ಮೋಕಾದಲ್ಲಿ ‘ಸುರಕ್ಷಿತ ಬಾಲ್ಯ ಅಭಿಯಾನ’ದಡಿ ಮಕ್ಕಳಿಗೆ ಜಾಗೃತಿ ಕಾರ್ಯಕ್ರಮಮಕ್ಕಳ ಮೇಲಿನ ದೌರ್ಜನ್ಯ ತಡೆ ಎಲ್ಲರ ಕರ್ತವ್ಯ: ಜಿಲ್ಲಾ ನ್ಯಾಯಾಧೀಶ ಸಿದ್ದಲಿಂಗ ಪ್ರಭು ಕರೆ
ಬಳ್ಳಾರಿ,ಅ.29 : ಮಕ್ಕಳ ಮೇಲಾಗುವ ಲೈಂಗಿಕ ಕಿರುಕುಳ ಹಾಗೂ ದೌರ್ಜನ್ಯಗಳನ್ನು ತಡೆಗಟ್ಟುವುದು ಪ್ರತಿಯೊಬ್ಬರ ಕರ್ತವ್ಯ. ಇಂತಹ ದೌರ್ಜನ್ಯಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಮಕ್ಕಳಿಗೆ ಮುಂಜಾಗ್ರತಾ ಕ್ರಮಗಳ ಬಗ್ಗೆ ತಿಳಿವಳಿಕೆ ನೀಡುವುದು ಅತ್ಯಗತ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಸಿದ್ದಲಿಂಗ ಪ್ರಭು ಅವರು ಹೇಳಿದರು.
ಬುಧವಾರ, ಬಳ್ಳಾರಿ ತಾಲೂಕಿನ ಮೋಕಾ ಗ್ರಾಮದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬಳ್ಳಾರಿ, ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ‘ಸುರಕ್ಷಿತ ಬಾಲ್ಯ ಅಭಿಯಾನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.