ಜ್ವಲಂತ ಸಮಸ್ಯೆಗಳಿದ್ದರೆ ಗಮನಕ್ಕೆ ತನ್ನಿ: ಜಿಲ್ಲಾಧಿಕಾರಿ ಪ್ರಭುಲಿಂಗ
ಮುಂಡಗೋಡ: ಇಲ್ಲಿನ ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಕೆಲವು ಸಿಬ್ಬಂದಿ ಬಹಳ ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಕೆಲ ಸಿಬ್ಬಂದಿಯಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ ಅಂತಹ ಸಿಬ್ಬಂದಿಯನ್ನು ಬೇರೆ ಕಡೆ ವರ್ಗಾವಣೆ ಮಾಡುವ ಬಗ್ಗೆ ಗಮನಕ್ಕೆ ತಂದರೆ ಮಾಹಿತಿ ಪಡೆದು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಹೇಳಿದರು.
ಪಟ್ಟಣದ ಮಿನಿ ವಿಧಾನಸೌಧದ ಸಭಾಭವನದಲ್ಲಿ ಬುಧವಾರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು. ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾಹಿತಿ ಪಡೆದು ತಾಲೂಕಿನ ಸಮಸ್ಯೆಗಳ ಬಗ್ಗೆ ಚರ್ಚಿಸಿದ್ದೇನೆ. ತಾಲೂಕಿನಲ್ಲಿ ಇರುವ ಯಾವುದೇ ಜ್ವಲಂತ ಸಮಸ್ಯೆ ಗಮನಕ್ಕೆ ತಂದರೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಬಗೆಹರಿಸಲು ಪ್ರಯತ್ನಿಸುತ್ತೇನೆ. ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿ ಇರುತ್ತೇನೆ. ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇನೆ. ಮಳೆಯಿಂದ ಅಡಿಕೆ ಬೆಳೆ ಹಾನಿಯಾಗಿರುವ ಬಗ್ಗೆ ರೈತರು ಹಾಗೂ ಅಧಿಕಾರಿಗಳು ಮಾಹಿತಿ ನೀಡಿದ್ದು ಈ ಬಗ್ಗೆ ಪರೀಶೀಲಿಸಿ ಪರಿಹಾರ ನೀಡುವ ಕ್ರಮ ಕೈಗೊಳ್ಳಲಾಗುವುದು ಎಂದರು. ಇದಕ್ಕೂ ಮುನ್ನ ಅವರು ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು.
ಈ ವೇಳೆ ಐಎಎಸ್ ಪ್ರೊಬೆಷನರಿ ಜುಬಿನ್ ಮಹಾಪಾತ್ರ, ತಹಶೀಲ್ದಾರ ಶಂಕರ ಗೌಡಿ, ತಾಪಂ.ಇಒ ಪ್ರವೀಣ ಕಟ್ಟಿ ಉಪಸ್ಥಿತರಿದ್ದರು.