ಅಮೃತ ಸರೋವರದ ದಂಡೆಯಲ್ಲಿ ಸ್ವಚ್ಛತಾ ಕಾರ್ಯ
ನರಗುಂದ: ತಾಲೂಕಿನ ಬೆನಕನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಮೃತ ಸರೋವರದ ಕೆರೆಯ ದಂಡೆಯಲ್ಲಿ ವಿಶೇಷ ಆಂದೋಲನ-6ರ ಅಂಗವಾಗಿ ಸ್ವಚ್ಛತಾ ಕಾರ್ಯ ಹಾಗೂ ಸಸಿ ನೆಡುವ ಕಾರ್ಯಕ್ರಮ ನಡೆಯಿತು.ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರ್ ಚಿನಗುಂಡಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ವಚ್ಛತಾ ಸಿಬ್ಬಂದಿಯೊಂದಿಗೆ ಕೆರೆಯ ದಂಡೆಯನ್ನು ಸ್ವಚ್ಛಗೊಳಿಸಲಾಯಿತು.
ಬಳಿಕ ಸಸಿಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂದೇಶ ಸಾರಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಧರ್ ಚಿನಗುಂಡಿ, ಗ್ರಾಮೀಣ ಪ್ರದೇಶಗಳಲ್ಲಿನ ಜಲಮೂಲಗಳ ಸಂರಕ್ಷಣೆಗೆ ಆದ್ಯತೆ ನೀಡಬೇಕು. ಬರಗಾಲದ ಸಂದರ್ಭದಲ್ಲಿ ನೀರಿನ ಮಹತ್ವ ಅರಿವಾಗುತ್ತದೆ. ಲಭ್ಯವಿರುವ ನೀರನ್ನು ಮಿತವಾಗಿ ಬಳಸುವುದರ ಜತೆಗೆ ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆಯಾಗದಂತೆ ನೀರನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸ್ವಚ್ಛತಾ ಸಿಬ್ಬಂದಿ ಹಾಗೂ ಮಹಿಳಾ ಸದಸ್ಯರಿಗೆ ಸ್ವಚ್ಛತಾ ಸಲಕರಣೆಗಳನ್ನು ವಿತರಿಸಲಾಯಿತು.ಈ ಸಂದರ್ಭದಲ್ಲಿ ಬೆನಕನಕೊಪ್ಪ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ.ಆರ್. ರಾಯನಗೌಡರ, ತಾಲೂಕು ಸಿಬ್ಬಂದಿ ವಿಬಿಜಿರಾಮ್, ತಾಂತ್ರಿಕ ಸಹಾಯಕ ಲಿಂಗರಾಜ ಮುದಿಗೌಡರ, ಸುರೇಶ್ ಬಾಳಿಕಾಯಿ, ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.