ಹೆರಿಗೆ ಆಸ್ಪತ್ರೆ ಆವರಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

 ಹೆರಿಗೆ ಆಸ್ಪತ್ರೆ ಆವರಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ  80th Independence Day celebration on the maternity hospital premises

ಲೋಕದರ್ಶನ ವರದಿ 

ಗದಗ, ಆ.18: ನಗರದ ದಂಡಪ್ಪ ಮಾನ್ವಿ ಹೆರಿಗೆ ಆಸ್ಪತ್ರೆ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಮತ್ತು ನಗರ ಆರೋಗ್ಯ ಕೇಂದ್ರಗಳ ಸಂಯುಕ್ತ ಆಶ್ರಯದಲ್ಲಿ ಆಸ್ಪತ್ರೆ ಆವರಣದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ದೇಶಭಕ್ತಿ ಭಾವನೆಯೊಂದಿಗೆ ಸಂಭ್ರಮದಿಂದ ಆಚರಿಸಲಾಯಿತು.  

ಡಿಎಂಎ ಆಸ್ಪತ್ರೆಯ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ. ಅಜಯಪ್ರಕಾಶ ಭಸರಿ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಆರೋಗ್ಯವಂತ ದೇಶ ನಿರ್ಮಾಣಕ್ಕೆ ಆರೋಗ್ಯವಂತ ಸಮಾಜ ಅಗತ್ಯ.

ಈ ನಿಟ್ಟಿನಲ್ಲಿ ಮಕ್ಕಳ ಹಾಗೂ ತಾಯಂದಿರ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು. ಆರೋಗ್ಯ ಕ್ಷೇತ್ರದಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸುವ ಮೂಲಕ ಭಾರತಾಂಬೆಯ ಕೃಪೆಗೆ ಪಾತ್ರರಾಗಬೇಕು. ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಿಳೆಯರ ಆದರ್ಶಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಹೇಳಿದರು.  

ಗದಗ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಡಾ. ರಾಜೇಂದ್ರ ಎಸ್‌.ಗೌಡ ಮಾತನಾಡಿ, ಸ್ವಾತಂತ್ರ್ಯಕ್ಕಾಗಿ ಸಾವಿರಾರು ಜನರು ತಮ್ಮ ಅಮೂಲ್ಯ ಜೀವನವನ್ನು ತ್ಯಾಗ ಮಾಡಿದ್ದಾರೆ.

ಅವರ ಆದರ್ಶ ಹಾಗೂ ತತ್ವ ಸಂದೇಶಗಳನ್ನು ಪ್ರತಿಯೊಬ್ಬ ಭಾರತೀಯರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ರೋಗಿಗಳ ಸೇವೆ ಮಾಡುವುದು ಪುಣ್ಯದ ಕಾರ್ಯವಾಗಿದ್ದು, ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುವ ಅವಕಾಶ ದೊರೆತಿರುವುದು ನಮ್ಮ ಭಾಗ್ಯ ಎಂದು ಹೇಳಿದರು.  

ಸಭೆಯ ಅಧ್ಯಕ್ಷತೆ ವಹಿಸಿದ್ದ ಡಿಎಂಎ ಆಸ್ಪತ್ರೆಯ ಹಿರಿಯ ತಜ್ಞ ವೈದ್ಯೆ ಡಾ. ಸುನಿತಾ ಮಾತನಾಡಿ, ಸ್ವಾತಂತ್ರ್ಯ ದಿನಾಚರಣೆ ರಾಷ್ಟ್ರೀಯ ಹಬ್ಬಗಳಲ್ಲಿ ಪ್ರಮುಖವಾದದ್ದು. ಪ್ರತಿಯೊಬ್ಬರೂ ಪ್ರಾಮಾಣಿಕತೆಯಿಂದ ತಮ್ಮ ಕರ್ತವ್ಯ ನಿರ್ವಹಿಸಿದಾಗ ಮಾತ್ರ ಸ್ವಾತಂತ್ರ್ಯೋತ್ಸವದ ಆಚರಣೆ ಸಾರ್ಥಕವಾಗುತ್ತದೆ ಎಂದರು.  

ಕಾರ್ಯಕ್ರಮದಲ್ಲಿ ಆಸ್ಪತ್ರೆಯ ವೈದ್ಯರಾದ ಡಾ. ಸಲ್ಮಾ, ಡಾ. ಶಿವಲೀಲಾ, ಡಾ. ವಿಜಯನೀಲಗುಂದ, ಡಾ. ಮಣಿಕಂಠ, ನಿವೃತ್ತ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಪಿ.ಎಚ್‌. ಬಡಿಗೇರ, ಡಾ. ಮಹೇಶ ಕೊಪ್ಪಳ, ಡಾ. ಜಯಕುಮಾರ ಬಾಳೆ, ಡಾ. ಪ್ರೇಮಾ ಬಾಬಣ್ಣವರ, ಡಾ. ಆಸ್ಮಾ ಹೆಸರೂರು, ಡಾ. ಪ್ರಿಯಾಂಕ ಕಡವಟೆ ಸೇರಿದಂತೆ ವೈದ್ಯರು, ಸಿಬ್ಬಂದಿ ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.  

ಧ್ವಜಾರೋಹಣದ ಬಳಿಕ ಆಸ್ಪತ್ರೆ ಸಿಬ್ಬಂದಿಯಿಂದ ದೇಶಭಕ್ತಿ ಗೀತೆಗಳ ಗಾಯನ ನಡೆಯಿತು. ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.