ಬೆಳಗಾವಿ

ಕರ್ನಾಟಕದ ಅವಿಭಾಜ್ಯ ಅಂಗ ಬೆಳಗಾವಿ, ಈ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ

ಕರ್ನಾಟಕದ ಅವಿಭಾಜ್ಯ ಅಂಗ ಬೆಳಗಾವಿ, ಈ  ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ

ಬೆಳಗಾವಿ 28 : ನಗರದ ಸರ್ಕಿಟ್ ಹೌಸ್ ನಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಮುಖಂಡರು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರನ್ನು ಮಂಗಳವಾರ ಭೇಟಿ ಮಾಡಿ, ಬೆಳಗಾವಿಯನ್ನು ಕರ್ನಾಟಕದ ಅವಿಭಾಜ್ಯ ಅಂಗವೆಂದು ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಅಧಿಕೃತ ನಿರ್ಣಯ ಕೈಗೊಳ್ಳುವಂತೆ ಹಾಗೂ ಪಾಲಿಕೆಯಲ್ಲಿ ಅನುಸರಿಸಲಾಗುತ್ತಿರುವ ತ್ರಿಭಾಷಾ ಸೂತ್ರದ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದರು.  ಮನವಿ ಸ್ವೀಕರಿಸಿ ಮಾತನಾಡಿದ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು, "ಬೆಳಗಾವಿ ಯಾವತ್ತಿದ್ದರೂ ಕರ್ನಾಟಕದ ಅವಿಭಾಜ್ಯ ಅಂಗ. ಈ ವಿಷಯದಲ್ಲಿ ಯಾವುದೇ ರೀತಿಯ ಗೊಂದಲವಿಲ್ಲ. ಈ ವಿಚಾರದಲ್ಲಿ ನನ್ನ ನಿಲುವು ಸ್ಪಷ್ಟವಾಗಿದೆ," ಎಂದು ಹೇಳಿದರು. 

ಕನ್ನಡ ಪರ ಸಂಘಟನೆಗಳು ಈ ಹಿಂದೆ ಸಲ್ಲಿಸಿರುವ ಅನೇಕ  ಬೇಡಿಕೆಗಳನ್ನು ಈಗಾಗಲೇ ಕಾನೂನು ಇಲಾಖೆಯ ಪರೀಶೀಲನೆಗೆ ಕಳುಹಿಸಲಾಗಿದೆ. ಅಲ್ಲದೆ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾಯಮೂರ್ತಿ ಹೆಚ್‌.ಎನ್‌. ನಾಗಮೋಹನ ದಾಸ ಅವರೊಂದಿಗೆ ಚರ್ಚಿಸಿ ಅಗತ್ಯ ಸಲಹೆ ಹಾಗೂ ಅಭಿಪ್ರಾಯ ಪಡೆಯಲಾಗುವುದು ಎಂದು ಸಚಿವರು ತಿಳಿಸಿದರು.  ಈ ವಿಚಾರದಲ್ಲಿ ಬೆಳಗಾವಿ ಮಹಾನಗರ ಪಾಲಿಕೆಯೂ ಸಹ ಕಾನೂನುಬದ್ಧವಾಗಿ ಸೂಕ್ತ ನಿರ್ಧಾರ ಕೈಗೊಳ್ಳಲು ಹಿಂದೇಟು ಹಾಕದಂತೆ  ಚರ್ಚೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.  ಈ ಸಂದರ್ಭದಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು. 


ಸುದ್ದಿ ಓದಿ