ಸ್ವಂತ ಖರ್ಚಲ್ಲಿ ಶಾಸಕ ಪ್ರಕಾಶ್ ಕೋಳಿವಾಡರಿಂದ ಮೋಡ ಬಿತ್ತನೆ
ರಾಣಿಬೆನ್ನೂರು4: ಹಾವೇರಿ ಜಿಲ್ಲೆಯಲ್ಲಿ ಸೋಮವಾರದಿಂದ ಮೂರು ದಿನಗಳ ಕಾಲ ಮೋಡ ಬಿತ್ತನೆ ಮಾಡಲಾಗುವುದು ಎಂದು ಶಾಸಕ ಪ್ರಕಾಶ ಕೋಳಿವಾಡ ತಿಳಿಸಿದರು.ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿ, ನಮ್ಮ ಪಿಕೆಕೆ (ಪಕ್ಷಾತೀತ ಕಾಯಕದ ಕನಸು) ಸಂಸ್ಥೆಯ ವತಿಯಿಂದ ಈ ಮೋಡ ಬಿತ್ತನೆ ಮಾಡಲಾಗುತ್ತಿದೆ. ಸೆ.4ರಂದು ಮಧ್ಯಾಹ್ನ 2ಕ್ಕೆ ಹುಬ್ಬಳ್ಳಿಯ ವಿಮಾನ ನಿಲ್ದಾಣದಿಂದ ಕಾರ್ಯಾಚರಣೆ ಪ್ರಾರಂಭಿಸಲಾಗುವುದು. ಇದಕ್ಕೂ ಮೊದಲು ಭಾನುವಾರ ಮೋಡ ಬಿತ್ತನೆಗೆ ಪ್ರಾಯೋಗಿಕವಾಗಿ ಚಾಲನೆ ನೀಡಲಾಗುವುದು ಎಂದು ಹೇಳಿದ್ದಾರೆ. ನಾನು ಚುನಾವಣೆಯ ಸಂದರ್ಭದಲ್ಲಿ ಹೇಳಿದ ನನ್ನ ಗ್ಯಾರೆಂಟಿ ಇದಾಗಿತ್ತು ಹಾಗಾಗಿ ಜಿಲ್ಲೆಯಲ್ಲಿ ಬರಗಾಲ ಬಿದ್ದಿರುವುದರಿಂದ ರೈತರು ಕಂಗಾಲಾಗಿದ್ದಾರೆ. ಪ್ರತಿನಿತ್ಯ ರೈತರ ಗೋಳು ನೋಡದೆ ನಾನು ಈ ನಿರ್ಧಾರ ತೆಗೆದುಕೊಂಡು ಸ್ವಂತ ಸಂಸ್ಥೆಯ ಖರ್ಚಿನಲ್ಲಿಯೇ ಮೋಡ ಬಿತ್ತನೆ ಮಾಡಲು ನಿರ್ಧಾರ ಮಾಡಲಾಗಿತ್ತು. ವಿಮಾನ ಮೂರು ದಿನಗಳ ಕಾಲ ಸ್ಥಳೀಯವಾಗಿದ್ದು, ಮೋಡಗಳ ಲಭ್ಯತೆಯ ಅನುಗುಣವಾಗಿ ಅಲ್ಲಲ್ಲಿ ಮೋಡಬಿತ್ತನೆ ಮಾಡಲಿದೆ. ಹವಾಮಾನ ಇಲಾಖೆಯಿಂದ ಈ ಮೂರು ದಿನಗಳ ಕಾಲ ಜಿಲ್ಲೆಯಲ್ಲಿ ಹೆಚ್ಚಿನ ಮೋಡಗಳು ಸಿಗಲಿವೆ ಎನ್ನುವ ಮಾಹಿತಿಯಿದೆ. ಈಗಾಗಲೇ ಮೋಡಬಿತ್ತನೆ ಮಾಡಲು ಜಿಲ್ಲಾಧಿಕಾರಿಗಳು ಹಾಗೂ ಕೇಂದ್ರ ಸರ್ಕಾರದಿಂದ ಪರವಾನಗಿ ಪಡೆದುಕೊಳ್ಳಲಾಗಿದೆ. ಸಚಿವರಾದ ಶಿವಾನಂದ ಪಾಟೀಲ, ಎಚ್.ಕೆ. ಪಾಟೀಲ, ಸತೀಶ ಜಾರಕಿಹೊಳಿ, ಸಂತೋಷ ಲಾಡ್ ಹಾಗೂ ಹಾವೇರಿ, ಧಾರವಾಡ ಜಿಲ್ಲೆಗಳ ಶಾಸಕರು ಈ ಮೋಡ ಬಿತ್ತನೆಗೆ ಚಾಲನೆ ನೀಡಲಿದ್ದಾರೆ ಎಂದು ಹೇಳಿದರು