ತುಂಗಭದ್ರಾ ನೀರಾವರಿ ಕಾರ್ಮಿಕರ ಬೇಡಿಕೆ ಈಡೇರಿಸುವ ಭರವಸೆ: ಪ್ರತಿಭಟನಾ ಸ್ಥಳಕ್ಕೆ ಸಚಿವರು, ಶಾಸಕರ ಭೇಟಿ
Assurance to Fulfill Demands of Tungabhadra Irrigation Workers: Ministers, MLAs Visit Protest Site
ಬೆಂಗಳೂರು, ಆಗಸ್ಟ್ 19: ತುಂಗಭದ್ರಾ ನೀರಾವರಿ ಕಾರ್ಮಿಕರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ AICCTU ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಸಣ್ಣ ನೀರಾವರಿ ಸಚಿವ ಅಜಯ್ ಸಿಂಗ್ ಸೇರಿದಂತೆ ಜನಪ್ರತಿನಿಧಿಗಳು ಭೇಟಿ ನೀಡಿ ಕಾರ್ಮಿಕರೊಂದಿಗೆ ಮಾತುಕತೆ ನಡೆಸಿದರು.
ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಎನ್.ಎಸ್. ಬೋಸರಾಜ್, ಮಸ್ಕಿ ಶಾಸಕ ಬಸವನಗೌಡ ತುರವಿಹಾಳ ಹಾಗೂ ವಿಧಾನ ಪರಿಷತ್ ಸದಸ್ಯ ಬಸವನಗೌಡ ಬಾದರ್ಲಿ ಅವರು ಸಚಿವರೊಂದಿಗೆ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದರು.
ಸಾವಿರಾರು ಕಾರ್ಮಿಕರನ್ನುದ್ದೇಶಿಸಿ ಮಾತನಾಡಿದ ಸಚಿವರು ಹಾಗೂ ಜನಪ್ರತಿನಿಧಿಗಳು, ತುಂಗಭದ್ರಾ ನೀರಾವರಿ ಕಾರ್ಮಿಕರು ಹಲವು ವರ್ಷಗಳಿಂದ ಎದುರಿಸುತ್ತಿರುವ ಸಮಸ್ಯೆಗಳು ಮತ್ತು ನ್ಯಾಯಯುತ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತಂದು ಪರಿಹಾರ ಕಲ್ಪಿಸುವುದಾಗಿ ಭರವಸೆ ನೀಡಿದರು.
ಗುತ್ತಿಗೆ ಪದ್ಧತಿ ರದ್ದುಗೊಳಿಸಿ ನೇರ ಪಾವತಿ ವ್ಯವಸ್ಥೆ ಜಾರಿಗೊಳಿಸುವುದು, 25ರಿಂದ 30 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಕಾರ್ಮಿಕರಿಗೆ ಉದ್ಯೋಗ ಭದ್ರತೆ ಕಲ್ಪಿಸುವುದು, ಪರಿಷ್ಕೃತ ಕನಿಷ್ಠ ವೇತನ ಜಾರಿಗೊಳಿಸುವುದು ಹಾಗೂ ಬಾಕಿ ವೇತನ, EPF, ESI, VDA ಸೇರಿದಂತೆ ಕಾನೂನುಬದ್ಧ ಸೌಲಭ್ಯಗಳನ್ನು ಒದಗಿಸುವುದು ಪ್ರಮುಖ ಬೇಡಿಕೆಗಳಾಗಿವೆ.
ಈ ಬೇಡಿಕೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಲ ಸಂಪನ್ಮೂಲ ಸಚಿವ ಚೆಲುವರಾಯಸ್ವಾಮಿ ಅವರೊಂದಿಗೆ ಚರ್ಚಿಸಿ, ಸರ್ಕಾರದ ಮಟ್ಟದಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ಪ್ರತಿಭಟನೆಯಲ್ಲಿ 1,500ಕ್ಕೂ ಹೆಚ್ಚು ತುಂಗಭದ್ರಾ ನೀರಾವರಿ ಕಾರ್ಮಿಕರು ಭಾಗವಹಿಸಿ ತಮ್ಮ ಬೇಡಿಕೆಗಳ ಈಡೇರಿಕೆಗೆ ಒಗ್ಗಟ್ಟಿನಿಂದ ಧ್ವನಿ ಎತ್ತಿದರು. ಸರ್ಕಾರದ ಪ್ರತಿನಿಧಿಗಳು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಭರವಸೆ ನೀಡಿರುವುದನ್ನು ಕಾರ್ಮಿಕರು ಸ್ವಾಗತಿಸಿದರೂ, ಕೇವಲ ಭರವಸೆಗೆ ಸೀಮಿತವಾಗದೆ ಕೂಡಲೇ ಅಗತ್ಯ ಕ್ರಮ ಕೈಗೊಂಡು ದೀರ್ಘಕಾಲದಿಂದ ಬಾಕಿ ಉಳಿದಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
“25–30 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ತುಂಗಭದ್ರಾ ನೀರಾವರಿ ಕಾರ್ಮಿಕರಿಗೆ ನ್ಯಾಯ ದೊರೆಯಬೇಕು. ಗುತ್ತಿಗೆ ಪದ್ಧತಿ ರದ್ದುಗೊಳಿಸಿ ನೇರ ಪಾವತಿ ವ್ಯವಸ್ಥೆ ಜಾರಿಗೊಳಿಸುವುದು ಸೇರಿದಂತೆ ಎಲ್ಲಾ ನ್ಯಾಯಯುತ ಬೇಡಿಕೆಗಳು ಈಡೇರುವವರೆಗೆ ಹೋರಾಟ ಮುಂದುವರಿಯಲಿದೆ,” ಎಂದು ತುಂಗಭದ್ರಾ ನೀರಾವರಿ ಕಾರ್ಮಿಕರ ಸಂಘದ ಅಧ್ಯಕ್ಷ ಕೆ. ನಾಗಲಿಂಗಸ್ವಾಮಿ ತಿಳಿಸಿದರು.
ಈ ಸಂದರ್ಭದಲ್ಲಿ AICCTU ರಾಷ್ಟ್ರೀಯ ಉಪಾಧ್ಯಕ್ಷ ಕ್ಲಿಫ್ಟನ್ ಡಿ'ರೋಜಾರಿಯೊ, ರಾಜ್ಯ ಪ್ರಧಾನ ಕಾರ್ಯದರ್ಶಿ ಮೈತ್ರಿ ಕೃಷ್ಣನ್, ರಾಜ್ಯಾಧ್ಯಕ್ಷ ಅಪ್ಪಣ, ತುಂಗಭದ್ರಾ ನೀರಾವರಿ ಕಾರ್ಮಿಕರ ಸಂಘದ ಅಧ್ಯಕ್ಷ ಕೆ. ನಾಗಲಿಂಗಸ್ವಾಮಿ, ನಾಗರಾಜ ಪೂಜಾರ್, ನಿರ್ಮಲ ಹಾಗೂ ಅಶೋಕಗೌಡ ಸೇರಿದಂತೆ ಸಂಘದ ಮುಖಂಡರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 