ತಂಬಾಕು ಮುಕ್ತ ಸಮಾಜ ನಿರ್ಮಾಣಕ್ಕೆ ಸಾಮೂಹಿಕ ಪ್ರಯತ್ನ ಅಗತ್ಯ
ಲೋಕದರ್ಶನ ವರದಿ
ಹಾವೇರಿ, ನ. 5 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಶಿಕ್ಷಣ ಇಲಾಖೆಯ ಆಯ್ಕೆ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳ (ಸಿಆರ್ಪಿ) ಸಹಕಾರ ಅತ್ಯಗತ್ಯವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗರಾಜ ಹೇಳಿದರು.
ನಗರದ ಜಿಲ್ಲಾ ಆರೋಗ್ಯ ಭವನದಲ್ಲಿ ಗುರುವಾರ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಜಿಲ್ಲಾ ಸರ್ವೇಕ್ಷಣಾ ಘಟಕದ ವತಿಯಿಂದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಆಯ್ದ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳಿಗೆ ಹಮ್ಮಿಕೊಂಡಿದ್ದ ಒಂದು ದಿನದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು,
ತಂಬಾಕು ಸೇವನೆಯಿಂದ ಉಂಟಾಗುವ ಆರೋಗ್ಯದ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ. ಶಾಲಾ-ಕಾಲೇಜುಗಳಲ್ಲಿ ತಂಬಾಕು ನಿಯಂತ್ರಣ ಜಾಗೃತಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ಸಿಆರ್ಪಿಗಳು ಪ್ರಮುಖ ಪಾತ್ರ ವಹಿಸಬೇಕು ಎಂದು ತಿಳಿಸಿದರು.
ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ಡಾ. ಸಂತೋಷ ದಡ್ಡಿ ಹಾಗೂ ದಾದಾಪೀರ ಹುಲಕಟ್ಟಿ ಅವರು ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಉದ್ದೇಶಗಳು, ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು, ತಂಬಾಕು ವ್ಯಸನ ಮುಕ್ತಗೊಳಿಸುವ ಚಿಕಿತ್ಸಾ ಸೌಲಭ್ಯಗಳು ಹಾಗೂ ಕೋಟ್ಪಾ ಕಾಯ್ದೆ-2003ರ ಪ್ರಮುಖ ಅಂಶಗಳು ಮತ್ತು ಕಾಯ್ದೆಯ ಅನುಷ್ಠಾನದ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ. ಜಗದೀಶ ಪಾಟೀಲ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.