ಗೌರವ ಪ್ರಶಸ್ತಿ ಪ್ರದಾನ, ಪುಸ್ತಕ ಬಹುಮಾನ ವಿತರಣೆ ಸಮಾರಂಭ
ಲೋಕದರ್ಶನ ವರದಿ
ವಿಜಯಪುರ 22: ಕನ್ನಡ ಸಾಹಿತ್ಯ, ಭಾಷೆ ಹಾಗೂ ಸಂಸ್ಕೃತಿಯನ್ನು ದೇಶ-ವಿದೇಶಗಳಲ್ಲಿ ಪರಿಚಯಿಸುವಲ್ಲಿ ಅನುವಾದ ಕಾರ್ಯ ಪ್ರಮುಖ ಪಾತ್ರ ವಹಿಸಿದೆ ಎಂದು ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಡಾ. ಚನ್ನಪ್ಪ ಕಟ್ಟಿ ಹೇಳಿದರು.
ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬೆಂಗಳೂರಿನ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ 2026ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ ಹಾಗೂ 2025ನೇ ಸಾಲಿನ ಪುಸ್ತಕ ಬಹುಮಾನ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.
ವಿವಿಧ ಭಾಷೆಗಳಲ್ಲಿನ ಶ್ರೇಷ್ಠ ಸಾಹಿತ್ಯ ಕೃತಿಗಳನ್ನು ಕನ್ನಡಕ್ಕೆ ಹಾಗೂ ಕನ್ನಡದ ಕೃತಿಗಳನ್ನು ಇತರ ಭಾಷೆಗಳಿಗೆ ಅನುವಾದಿಸುವ ಮೂಲಕ ಭಾಷೆಗಳ ನಡುವಿನ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಸಂಬಂಧವನ್ನು ಬಲಪಡಿಸಬಹುದಾಗಿದೆ ಎಂದು ಹೇಳಿದರು.
ಕುವೆಂಪು ಭಾಷಾ ಭಾರತಿ ಪ್ರಾಧಿಕಾರವು ಕನ್ನಡ ಸಾಹಿತ್ಯದ ಬೆಳವಣಿಗೆಗೆ ತನ್ನದೇ ಆದ ವಿಶೇಷ ಕೊಡುಗೆ ನೀಡಿದೆ. ರಾಜ್ಯದಲ್ಲಿ ವಿವಿಧ ಸಾಹಿತ್ಯ ಅಕಾಡೆಮಿಗಳು ಹಾಗೂ ಪ್ರಾಧಿಕಾರಗಳ ಸ್ಥಾಪನೆ, ಅವುಗಳ ಬೆಳವಣಿಗೆ ಮತ್ತು ಸಾಹಿತ್ಯ ಕ್ಷೇತ್ರಕ್ಕೆ ನೀಡುತ್ತಿರುವ ಕೊಡುಗೆಗಳ ಕುರಿತು ಅವರು ವಿವರಿಸಿದರು.
ವಿವಿಧ ಭಾಷೆಗಳಲ್ಲಿ ರಚನೆಯಾದ ಮಹತ್ವದ ಸಾಹಿತ್ಯ ಕೃತಿಗಳನ್ನು ಕನ್ನಡಕ್ಕೆ ಅನುವಾದಿಸುವುದು ಹಾಗೂ ಕನ್ನಡದ ಕೃತಿಗಳನ್ನು ಭಾರತದ ಇತರ ಭಾಷೆಗಳಿಗೆ ಅನುವಾದಿಸುವುದು ಪ್ರಾಧಿಕಾರದ ಪ್ರಮುಖ ಉದ್ದೇಶವಾಗಿದೆ. ಆ ಮೂಲಕ ಕನ್ನಡದ ಸಾಹಿತ್ಯಿಕ ಶ್ರೀಮಂತಿಕೆ, ಸಾಂಸ್ಕೃತಿಕ ವೈಶಿಷ್ಟ್ಯ ಹಾಗೂ ಭಾಷೆಯ ಮಹತ್ವವನ್ನು ಜಗತ್ತಿಗೆ ಪರಿಚಯಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.