ಪೌರತ್ವ ತಿದ್ದುಪಡಿ ಕಾಯ್ದೆ 'ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತರಿಗೆ ನ್ಯಾಯ ಒದಗಿಸುತ್ತದೆ' ಭಾರತ ಸ್ಪಷ್ಟನೆ

ವಾಷಿಂಗ್ಟನ್, ಡಿ 19 ಭಾರತ ಸರ್ಕಾರ ರೂಪಿಸಿರುವ ಹೊಸ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆಗಳು ಭುಗಿಲೆದ್ದಿರುವ ಬೆನ್ನಲ್ಲೇ ದೇಶ, ವಿದೇಶಗಳಲ್ಲಿ ಈ ವಿಷಯ ಚರ್ಚೆಗೆ ಗ್ರಾಸವಾಗಿದೆ  ಅಫ್ಘಾನಿಸ್ತಾನ ಸೇರಿದಂತೆ ಕೆಲವು ದೇಶಗಳಿಂದ ಕಿರುಕುಳಕ್ಕೊಳಗಾದ ಧಾರ್ಮಿಕ ಅಲ್ಪಸಂಖ್ಯಾತರ ಸಮಸ್ಯೆ ಪರಿಹರಿಸಲು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಕಟ್ಟುನಿಟ್ಟಾಗಿ ವಿನ್ಯಾಸಗೊಳಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಎಸ್. ಜೈಶಂಕರ್ ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ ಭಾರತದಲ್ಲಿ ಅಲ್ಪಸಂಖ್ಯಾತರ ರಕ್ಷಣೆಗಾಗಿ ಕಾಳಜಿ ವಹಿಸುವಂತೆ ಅಮೆರಿಕ ಮನವಿ ಮಾಡಿದೆ. ಅಮೆರಿಕ ಸರ್ಕಾರದ ಕಾರ್ಯದರ್ಶಿ ಮೈಕ್ ಪೊಂಪಿಯೊ, ಟ್ರಂಪ್ ಆಡಳಿತವು ಅಲ್ಪಸಂಖ್ಯಾತರ ಧಾರ್ಮಿಕ ಹಕ್ಕುಗಳನ್ನು ರಕ್ಷಿಸುವ ಬಗ್ಗೆ ಆಳವಾಗಿ ಕಾಳಜಿ ವಹಿಸುತ್ತದೆ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ. ಪೊಂಪಿಯೊ ಮತ್ತು ರಕ್ಷಣಾ ಕಾರ್ಯದರ್ಶಿ ಮಾರ್ಕ್ ಎಸ್ಪರ್ ಅವರು ಬುಧವಾರ ಡಾ.ಜೈಶಂಕರ್ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಆಯಕಟ್ಟಿನ ಮಹತ್ವದ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡರು ಸಿಎಎ ಎನ್ನುವುದು 'ಕೆಲವು ದೇಶಗಳಿಂದ' ಅಂದರೆ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದ ಕಿರುಕುಳಕ್ಕೊಳಗಾದ ಧಾರ್ಮಿಕ ಅಲ್ಪಸಂಖ್ಯಾತರ ಅಗತ್ಯಗಳನ್ನು ಪರಿಹರಿಸಲು ವಿನ್ಯಾಸಗೊಳಿಸಲಾದ ಒಂದು ಮಾನದಂಡವಾಗಿದೆ ಎಂದು ಡಾ.ಜೈಶಂಕರ್ ಅವರು ಪೊಂಪಿಯೊ ಜತೆಗಿನ ಮಾತುಕತೆ ಸಂದರ್ಭದಲ್ಲಿ  ಸ್ಪಷ್ಟಪಡಿಸಿದ್ದಾರೆ ಎಂದು ತಿಳಿದುಬಂದಿದೆ.