ಅಂಕೋಲಾ–ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: 7 ಪ್ರವಾಸಿಗರ ದುರ್ಮರಣ
ಕಾರವಾರ, ಜುಲೈ 9: ಧಾರವಾಡ ಮೂಲದ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಕ್ರೂಸರ್ ವಾಹನ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಏಳು ಮಂದಿ ಮೃತಪಟ್ಟಿರುವ ದುರ್ಘಟನೆ ಗುರುವಾರ ಮುಂಜಾನೆ ಅಂಕೋಲಾ–ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯ ಅರತಿಬೈಲ್ ಸಮೀಪದ ಬಳಗಾರ ಕ್ರಾಸ್ ಬಳಿ ನಡೆದಿದೆ.
ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಮತ್ತೋರ್ವರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಅವರನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರು ಧಾರವಾಡದಿಂದ ಗೋಕರ್ಣಕ್ಕೆ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕ್ರೂಸರ್ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದ್ದು, ರಸ್ತೆ ಬದಿಯ ಗಟಾರಕ್ಕೆ ಉರುಳಿಬಿದ್ದಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ವಾಹನ ಚಲಾಯಿಸಿರುವುದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಅಂಕೋಲಾದಿಂದ ಯಲ್ಲಾಪುರದತ್ತ ಸಾಗುತ್ತಿದ್ದ ಲಾರಿಗೆ ಎದುರಿನಿಂದ ಬಂದ ಕ್ರೂಸರ್ ವಾಹನ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದಲ್ಲಿ ಮೃತಪಟ್ಟವರನ್ನು ಧಾರವಾಡದ ಸಾಧನಕೇರಿಯ ಅಕ್ಷಯ, ಜಯನಗರದ ಅಭಿಷೇಕ ಈಶ್ವರ್, ಸಪ್ತಾಪುರದ ಅಭಿಷೇಕ ಮಡಬಾವಿ, ಜೆಎಸ್ಎಸ್ ಕ್ಯಾಂಪಸ್ನ ಬಸಪ್ಪ ದೇವಪ್ಪ ಕನಕನವರ, ಮುರುಘಾಮಠದ ಮಂಜುನಾಥ ಅಶೋಕ ಚಳಕಿ ಹಾಗೂ ಕ್ರೂಸರ್ ಚಾಲಕ ಸಂಜೀವ ಮೈಲಾರ ಅಂಗಡಿ (ಕುರುಬಗಟ್ಟಿ) ಎಂದು ಗುರುತಿಸಲಾಗಿದೆ. ಮೆಹಬೂಬ್ ನಗರದ ಸಚಿನ್ ಅವರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ.
ಅಧಿಕಾರಿಗಳ ಭೇಟಿ
ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿಲೀಪ್ ಎಂ.ಎನ್., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಲೀಷ್ ಶಶಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಾಯಾಳುಗಳ ಚಿಕಿತ್ಸೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಶಿರಸಿ ವಿಭಾಗದ ಡಿವೈಎಸ್ಪಿ ಗೀತಾ ಪಾಟೀಲ್, ಮುಂಡಗೋಡ ಸಿಪಿಐ ರಮೇಶ್ ಹಾನಾಪುರ, ಪಿಎಸ್ಐ ಸಿದ್ದಪ್ಪ ಗುಡಿ ಹಾಗೂ ರಾಜಶೇಖರ ವಂದಲಿ ಅವರ ನೇತೃತ್ವದಲ್ಲಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.