ಲೋಕದರ್ಶನ ವರದಿ
ಬಳ್ಳಾರಿ 15: ಸ್ಮಾರಕಗಳು ನಮ್ಮ ನಾಡಿನ ಐತಿಹಾಸಿಕ ಪರಂಪರೆ, ಕಲೆ, ಸಾಹಿತ್ಯ, ಸಂಸ್ಕೃತಿಯ ಮಹತ್ವವನ್ನು ಸಾರುವ ದ್ಯೋತಕಗಳು. ಸ್ಮಾರಕಗಳು ನಮ್ಮ ನಾಡಿನ ಸ್ವತ್ತು ಮತ್ತು ಸಂಪತ್ತುಗಳಾಗಿವೆ. ಅವುಗಳನ್ನು ಸಂರಕ್ಷಿಸಿ ನಮ್ಮ ಮುಂದಿನ ಪೀಳಿಗೆಗೆ ಉಳಿಸಿಕೊಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಕನ್ನಡ ವಿಶ್ವವಿದ್ಯಾಲಯದ ಕುಲಪತಿಗಳಾದ ಸ.ಚಿ ರಮೇಶ ಅವರು ಹೇಳಿದರು.
ಕನ್ನಡ ವಿಶ್ವವಿದ್ಯಾಲಯದ ಭುವನವಿಜಯದಲ್ಲಿ 15ನೇ ಅಕ್ಟೋಬರ್ 2019ರಂದು ಕನ್ನಡ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ಮೈಸೂರಿನ ಪುರಾತತ್ವ, ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸ್ಮಾರಕಗಳ ಸ್ವಚ್ಛತೆ ಹಾಗೂ ರಕ್ಷಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಹಂಪಿಯ ಸ್ಮಾರಕಗಳು ವಿಶ್ವಪರಂಪರೆಯ ಪಟ್ಟಿಯಲ್ಲಿ ಸೇರಿರುವುದು ನಮ್ಮ ನಾಡಿಗೆ ಹೆಮ್ಮೆಯ ಸಂಗತಿ. ಇಂತಹ ಭವ್ಯ ಸ್ಮಾರಕಗಳನ್ನು ಸಂರಕ್ಷಿಸುವ ಕಾರ್ಯಕ್ಕೆ ಸರ್ಕಾರದ ಜೊತೆ ಸಾರ್ವಜನಿಕರು ಅದರಲ್ಲೂ ವಿದ್ಯಾರ್ಥಿಗಳು ಮತ್ತು ಯುವಜನತೆ ಕೈಜೋಡಿಸಬೇಕೆಂದರು. ರಾಷ್ಟ್ರೀಯ ಸೇವಾ ಯೋಜನ ಘಟಕವು ಇಂತಹ ಸಾಮಾಜಿಕ ಕೆಲಸ ಕಾರ್ಯಗಳ ಮೂಲಕ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಪ್ರಜ್ಞೆ , ಸಾಂಸ್ಥಿಕ ಪ್ರಜ್ಞೆ, ಸ್ನೇಹ ಸಂಬಂಧ, ಸಹಕಾರಿ ಮನೋಭಾವ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಿದೆ. ಹೀಗಾಗಿ ವಿದ್ಯಾರ್ಥಿಗಳು ರಾಷ್ಟ್ರೀಯ ಸೇವಾ ಯೋಜನ ಘಟಕ ಹಮ್ಮಿಕೊಂಡಿರುವ ಸ್ಮಾರಕಗಳ ಸ್ವಚ್ಛತೆ ಹಾಗೂ ರಕ್ಷಣಾ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು ತಿಳಿಸಿದರು.
ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಉಪನಿರ್ದೇಶಕರಾದ ಡಾ.ಎಸ್.ಕೆ. ವಾಸುದೇವ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತ ಕನ್ನಡ ವಿಶ್ವವಿದ್ಯಾಲಯ ಮತ್ತು ಕಮಲಾಪುರದ ವಸ್ತು ಸಂಗ್ರಹಾಲಯಗಳು ಇತಿಹಾಸ ಮತ್ತು ಪರಂಪರೆಗೆ ಸಂಬಂಧಿಸಿದ ಕೆಲಸ ಕಾರ್ಯಗಳಲ್ಲಿ ಸದಾ ತೊಡಗಿರುತ್ತವೆೆ. ಸ್ಮಾರಕಗಳ ಸ್ವಚ್ಛತೆ ಹಾಗೂ ರಕ್ಷಣಾ ಕಾರ್ಯಕ್ರಮವನ್ನು ಐದು ದಿನಗಳ ಕಾಲ ಹಮ್ಮಿಕೊಳ್ಳಲಾಗಿದ್ದು, ಪ್ರತಿ ದಿನವು ಸ್ಮಾರಕಗಳನ್ನು ಸ್ವಚ್ಛಗೊಳಿಸುವುದರ ಜೊತೆಗೆ ಸಂಜೆ ಸ್ಮಾರಕಗಳ ಐತಿಹಾಸಿಕ ಹಿನ್ನೆಲೆ ಪರಂಪರೆಯ ಬಗ್ಗೆ ಪರಿಚಯ ಮಾಡಿಕೊಡಲಾಗುವುದು ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಂಚಾಲಕರಾದ ಡಾ. ಅಮರೇಶ್ ಯತಗಲ್ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಂಶೋಧನಾ ವಿದ್ಯಾರ್ಥಿ ನಾಗರಾಜ ಕಾರ್ಯಕ್ರಮ ನಿರೂಪಿಸಿದರು. ಸಂಶೋಧನಾ ವಿದ್ಯಾರ್ಥಿ ಸುನಿಲ್ ವಂದನಾರ್ಪಣೆ ಮಾಡಿದರು. ಸಂಗೀತ ವಿಭಾಗದ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ವಿವಿಧ ನಿಕಾಯಗಳ ಡೀನರು, ವಿಭಾಗಗಳ ಪ್ರಾಧ್ಯಾಪಕರು, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.