ಅರಸು ಅವರ ದೂರದೃಷ್ಟಿ, ಕೊಡುಗೆಗಳು ಇಂದಿಗೂ ದಾರೀದೀಪ

ಅರಸು ಅವರ ದೂರದೃಷ್ಟಿ, ಕೊಡುಗೆಗಳು ಇಂದಿಗೂ ದಾರೀದೀಪ Arasu's vision and contributions remain a guiding light to this day

ಬಳ್ಳಾರಿ 20: ಸಂವಿಧಾನದ ಪೀಠಿಕೆಯಲ್ಲಿ ಪ್ರತಿಪಾದಿಸಿರುವ ಸಾಮಾಜಿಕ ನ್ಯಾಯದ ಆಶಯವನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು ಎಂದು ಡಾ. ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ ಹೇಳಿದರು.  

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಆಯೋಜಿಸಿದ್ದ ಸಾಮಾಜಿಕ ನ್ಯಾಯದ ಹರಿಕಾರ ಹಾಗೂ ಹಿಂದುಳಿದ ವರ್ಗಗಳ ನಾಯಕ, ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.  

ವಿನೋಬಾ ಭಾವೆ ಅವರ ಭೂದಾನ ಚಳವಳಿಯಿಂದ ಪ್ರೇರಣೆ ಪಡೆದು ದೇವರಾಜ ಅರಸು ಅವರು ‘ಉಳುವವನೇ ಹೊಲದೊಡೆಯ’ ಎಂಬ ಐತಿಹಾಸಿಕ ಭೂಸುಧಾರಣಾ ಕಾಯ್ದೆಯನ್ನು ಜಾರಿಗೆ ತಂದರು. ಬಡವರು, ದಲಿತರು ಹಾಗೂ ಹಿಂದುಳಿದ ವರ್ಗಗಳಿಗೆ ಭೂಮಿಯ ಹಕ್ಕು ನೀಡಿ ಬಡತನ ನಿರ್ಮೂಲನೆ ಮತ್ತು ಸಾಮಾಜಿಕ ಸಮಾನತೆಗೆ ಅಡಿಪಾಯ ಹಾಕಿದರು ಎಂದು ಸ್ಮರಿಸಿದರು.  

ಮಹಾನಗರ ಪಾಲಿಕೆ ಮಹಾಪೌರ ಪಿ. ಗಾದೆಪ್ಪ ಮಾತನಾಡಿ, ದೇವರಾಜ ಅರಸು ಅವರ ದೂರದೃಷ್ಟಿ ಹಾಗೂ ಕೊಡುಗೆಗಳು ಇಂದಿಗೂ ಲಕ್ಷಾಂತರ ಜನರ ಬದುಕಿಗೆ ದಾರೀದೀಪವಾಗಿವೆ ಎಂದರು.  

ಅಪರ ಜಿಲ್ಲಾಧಿಕಾರಿ ಮಹಮ್ಮದ್ ರಜುಬೇರ್ ಎನ್‌. ಮಾತನಾಡಿ, ಕರ್ನಾಟಕದಲ್ಲಿ ಸಾಮಾಜಿಕ ಅಸಮಾನತೆ ನಿವಾರಣೆಗೆ ದೇವರಾಜ ಅರಸು ಅವರು ಜಾರಿಗೆ ತಂದ ಭೂಸುಧಾರಣಾ ಕಾಯ್ದೆ ಕ್ರಾಂತಿಕಾರಿ ಹೆಜ್ಜೆಯಾಗಿತ್ತು ಎಂದು ಹೇಳಿದರು.  

ಕಾರ್ಯಕ್ರಮದಲ್ಲಿ ದೇವರಾಜ ಅರಸು ಅವರ ಕುರಿತು ವಿಶೇಷ ಉಪನ್ಯಾಸ, ಸಂವಿಧಾನದ ಪ್ರಸ್ತಾವನೆಯ ಬೋಧನೆ, ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಪ್ರಶಸ್ತಿ ವಿತರಣೆ ನಡೆಯಿತು. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜನ್ಮದಿನದ ಅಂಗವಾಗಿ ಸದ್ಭಾವನಾ ದಿನದ ಪ್ರತಿಜ್ಞಾವಿಧಿಯನ್ನೂ ಸ್ವೀಕರಿಸಲಾಯಿತು.  

ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಹಿಂದುಳಿದ ವರ್ಗಗಳ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.