ಸರ್ವತೋಮುಖ ಬೆಳವಣಿಗೆಗಾಗಿ ಮಕ್ಕಳು ಬೇಸಿಗೆ ಶಿಬಿರಕ್ಕೆ ಕಡ್ಡಾಯವಾಗಿ ಹಾಜರಾಗಿ:ಪ್ರವೀಣ
ಲೋಕದರ್ಶನ ವರದಿ
ಮುಂಡಗೋಡ:ರಜಾ ಅವಧಿಯಲ್ಲಿ ಮಕ್ಕಳು ತಮ್ಮ ಸರ್ವತೋಮುಖ ಬೆಳವಣಿಗೆಗಾಗಿ ಬೇಸಿಗೆ ಶಿಬಿರಕ್ಕೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ತಾಲೂಕಾ ಪಂಚಾಯತ ಕಾರ್ಯ ನಿರ್ವಹಣಾಧಿಕಾರಿ ಪ್ರವೀಣ ಕಟ್ಟಿ ಹೇಳಿದರು.
ಪಟ್ಟಣದ ಶಾಸಕರ ಮಾದರಿ ಶಾಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರವಾರ, ತಾಲೂಕಾ ಆಡಳಿತ, ತಾಲೂಕಾ ಪಂಚಾಯತ, ಶಿಶು ಅಭಿವೃದ್ಧಿ ಯೋಜನೆ ಹಾಗೂ ತಾಲೂಕಾ ಬಾಲಭವನ ಸೊಸೈಟಿ ಇವರ ಸಂಯುಕ್ತ ಆಶ್ರಯದಲ್ಲಿ 5ರಿಂದ16ವರ್ಷದ ಮಕ್ಕಳಿಗಾಗಿ ಗುರುವಾರ ಆಯೋಜಿಸಿದ್ದ ಬೇಸಿಗೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ರಜಾ ಅವಧಿಯಲ್ಲಿ ಮಕ್ಕಳಿಗೆ ಸಾಕಷ್ಟು ಸಮಯ ಲಭ್ಯವಿದೆ. ಎಲ್ಲ ಚಟುವಟಿಕೆಗಳನ್ನು ಕಲಿತುಕೊಳ್ಳಲು ಸದವಕಾಶವಿದ್ದು ಶಿಬಿರದ ಸದುಪಯೋಗ ಪಡೆದುಕೊಳ್ಳಲು ಅವರು ಕರೆ ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಎಸ್.ಪಟಗಾರ ಮಾತನಾಡಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಭಾಗವಹಿಸಿ ತಮ್ಮ ಕೌಶಲ್ಯ ಅಭಿವೃದ್ಧಿ ಪಡಿಸಿಕೊಳ್ಳಲು ತಿಳಿಸಿದರು. ಪ್ರಭಾರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ದೀಪಾ ಬಂಗೇರ ಪ್ರಾಸ್ತಾವಿಕವಾಗಿ ಮಾತನಾಡಿ ಶಿಬಿರದಲ್ಲಿ ಮಕ್ಕಳಿಗೆ ಕಲಿಕೆಗೆ ಸಾಕಷ್ಟು ಅವಕಾಶವಿದ್ದು ಕ್ರಿಯಾತ್ಮಕ ಹಾಗೂ ಸೃಜನಾತ್ಮಕ ಚಟುವಟಿಕೆಗಳನ್ನು ಕಲಿಯುವುದರ ಮೂಲಕ ಬೇಸಿಗೆ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಈ ವೇಳೆ ಪ.ಪಂ.ಸದಸ್ಯ ವಿಶ್ವನಾಥ ಪವಾಡಶೆಟ್ಟರ, ಸಂಪನ್ಮೂಲ ವ್ಯಕ್ತಿಗಳಾದ ಆರ್.ಎಸ್.ಕಲಾಲ, ಕೆ.ಕೆ.ಕುರುವಿನಕೊಪ್ಪ, ಅಂಗನವಾಡಿ ಮೇಲ್ವಿಚಾರಕಿಯರಾದ ಫಾತಿಮಾ ಕಿತ್ತೂರ, ಮಂಜುಳಾ ಮರಡಿಯವರ, ಛಾಯಾ ಮೊಗೇರ, ಗೀತಾ ಮಠಪತಿ ಹಾಗೂ ಮುಂತಾದವರು ಉಪಸ್ಥಿತರಿದ್ದರು. ಮೇಲ್ವಿಚಾರಕಿ ಪೂರ್ಣಿಮಾ ದೊಡ್ಡಮನಿ ಕಾರ್ಯಕ್ರಮ ನಿರೂಪಿಸಿದರು. ಮೇಲ್ವಿಚಾರಕಿ ರೂಪಾ ಅಂಗಡಿ ವಂದಿಸಿದರು.