ಈದ್-ಎ-ಮಿಲಾದ್ ಶಾಂತಿ, ಸೌಹಾರ್ದತೆಯಿಂದ ಆಚರಿಸಲು ಜಿಲ್ಲಾಧಿಕಾರಿ ಸೂಚನೆ
ಬೆಳಗಾವಿ 21: ಈದ್-ಎ-ಮಿಲಾದ್ ಹಬ್ಬವನ್ನು ಶಾಂತಿ, ಸೌಹಾರ್ದತೆ ಹಾಗೂ ಎಲ್ಲರ ಸಹಕಾರದೊಂದಿಗೆ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಹಬ್ಬದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಬ್ಬದ ಸಂದರ್ಭದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದರು.
ಮೆರವಣಿಗೆಯಲ್ಲಿ ಡಿ.ಜೆ. ಸಂಪೂರ್ಣ ನಿಷೇಧಿಸಲಾಗಿದ್ದು, ಸಮಾಜದ ಮುಖಂಡರು ಯುವಕರಿಗೆ ಈ ಕುರಿತು ಮನವರಿಕೆ ಮಾಡಬೇಕು. ಮೆರವಣಿಗೆ ಮಾರ್ಗದಲ್ಲಿನ ರಸ್ತೆಗಳನ್ನು ದುರಸ್ತಿಗೊಳಿಸುವುದರ ಜತೆಗೆ ವಿದ್ಯುತ್ ಅವಘಡಗಳು ಸಂಭವಿಸದಂತೆ ಹೆಸ್ಕಾಂ ಹಾಗೂ ಪೊಲೀಸ್ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು. ಮೆರವಣಿಗೆಯನ್ನು ಸಂಜೆ 6 ಗಂಟೆಯೊಳಗೆ ಪೂರ್ಣಗೊಳಿಸುವಂತೆ ಸಮಾಜದ ಮುಖಂಡರಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಪೊಲೀಸ್ ಆಯುಕ್ತ ಭೂಷಣ ಬೋರಸೆ ಮಾತನಾಡಿ, ಪ್ರಚೋದನಾತ್ಮಕ ಅಲಂಕಾರ, ಪೋಸ್ಟರ್ ಹಾಗೂ ಬ್ಯಾನರ್ಗಳನ್ನು ಅಳವಡಿಸಬಾರದು. ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವ ಸಂದೇಶಗಳನ್ನು ಹರಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ಶಾಸಕ ರಾಜು ಸೇಠ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದರು.