ಮೂಲಸೌಕರ್ಯ ಕೊರತೆ ಖಂಡಿಸಿ ಬಿಜೆಪಿ ಪ್ರತಿಭಟನೆ
BJP protests against lack of infrastructure
ಕಾರವಾರ 31: ಜಿಲ್ಲೆಯಲ್ಲಿ ರಸ್ತೆ, ವಿದ್ಯುತ್, ಸಾರಿಗೆ ಹಾಗೂ ಆರೋಗ್ಯ ಸೇರಿದಂತೆ ಮೂಲಸೌಕರ್ಯಗಳ ಅಭಿವೃದ್ಧಿಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಜಿಲ್ಲಾ ಬಿಜೆಪಿ ವತಿಯಿಂದ ಶುಕ್ರವಾರ ಕಾರವಾರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ನಗರದ ಮಿತ್ರ ಸಮಾಜ ಮೈದಾನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಜಿಲ್ಲಾಧಿಕಾರಿ ಕಚೇರಿಗೆ ತಲುಪಿತು. ಈ ವೇಳೆ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ಹಾಗೂ ಮಾಜಿ ಶಾಸಕಿ ರೂಪಾಲಿ ನಾಯ್ಕ, ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದಲ್ಲಿ ಮೂಲಸೌಕರ್ಯಗಳ ಕೊರತೆಯಿಂದ ಸಾರ್ವಜನಿಕರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ರಾಜ್ಯ ಹೆದ್ದಾರಿ, ಲೋಕೋಪಯೋಗಿ ಹಾಗೂ ಗ್ರಾಮೀಣ ರಸ್ತೆಗಳು ಹದಗೆಟ್ಟಿದ್ದು, ವಿದ್ಯಾರ್ಥಿಗಳು ಮತ್ತು ಪ್ರಯಾಣಿಕರು ನಿತ್ಯ ತೊಂದರೆ ಅನುಭವಿಸುವಂತಾಗಿದೆ ಎಂದು ಆರೋಪಿಸಿದರು.
ಸಾರಿಗೆ ವ್ಯವಸ್ಥೆಯ ಅವ್ಯವಸ್ಥೆ, ಆಗಾಗ್ಗೆ ವಿದ್ಯುತ್ ವ್ಯತ್ಯಯ ಹಾಗೂ ಗ್ರಾಮೀಣ ಭಾಗಗಳಲ್ಲಿ ಹಲವು ದಿನಗಳ ಕಾಲ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳುತ್ತಿರುವ ಸಮಸ್ಯೆಗಳನ್ನು ಅವರು ಪ್ರಸ್ತಾಪಿಸಿದರು. ಗೃಹಜ್ಯೋತಿ ಯೋಜನೆಯ ದಾಖಲೆ ಸಂಗ್ರಹಣೆಗೆ ಸಿಬ್ಬಂದಿಯನ್ನು ಬಳಸಲಾಗುತ್ತಿದ್ದು, ತಾಂತ್ರಿಕ ಸಮಸ್ಯೆಗಳ ಪರಿಹಾರ ವಿಳಂಬವಾಗುತ್ತಿದೆ ಎಂದು ದೂರಿದರು.
ಆರೋಗ್ಯ ಕ್ಷೇತ್ರದ ಕುರಿತು ಮಾತನಾಡಿದ ಅವರು, ಕಾರವಾರ ವೈದ್ಯಕೀಯ ಕಾಲೇಜಿನಲ್ಲಿ ಅಗತ್ಯ ತಜ್ಞ ವೈದ್ಯರ ಹುದ್ದೆಗಳು ಖಾಲಿ ಉಳಿದಿದ್ದು, ಸಾರ್ವಜನಿಕರಿಗೆ ಸಮರ್ಕ ಆರೋಗ್ಯ ಸೇವೆ ದೊರೆಯುತ್ತಿಲ್ಲ. ಪರಿಣಾಮ ಬಡ ರೋಗಿಗಳು ಚಿಕಿತ್ಸೆಗಾಗಿ ನೆರೆಯ ಜಿಲ್ಲೆಗಳಿಗೆ ತೆರಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.
ಸರ್ಕಾರ ಗ್ಯಾರಂಟಿ ಯೋಜನೆಗಳ ಜೊತೆಗೆ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಗೂ ಆದ್ಯತೆ ನೀಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.
ಬಳಿಕ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಮನವಿ ಸ್ವೀಕರಿಸಿದರು. ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರಾದ ರಾಜೇಂದ್ರ ನಾಯ್ಕ, ಕಿಶನ್ ಕಾಂಬಳೆ, ಸಂಜಯ ಸಾಲುಂಕೆ, ಜಗದೀಶ ನಾಯ್ಕ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 