ಬೆಳಗಾವಿ ಎಪಿಎಂಸಿಯಲ್ಲಿ ಅವ್ಯವಸ್ಥೆ ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಉಪಲೋಕಾಯುಕ್ತ ಬಿ. ವೀರಪ್ಪ
ಬೆಳಗಾವಿ, ಅ. 29: ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಗುರುವಾರ ಬೆಳಗಾವಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ (ಎಪಿಎಂಸಿ) ಭೇಟಿ ನೀಡಿ ವಿವಿಧ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ತರಕಾರಿ ವ್ಯಾಪಾರಿಗಳ ತೂಕದ ಯಂತ್ರಗಳನ್ನು ಪರಿಶೀಲಿಸಿದ ಅವರು, ತೂಕದಲ್ಲಿ ಮೋಸ ನಡೆಯುತ್ತಿದೆಯೇ ಹಾಗೂ ದಲ್ಲಾಳಿಗಳು ಹೆಚ್ಚಿನ ಕಮಿಷನ್ ಪಡೆಯುತ್ತಿದ್ದಾರೆಯೇ ಎಂಬ ಕುರಿತು ಮಾಹಿತಿ ಸಂಗ್ರಹಿಸಿದರು.
ಮಾರುಕಟ್ಟೆಯಲ್ಲಿ ಯಾವುದೇ ಸಗಟು ತರಕಾರಿ ವ್ಯಾಪಾರಸ್ಥರು ಮಾರಾಟದ ರಸೀದಿ ನೀಡದಿರುವುದನ್ನು ಗಮನಿಸಿದ ಉಪಲೋಕಾಯುಕ್ತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಮಾರುಕಟ್ಟೆಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತಗೊಂಡಿರುವುದು ಹಾಗೂ ಉಪಹಾರ ಗೃಹದಲ್ಲಿ ಸ್ವಚ್ಛತೆ ಇಲ್ಲದಿರುವುದನ್ನು ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಉಪಹಾರ ಗೃಹವು ಕಸದ ತೊಟ್ಟಿಯಂತಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿ, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಮಾರುಕಟ್ಟೆಯಲ್ಲಿ ರೈತರು ಮತ್ತು ಹಮಾಲಿಗಳಿಗೆ ವಿಶ್ರಾಂತಿ ಗೃಹ ಹಾಗೂ ವಾಹನ ನಿಲುಗಡೆ ವ್ಯವಸ್ಥೆ ಇಲ್ಲದಿರುವ ಕುರಿತು ಅವರಿಂದಲೇ ಮಾಹಿತಿ ಪಡೆದರು. ಹಮಾಲಿಗಳಿಗೆ ಯಾವುದೇ ಮೂಲಸೌಲಭ್ಯಗಳು ದೊರೆಯುತ್ತಿಲ್ಲ ಎಂಬ ದೂರಿನ ಹಿನ್ನೆಲೆಯಲ್ಲಿ, ಕಾರ್ಮಿಕ ಇಲಾಖೆಯ ಅಧಿಕಾರಿಗಳು ಎರಡು ದಿನಗಳೊಳಗಾಗಿ ಮಾರುಕಟ್ಟೆಯ ಎಲ್ಲ ಅಂಗಡಿಗಳಲ್ಲಿನ ಕಾರ್ಮಿಕರ ವಿವರಗಳನ್ನು ಸಂಗ್ರಹಿಸಿ, ಅವರಿಗೆ ದೊರೆಯಬೇಕಾದ ಸರ್ಕಾರಿ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಇದಲ್ಲದೆ, ಮಾರುಕಟ್ಟೆಯ ಶೌಚಾಲಯಗಳ ದುಸ್ಥಿತಿಯನ್ನು ಕಂಡು ಅಸಮಾಧಾನ ವ್ಯಕ್ತಪಡಿಸಿದ ಅವರು, ರೈತ ಭವನಕ್ಕೂ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಉಪನಿಬಂಧಕ ಅರವಿಂದ, ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ ದೇಸಾಯಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಎನ್. ಶಿವಕುಮಾರ, ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಉಪವಿಭಾಗಾಧಿಕಾರಿ ಶ್ರವಣ ನಾಯಕ, ಮಹಾನಗರ ಪಾಲಿಕೆ ಆಯುಕ್ತ ಕಾರ್ತಿಕ ಎಂ. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.