ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ: ರಾಘವೇಂದ್ರ ಹಿಟ್ನಾಳ್ಗೆ ಸೂಕ್ತ ಸ್ಥಾನಮಾನ ನೀಡುವಂತೆ ಒತ್ತಾಯ

ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ: ರಾಘವೇಂದ್ರ ಹಿಟ್ನಾಳ್ಗೆ ಸೂಕ್ತ ಸ್ಥಾನಮಾನ ನೀಡುವಂತೆ ಒತ್ತಾಯ  Amidst missing out on a ministerial berth: Demand to accord a suitable position to Raghavendra Hitna

ಕೊಪ್ಪಳ, ಆ. 5: ಸಚಿವ ಸಂಪುಟ ವಿಸ್ತರಣೆಯಲ್ಲಿ ಕೊಪ್ಪಳ ಕ್ಷೇತ್ರದ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರಿಗೆ ಸಚಿವ ಸ್ಥಾನ ದೊರೆಯದಿರುವುದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬೆಂಬಲಿಗರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.  

ತಾಲೂಕು ಯುವ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಗವಿಸಿದ್ದಪ್ಪ ಹಂಡಿ ಅವರು ಪತ್ರಿಕಾ ಪ್ರಕಟಣೆಯಲ್ಲಿ, ಕೊಪ್ಪಳ ವಿಧಾನಸಭಾ ಕ್ಷೇತ್ರದಿಂದ ಸತತ ಮೂರು ಬಾರಿ ಗೆದ್ದು ಜನರ ವಿಶ್ವಾಸ ಗಳಿಸಿರುವ ಶಾಸಕ ರಾಘವೇಂದ್ರ ಹಿಟ್ನಾಳ್ ಅವರಿಗೆ ಸಚಿವ ಸ್ಥಾನ ನೀಡಬೇಕಾಗಿತ್ತು. ಆದರೆ ಈ ಬಾರಿ ಅವಕಾಶ ಕೈತಪ್ಪಿರುವುದು ಕ್ಷೇತ್ರದ ಜನರಿಗೆ ನಿರಾಸೆ ಉಂಟುಮಾಡಿದೆ ಎಂದು ತಿಳಿಸಿದ್ದಾರೆ.  

ಹಿಟ್ನಾಳ್ ಅವರು ಪಕ್ಷದ ಸಂಘಟನೆ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸಿದ್ದು, ಅವರಿಗೆ ಸಚಿವ ಸ್ಥಾನ ನೀಡದಿರುವುದು ಸಮಂಜಸವಲ್ಲ. ಆದಾಗ್ಯೂ ಕ್ಷೇತ್ರದ ಜನರ ಬೆಂಬಲ ಅವರಿಗೆ ಮುಂದುವರಿಯಲಿದ್ದು, ಮುಂದಿನ ದಿನಗಳಲ್ಲಿ ಸೂಕ್ತ ಅವಕಾಶ ದೊರೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.  

ಸಚಿವ ಸ್ಥಾನ ಸಿಗದಿದ್ದರೂ ಪಕ್ಷಕ್ಕೆ ಯಾವುದೇ ಹಾನಿಯಾಗದಂತೆ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಲಿದ್ದಾರೆ. ಆದರೆ ಕೊಪ್ಪಳ ಜಿಲ್ಲೆಯ ಜನರ ಭಾವನೆಗಳಿಗೆ ಸ್ಪಂದಿಸಿ, ಸರ್ಕಾರದಲ್ಲಿ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ಅಥವಾ ಯಾವುದೇ ಪ್ರಮುಖ ನಿಗಮ-ಮಂಡಳಿಯ ಅಧ್ಯಕ್ಷ ಸ್ಥಾನವನ್ನು ರಾಘವೇಂದ್ರ ಹಿಟ್ನಾಳ್ ಅವರಿಗೆ ನೀಡುವಂತೆ ರಾಜ್ಯ ನಾಯಕತ್ವವನ್ನು ಗವಿಸಿದ್ದಪ್ಪ ಹಂಡಿ ಒತ್ತಾಯಿಸಿದ್ದಾರೆ.