ಬೆಳಗಾವಿಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಲೋಕದರ್ಶನ ವರದಿ
ಬೆಳಗಾವಿ 06 : ಬೆಳಗಾವಿ ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಜಿಲ್ಲೆ ಎಂದು ಘೋಷಿಸಿ, ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಆಗ್ರಹಿಸಿದೆ. ಈ ಸಂಬಂಧ ಬಿಜೆಪಿ ಜಿಲ್ಲಾ ಅಧ್ಯಕ್ಷ ಸುಭಾಷ್ ಪಾಟೀಲ ಅವರ ನೇತೃತ್ವದಲ್ಲಿ ಮಾಜಿ ಶಾಸಕರು ಹಾಗೂ ಪಕ್ಷದ ಮುಖಂಡರ ನಿಯೋಗವು ಜಂಟಿ ಕೃಷಿ ನಿರ್ದೇಶಕ ಹೆಚ್.ಡಿ. ಕೋಳೇಕರ್ ಅವರಿಗೆ ಮನವಿ ಸಲ್ಲಿಸಿತು. ಈ ವೇಳೆ ಮಾತನಾಡಿದ ಮುಖಂಡರು, ರೈತರಿಗೆ ಸಮಯಕ್ಕೆ ಸರಿಯಾಗಿ ಬೀಜ ಮತ್ತು ಗೊಬ್ಬರ ವಿತರಣೆ ಮಾಡಬೇಕು. ಕಳಪೆ ಬೀಜ ಹಾಗೂ ನಕಲಿ ಗೊಬ್ಬರ ಮಾರಾಟಕ್ಕೆ ಕಡಿವಾಣ ಹಾಕಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಮಳೆಯ ಕೊರತೆಯಿಂದ ಬೆಳೆ ಹಾನಿಗೊಳಗಾದ ಪ್ರದೇಶಗಳ ಸಮೀಕ್ಷೆ ನಡೆಸಿ, ರೈತರಿಗೆ ಸೂಕ್ತ ಪರಿಹಾರ ನೀಡಬೇಕು. ಅಲ್ಲದೆ, ರೈತರು ಬೆಳೆದ ಬೆಳೆಗಳಿಗೆ ಸರ್ಕಾರ ಬೆಂಬಲ ಬೆಲೆ ನಿಗದಿಪಡಿಸಿ, ರೈತರ ಹಿತಾಸಕ್ತಿ ಕಾಪಾಡುವ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಮನವಿ ಸಲ್ಲಿಸುವ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಸುಭಾಷ್ ಪಾಟೀಲ, ಮಾಜಿ ಶಾಸಕ ಸಂಜಯ ಪಾಟೀಲ, ಮಹಾಂತೇಶ ದೊಡ್ಡಗೌಡ್ರ, ಅರವಿಂದ ಪಾಟೀಲ, ರೈತ ಮೋರ್ಚಾ ಜಿಲ್ಲಾ ಅಧ್ಯಕ್ಷ ಜಗದೀಶ ಬುಡಿಹಾಳ, ಜಿಲ್ಲಾ ಮಾಧ್ಯಮ ಪ್ರಮುಖ ಸಚಿನ್ ಕಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಮಾದಮ್ಮನವರ, ಕೋಶಾಧ್ಯಕ್ಷ ಸಂತೋಷ ದೇಶನೂರ, ಪ್ರಕೋಷ್ಠಗಳ ಜಿಲ್ಲಾ ಸಂಯೋಜಕ ಮಹೇಶ್ ಮೊಹಿತೆ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.