ಶಶಿಧರ ನೀಲಗಾರ ಅವರಿಗೆ ಗೃಹ ಸಚಿವರಿಂದ ಮುಖ್ಯಮಂತ್ರಿಗಳ ಚಿನ್ನದ ಪದಕ ಪ್ರದಾನ
ಘಟಪ್ರಭಾ 24: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಬೆಳಗಾವಿ ಜಿಲ್ಲಾ ಅಗ್ನಿಶಾಮಕ ಠಾಣೆಯಲ್ಲಿ ಜಿಲ್ಲಾ ಅಗ್ನಿಶಾಮಕ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಗೋಕಾಕ ತಾಲೂಕಿನ ಶಿಂದಿಕುರಬೇಟ ಗ್ರಾಮದ ಶಶಿಧರ ಶಂಕರ ನೀಲಗಾರ ಅವರಿಗೆ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಕಳೆದ 15 ವರ್ಷಗಳಿಂದ ಅತ್ಯುತ್ತಮ ಸೇವೆ ಸಲ್ಲಿಸಿದ್ದಕ್ಕಾಗಿ ಕರ್ನಾಟಕ ಸರ್ಕಾರ ಸನ್ 2023ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕವನ್ನು ಬೆಂಗಳೂರಿನಲ್ಲಿ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ನೀಡಿ ಗೌರವಿಸಿದರು.
ಶಶಿಧರ ಶಂಕರ ನೀಲಗಾರ ಅವರು ಸನ್ 2008ರಲ್ಲಿ ಕರ್ನಾಟಕ ರಾಜ್ಯ ಅಗ್ನಿ ಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿಯಾಗಿ ಸವಣೂರ, ದಾವಣಗೇರಿ, ರಾಯಚೂರ ಸೇರಿದಂತೆ ವಿವಿಧ ಕಡೆ ಸೇವೆ ಸಲ್ಲಿಸಿ 2015ರಲ್ಲಿ ಜಿಲ್ಲಾ ಅಗ್ನಿ ಶಾಮಕ ಅಧಿಕಾರಿಯಾಗಿ ಬಡ್ತಿ ಹೊಂದಿ ಸದ್ಯ ಬೆಳಗಾವಿಯ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಜಿಲ್ಲಾ ಅಗ್ನಿಶಾಮಕ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಮುಖ್ಯಮಂತ್ರಿ ಚಿನ್ನದ ಪದಕ ಪಡೆದ ಶಶಿಧರ ನೀಲಗಾರ ಅವರಿಗೆ ಶಿಂದಿಕುರಬೇಟ ಗ್ರಾಮದ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.