ಮೂಲಸೌಕರ್ಯ ಅಭಿವೃದ್ಧಿಗೆ ಒತ್ತಾಯಿಸಿ ಸಿಪಿಐ ಪ್ರತಿಭಟನೆ
ಹೂವಿನಹಡಗಲಿ 14: ತಾಲೂಕಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳ ಅಭಿವೃದ್ಧಿಗೆ ಕುಡಿಯುವ ನೀರು, ಚರಂಡಿ, ರಸ್ತೆ, ವಿದ್ಯುತ್ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿ ಸಿಪಿಐ ನೇತೃತ್ವದಲ್ಲಿ ಕಾಲ್ನಡಿಗೆ ಜಾಥಾ ನಡೆಸಲಾಯಿತು.
ಈ ವೇಳೆ ಸಿಪಿಐ ಪಕ್ಷದ ಖಜಾಂಚಿ ಹಲಗಿ ಸುರೇಶ್ ಮಾತನಾಡಿ, ದೇಶಾದ್ಯಂತ ಬದಲಾವಣೆಯ ಘೋಷಣೆಯೊಂದಿಗೆ ಜಾಗೃತಿ ಜಾಥಾ ಹಮ್ಮಿಕೊಂಡು ಶೋಷಣೆ ವಿರುದ್ಧ ಹೋರಾಟ ನಡೆಸಲು ಭಾರತ ಕಮ್ಯೂನಿಸ್ಟ್ ಪಕ್ಷ (ಸಿಪಿಐ) ಸಿದ್ಧವಾಗಿದೆ ಎಂದರು.
ತಾಲೂಕಿನ ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದ್ದು, ಕೂಡಲೇ ಅಕ್ರಮ ಮದ್ಯ ಮಾರಾಟಗಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ತಾಲೂಕು ಮುಖಂಡ ಮುಕುಂದಗೌಡ ಮಾತನಾಡಿ, ಕೇಂದ್ರ ಸರ್ಕಾರದ ಉದ್ಯೋಗ ಖಾತರಿ ಯೋಜನೆಯ ಮೂಲ ಸ್ವರೂಪವನ್ನು ಬದಲಾಯಿಸಿ ಯೋಜನೆಯನ್ನು ದುರ್ಬಲಗೊಳಿಸುವ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿದರು. ಗ್ರಾಮೀಣ ಪ್ರದೇಶಗಳಲ್ಲಿನ ಭೂಮಿ ಸಮಸ್ಯೆಗಳನ್ನು ನಿವಾರಿಸಲು ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಎಐವೈಎಸ್ ಮುಖಂಡ ಪಕ್ಕೀರೇಶ ಮಾತನಾಡಿ, ಗ್ರಾಮೀಣ ಜನರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಮುಖಂಡರಾದ ಸುರೇಶ್, ನಾಗರಾಜ, ಅಡಿವಜ್ಜಿ ಗಣೇಶ್ ಸೇರಿದಂತೆ ಸಂಘಟನೆಯ ಮಹಿಳಾ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.