ಕಾರವಾರ

ಮತಾಂತರ ನಿಷೇಧ ಕಾಯ್ದೆ ರದ್ದತಿಗೆ ಆಗ್ರಹಿಸಿ ಕ್ರೈಸ್ತ ಸಮುದಾಯದಿಂದ ಮೌನ ಮೆರವಣಿಗೆ

ಮತಾಂತರ ನಿಷೇಧ ಕಾಯ್ದೆ ರದ್ದತಿಗೆ ಆಗ್ರಹಿಸಿ ಕ್ರೈಸ್ತ ಸಮುದಾಯದಿಂದ ಮೌನ ಮೆರವಣಿಗೆ


           ಕಾರವಾರ 12: ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕಿನ ಸಂರಕ್ಷಣಾ ಅಧಿನಿಯಮ-2022 (ಮತಾಂತರ ನಿಷೇಧ ಕಾಯ್ದೆ) ರದ್ದುಗೊಳಿಸುವಂತೆ ಹಾಗೂ ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ನಡೆಯುವ ದ್ವೇಷಪೂರಿತ ಭಾಷಣ ಮತ್ತು ಕೋಮು ಪ್ರಚೋದಕ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತೆ ಸರ್ಕಾರವನ್ನು ಆಗ್ರಹಿಸಿ ಕ್ರಿಶ್ಚಿಯನ್ ಫೋರಂ ಫಾರ್ ಹ್ಯೂಮನ್ ರೈಟ್ಸ್‌ ವತಿಯಿಂದ ಕಾರವಾರದಲ್ಲಿ ಗುರುವಾರ ಮೌನ ಮೆರವಣಿಗೆ ಮಾಡಲಾಯಿತು.

          ಅಲ್ಪ ಸಂಖ್ಯಾತ ಕ್ರಿಶ್ಚಿಯನ್ನರ ಸಮಗ್ರ ರಕ್ಷಣಾ ನೀತಿ ಜಾರಿಗೆ ತರುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ಯುನೈಟೆಡ್ ಕ್ರಿಶ್ಚಿಯನ್ ಫೋರಂ ಸರ್ಕಾರವನ್ನು ಆಗ್ರಹಿಸಿತು. ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ಕ್ರೈಸ್ತ ಸಮುದಾಯದವರು ಕಾರವಾರ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.  

            ಮನವಿಯಲ್ಲಿ, ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ 2022ರ ಧಾರ್ಮಿಕ ಸ್ವಾತಂತ್ರ್ಯ ಹಕ್ಕಿನ ಸಂರಕ್ಷಣಾ ಕಾಯ್ದೆಯು ಧಾರ್ಮಿಕ ಅಲ್ಪಸಂಖ್ಯಾತರ ಹಕ್ಕುಗಳು ಮತ್ತು ಸಂವಿಧಾನ ನೀಡಿರುವ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಪರಿಣಾಮ ಬೀರುತ್ತಿದೆ ಎಂದು ಆತಂಕ ವ್ಯಕ್ತಪಡಿಸಲಾಗಿದೆ. ವಿಶೇಷವಾಗಿ ಕ್ರೈಸ್ತ ಸಮುದಾಯದ ಧಾರ್ಮಿಕ ಆಚರಣೆ, ನಂಬಿಕೆ ಹಾಗೂ ಧರ್ಮವನ್ನು ಪ್ರಚಾರ ಮಾಡುವ ಹಕ್ಕುಗಳ ಕುರಿತು ಅನಗತ್ಯ ಅನುಮಾನ ಮತ್ತು ಭಯದ ವಾತಾವರಣ ನಿರ್ಮಾಣವಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಲಾಗಿದೆ.

           ಭಾರತೀಯ ಸಂವಿಧಾನದ 25ನೇ ವಿಧಿಯು ಪ್ರತಿಯೊಬ್ಬ ವ್ಯಕ್ತಿಗೂ ಆತ್ಮಸಾಕ್ಷಿಯ ಸ್ವಾತಂತ್ರ್ಯ ಹಾಗೂ ಧರ್ಮವನ್ನು ಸ್ವೀಕರಿಸುವ, ಆಚರಿಸುವ ಮತ್ತು ಪ್ರಚಾರ ಮಾಡುವ ಹಕ್ಕನ್ನು ಖಾತರಿಪಡಿಸಿದೆ. ಆದರೆ ಪ್ರಸ್ತುತ ಕಾಯ್ದೆಯಲ್ಲಿರುವ ವ್ಯಾಪಕ ನಿರ್ಬಂಧಗಳು ಧಾರ್ಮಿಕ ಸ್ವಾತಂತ್ರ್ಯವನ್ನು ಮೊಟಕುಗೊಳಿಸುವ ಸಾಧ್ಯತೆಯಿದ್ದು, ಕಾಯ್ದೆಯ ದುರುಪಯೋಗದಿಂದ ಧಾರ್ಮಿಕ ಅಲ್ಪಸಂಖ್ಯಾತರು ಕಾನೂನು ಕ್ರಮದ ಭೀತಿಯಲ್ಲಿ ಬದುಕುವಂತಾಗಿದೆ ಎಂದು ಕ್ರಿಶ್ಚಿಯನ್ ಮುಖಂಡರು ಪ್ರತಿಭಟನೆ ವೇಳೆ ಮಾಧ್ಯಮಗಳಿಗೆ ಹೇಳಿದರು. 


ಸುದ್ದಿ ಓದಿ