ಮತದಾರರ ಪಟ್ಟಿಯಿಂದ ಹೆಸರು ಕೈಬಿಡುವ ಆರೋಪ: ಕಾಂಗ್ರೆಸ್
ಬಳ್ಳಾರಿ, ಅ.1: ನಗರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಿಂದ ಯಾವುದೇ ಸೂಕ್ತ ಕಾರಣವಿಲ್ಲದೆ ಮತದಾರರ ಹೆಸರುಗಳನ್ನು ಅಳಿಸುವ ಮೂಲಕ ಅವರ ಮತದಾನದ ಹಕ್ಕನ್ನು ಕಸಿಯುವ ಪ್ರಯತ್ನ ನಡೆಯುತ್ತಿದೆ ಎಂದು ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಘಟಕ ಆರೋಪಿಸಿದೆ.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಲ್ಲಂ ಪ್ರಶಾಂತ್, ವಿಶೇಷ ತೀವ್ರ ಪರಿಷ್ಕರಣೆ (ಖಋ) ಹೆಸರಿನಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಪ್ರಶ್ನಿಸಿದರು.
ಬಿಜೆಪಿ ಬಿಎಲ್‌ಎ-1 ಶ್ರೀನಿವಾಸ್ ಮೋದ್ಕರ್ ಅವರು ಸುಮಾರು 7,560 ಮತದಾರರ ಹೆಸರುಗಳನ್ನು ಪರೀಶೀಲಿಸಿ ಪಟ್ಟಿಯಿಂದ ಕೈಬಿಡುವಂತೆ ಪಟ್ಟಿ ಸಲ್ಲಿಸಿದ್ದಾರೆ ಎಂದು ಅವರು ಆರೋಪಿಸಿದರು. ಈ ಪಟ್ಟಿಯಲ್ಲಿರುವ ಬಹುತೇಕ ಮತದಾರರು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರು ಹಾಗೂ ಕಾಂಗ್ರೆಸ್ ಬೆಂಬಲಿಗರಾಗಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ದೂರಿದರು. ಕೆಲವು ಪ್ರಭಾವಿ ವ್ಯಕ್ತಿಗಳು ಹಾಗೂ ಕುಟುಂಬಗಳ ಹೆಸರುಗಳನ್ನೂ ಮತದಾರರ ಪಟ್ಟಿಯಿಂದ ಕೈಬಿಡಲು ಪ್ರಯತ್ನಿಸಲಾಗುತ್ತಿದೆ ಎಂದು ಅವರು ಆರೋಪಿಸಿದರು.