ಬಳ್ಳಾರಿ: ಜಿಲ್ಲಾ ಮಟ್ಟದ ಯುವಜನೋತ್ಸವದಲ್ಲಿ ಜಿಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಹೇಳಿಕೆ ಎಲ್ಲಾ ತಾಲೂಕುಗಳಲ್ಲಿ ಶೀಘ್ರ ಕ್ರೀಡಾಂಗಣ ನಿರ್ಮಾಣಕ್ಕೆ ಭರವಸೆ
ಬಳ್ಳಾರಿ,ನ.26 : ಯುವಜನೋತ್ಸವವು ಯುವಜನರಲ್ಲಿರುವ ಸುಪ್ತ ಪ್ರತಿಭೆಗಳನ್ನು ಅನಾವರಣಗೊಳಿಸಲು ಉತ್ತಮ ವೇದಿಕೆಯಾಗಿದ್ದು, ಯುವಕರು ಉತ್ಸಾಹ ಮತ್ತು ಉಲ್ಲಾಸದಿಂದ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಹೇಳಿದರು. ನಗರದಲ್ಲಿ ಬಿಡಿಎಎ ಫುಟ್ಬಾಲ್ ಮೈದಾನದ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಿದ್ದ 2026-27ನೇ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳು ನಕ್ಷತ್ರಗಳಿದ್ದಂತೆ. ಅವರಲ್ಲಿರುವ ಪ್ರತಿಭೆ ಮತ್ತು ಸಾಮರ್ಥ್ಯಕ್ಕೆ ಸೂಕ್ತ ವೇದಿಕೆ ಹಾಗೂ ಪ್ರೋತ್ಸಾಹ ದೊರೆತರೆ ದೇಶಕ್ಕೆ ಉತ್ತಮ ಕೊಡುಗೆ ನೀಡಲು ಸಾಧ್ಯ. ಭಾರತ ವಿಶ್ವಗುರುವಾಗಬೇಕಾದರೆ ಯುವಜನರ ಪರಿಶ್ರಮ, ಬದ್ಧತೆ ಮತ್ತು ಸಾಧನೆ ಬಹಳ ಮುಖ್ಯ. ಯುವಜನೋತ್ಸವದಂತಹ ಕಾರ್ಯಕ್ರಮಗಳು ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಮಹತ್ವದ ವೇದಿಕೆಗಳಾಗಿವೆ.
ಇಂದಿನ ಆಧುನಿಕ ತಂತ್ರಜ್ಞಾನ ಹಾಗೂ ಕೃತಕ ಬುದ್ಧಿಮತ್ತೆ (ಎಐ)ಯನ್ನು ಯುವಕರು ಸದುಪಯೋಗಪಡಿಸಿಕೊಂಡು ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ತಿಳಿದುಕೊಳ್ಳಬೇಕು ಎಂದು ಸಲಹೆ ನೀಡಿದರು. ಜಿಲ್ಲೆಯ ಗ್ರಾಮೀಣ ಭಾಗದ ಮಕ್ಕಳಿಗೂ ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಅವಕಾಶ ಕಲ್ಪಿಸುವ ಉದ್ದೇಶದಿಂದ ತಾಲೂಕುಗಳಲ್ಲಿ ಹಂತ ಹಂತವಾಗಿ ಕ್ರೀಡಾಂಗಣಗಳನ್ನು ನಿರ್ಮಿಸಲು ಯೋಜಿಸಲಾಗಿದೆ.
ಮಹಿಳೆಯರು ಹಾಗೂ ಬಾಲಕಿಯರಿಗಾಗಿ ಒಳಾಂಗಣ ಕ್ರೀಡಾಂಗಣ ನಿರ್ಮಿಸುವ ಉದ್ದೇಶವಿದೆ. ಈಗಾಗಲೇ ಸಂಡೂರು ತಾಲೂಕಿನಲ್ಲಿ ಕ್ರೀಡಾಂಗಣ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಹೋಬಳಿ ಮಟ್ಟದಲ್ಲಿಯೂ ಕ್ರೀಡೆಗಳಿಗೆ ಪ್ರೋತ್ಸಾಹಿಸಲು ಗ್ರಾಮೀಣ ಪ್ರದೇಶಗಳಲ್ಲಿರುವ ಸರ್ಕಾರಿ ಖಾಲಿ ಜಾಗಗಳನ್ನು ಗುರುತಿಸಿ ಕ್ರೀಡಾ ಚಟುವಟಿಕೆಗಳಿಗೆ ಬಳಸಿಕೊಳ್ಳಲು ಉದ್ದೇಶಿಸಲಾಗಿದೆ.