ಕಾರವಾರ

ಮುಂಡಗೋಡಿನಲ್ಲಿ ಕಾನೂನು ಸೇವಾ ಸಮಿತಿಯ ದ್ವೈಮಾಸಿಕ ಸಭೆ

ಮುಂಡಗೋಡಿನಲ್ಲಿ ಕಾನೂನು ಸೇವಾ ಸಮಿತಿಯ ದ್ವೈಮಾಸಿಕ ಸಭೆ

ಮುಂಡಗೋಡ 13: ತಾಲ್ಲೂಕು ಕಾನೂನು ಸೇವಾ ಸಮಿತಿ ವತಿಯಿಂದ ದ್ವೈಮಾಸಿಕ ಸಭೆಯು ಬುಧವಾರ ಮಂಡಗೋಡದ ಮಾನ್ಯ ಜೆಎಂಎಫ್ಸಿ ನ್ಯಾಯಾಲಯದಲ್ಲಿ ನಡೆಯಿತು.  ಸಭೆಯ ಅಧ್ಯಕ್ಷತೆಯನ್ನು ಮಂಡಗೋಡ ನ್ಯಾಯಾಲಯದ ಗೌರವಾನ್ವಿತ ನ್ಯಾಯಾಧೀಶರಾದ ಶಿವರಾಜ್ ಎಚ್‌.ಎಸ್‌. ವಹಿಸಿದ್ದರು. ಸಹಾಯಕ ಸರ್ಕಾರಿ ಅಭಿಯೋಜಕರಾದ ಪ್ರಸಾದ್ ಹೆಗಡೆ, ವಕೀಲರ ಸಂಘದ ಅಧ್ಯಕ್ಷರಾದ ಎನ್‌.ಎ. ನಿಂಬಾಯಿ ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳ ಮುಖ್ಯಸ್ಥರು ಸಭೆಯಲ್ಲಿ ಉಪಸ್ಥಿತರಿದ್ದರು.  

ಸಭೆಯಲ್ಲಿ ಆಗಸ್ಟ್‌ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಹಮ್ಮಿಕೊಳ್ಳಬೇಕಾದ ಕಾನೂನು ಸಾಕ್ಷರತಾ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು. ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಹಾಗೂ ಯಶಸ್ವಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ನ್ಯಾಯಾಧೀಶರು ಅಗತ್ಯ ಸಲಹೆ ಹಾಗೂ ಸೂಚನೆಗಳನ್ನು ನೀಡಿದರು.  

ಪಟ್ಟಣದ ಹಳೂರು ಓಣಿಯಲ್ಲಿರುವ ಖುಷಿ ಡಯಾಗ್ನೋಸ್ಟಿಕ್ ಸೆಂಟರ್ನಲ್ಲಿ ಸಂಭವಿಸಿದ ಮಗುವಿನ ಸಾವಿನ ಪ್ರಕರಣದ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಿತು. ಪ್ರಕರಣಕ್ಕೆ ಸಂಬಂಧಿಸಿದ ಅಗತ್ಯ ವಿವರಗಳನ್ನು ಆರೋಗ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಸಭೆಗೆ ಸಲ್ಲಿಸುವಂತೆ ಸೂಚಿಸಲಾಯಿತು.  

ಇದಲ್ಲದೆ, ಕರಿಗಿನಕೊಪ್ಪ ಗ್ರಾಮದಲ್ಲಿರುವ ಮುರಾರ್ಜಿ ವಸತಿ ಶಾಲೆಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ಮಾಹಿತಿಯನ್ನು ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.  

ಪಟ್ಟಣದಲ್ಲಿ ಸ್ವಚ್ಛತಾ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಸಾರ್ವಜನಿಕರಲ್ಲಿ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿ ತಿಂಗಳು ಸ್ವಚ್ಛತಾ ಕಾರ್ಯಕ್ರಮ ಹಾಗೂ ಜಾಗೃತಿ ಜಾಥಾ ಹಮ್ಮಿಕೊಳ್ಳುವಂತೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಿಗೆ ಸೂಚಿಸಲಾಯಿತು.  

ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸಿ, ಕಾನೂನು ಸಾಕ್ಷರತೆ, ಸಾರ್ವಜನಿಕರಲ್ಲಿ ಕಾನೂನು ಅರಿವು ಮೂಡಿಸುವುದು ಹಾಗೂ ಸಾಮಾಜಿಕ ಸಮಸ್ಯೆಗಳ ಪರಿಹಾರಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.  ಕಾರ್ಯಕ್ರಮದ ನಿರೂಪಣೆಯನ್ನು ಶರತ್ ಪವಾರ್ ನಡೆಸಿಕೊಟ್ಟರು. 


ಸುದ್ದಿ ಓದಿ