯ ನಡೆಯುತ್ತಿದೆ. ಘಟನೆಯ ಕುರಿತು ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.