ಪಾಕಿಸ್ತಾನದಲ್ಲಿ ಬೆಂಕಿ ದುರ್ಘಟನೆ: ಕನಿಷ್ಠ ನಾಲ್ವರು ಸಾವು, 7 ಮಂದಿಗೆ ಗಾಯ
ಇಸ್ಲಾಮಾಬಾದ್, ಸೆಪ್ಟೆಂಬರ್ 12: ಪಾಕಿಸ್ತಾನದ ದಕ್ಷಿಣ ಬಂದರು ನಗರ ಕರಾಚಿಯಲ್ಲಿ ಮೂರು ಅಂತಸ್ತಿನ ವಸತಿ ಕಟ್ಟಡದಲ್ಲಿ ಶನಿವಾರ ಸಂಭವಿಸಿದ ಬೆಂಕಿ ದುರ್ಘಟನೆಯಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದು, ಇತರ ಏಳು ಮಂದಿ ಗಾಯಗೊಂಡಿದ್ದಾರೆ ಎಂದು ರಕ್ಷಣಾ ಸಿಬ್ಬಂದಿ ತಿಳಿಸಿದ್ದಾರೆ.
ನಗರದ ಜನನಿಬಿಡ ಪ್ರದೇಶದ ಕಟ್ಟಡದ ಮೊದಲ ಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಈ ಘಟನೆ ಸಂಭವಿಸಿದೆ ಎಂದು ಕರಾಚಿ ಮೂಲದ ಸರ್ಕಾರೇತರ ಸಂಸ್ಥೆ ಸಯಾನಿ ವೆಲ್ಫೇರ್ ಟ್ರಸ್ಟ್‌ನ ಸಲ್ಮಾನ್ ಖುರೇಷಿ ಕ್ಸಿನ್ಹುವಾ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಶನಿವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ಆದರೆ ಕಿಕ್ಕಿರಿದ ರಸ್ತೆಗಳಿಂದಾಗಿ ಅಗ್ನಿಶಾಮಕ ದಳ ಸಿಬ್ಬಂದಿ ಎಂಜಿನ್ ಮತ್ತು ಯಂತ್ರೋಪಕರಣಗಳನ್ನು ತ್ವರಿತವಾಗಿ ಘಟನಾ ಸ್ಥಳಕ್ಕೆ ಕೊಂಡೊಯ್ಯಲು ಅಡ್ಡಿಯಾಗಿದ್ದರಿಂದ ರಕ್ಷಣಾ ಕಾರ್ಯಾಚರಣೆ ಸ್ವಲ್ಪ ವಿಳಂಬವಾಗಿದೆ ಎಂದು ಅವರು ಹೇಳಿದ್ದಾರೆ.
ಕಟ್ಟಡದಲ್ಲಿ ನಾಲ್ಕು ಕುಟುಂಬಗಳು ವಾಸಿಸುತ್ತಿದ್ದು, ಮೃತರು ಮೊದಲ ಮಹಡಿಯಲ್ಲಿ ವಾಸಿಸುತ್ತಿರುವ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.
ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ಅವರು ತಿಳಿಸಿದ್ದಾರೆ.