ಬಸವಣ್ಣನವರಿಗೆ ಗೌರವ: ಸರ್ಕಾರದ ಕ್ರಮ ಸ್ವಾಗತಾರ್ಹ

ಬಾಗಲಕೋಟೆ 20: 12ನೇ ಶತಮಾನದಲ್ಲಿ ವಚನಗಳ ಮೂಲಕ ಸಮಾಜವನ್ನು ತಿದ್ದುವ ಕಾರ್ಯ ಮಾಡಿದ ಸಮಾಜ ಸುಧಾರಕರಾದ ಜಗಜ್ಯೋತಿ ಬಸವಣ್ಣನವರನ್ನು ‘ಕರ್ನಾಟಕದ ಸಾಂಸ್ಕೃತಿಕ ನಾಯಕ’ ಎಂದು ತಿರ್ಮಾಣ ತೆಗೆದುಕೊಂಡ ರಾಜ್ಯ ಸರ್ಕಾರದ ಕ್ರಮ ಸ್ವಾಗತಾರ್ಹವಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಶಿವಾನಂದ ಶೆಲ್ಲಿಕೇರಿ ಹೇಳಿದ್ದಾರೆ. 

ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಗಜ್ಯೋತಿ ಬಸವಣ್ಣನವರ ಭಾವಚಿತ್ರವನ್ನು ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಹಾಕಬೇಕು ಎಂಬ ನಿರ್ಧಾರದ ನಂತರ ಇದೀಗ ಕರ್ನಾಟಕ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವ ಮೂಲಕ ಸಮಾನತೆಯ ಹರಿಕಾರ ಬಸವಣ್ಣನವರಿಗೆ ಬಹುದೊಡ್ಡ ಸ್ಥಾನ ನೀಡುವಲ್ಲಿ ಸರ್ಕಾರದ ಕ್ರಮವು ಸ್ವಾಗತಾರ್ಹವಾಗಿದೆ ಎಂದು ಹೇಳಿದ್ದಾರೆ. 

ಎಲ್ಲರೂ ಒಂದೇ ಎನ್ನುವ ಸಮಸಮಾಜದ ಕನಸು ಕಂಡು ಜಾತಿ ರಹಿತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಬಸವಣ್ಣ ಅವರಿಗೆ ಸರ್ಕಾರ ಗೌರವ ಕೊಡುವ ಮಹತ್ವದ ತಿರ್ಮಾಣ ಮಾಡಿದೆ. ಮಹಾರಾಷ್ಟ್ರದಲ್ಲಿ ಛತ್ರಪತಿ ಶಿವಾಜಿ ಅವರನ್ನು ಮಹಾರಾಷ್ಟ್ರದ ಸಾಂಸ್ಕೃತಿಕ ರಾಯಭಾರಿಯನ್ನಾಗಿಸಲಾಗಿದ್ದು, ಇದೇ ಮಾದರಿಯಲ್ಲಿ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣ ಎಂಬ ಘೋಷಿಸಿರುವುದು ಸಂತಸದ ವಿಷಯವಾಗಿದೆ ಎಂದು ಅವರು ಹೇಳಿದ್ದಾರೆ.