ಮೈಸೂರು; ಜ. 23 : ರಾಜ್ಯದ ಮೊದಲ ವೈದ್ಯಕೀಯ ಸಂಸ್ಥೆ ಮೈಸೂರು ಮೆಡಿಕಲ್ ಕಾಲೇಜಿಗೆ ಎಲ್ಲಾ ಅಗತ್ಯ ಸೌಕರ್ಯ ಒದಗಿಸಿ, ಆರೋಗ್ಯ ಸೇವೆಯ ಗುಣಮಟ್ಟ ಹೆಚ್ಚಿಸಲು ರಾಜ್ಯ ಸರ್ಕಾರ ಬದ್ಧ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
ಮೈಸೂರು ವೈದ್ಯಕೀಯ ಕಾಲೇಜಿನ ಯುಜಿ, ಪಿಜಿ ವಿದ್ಯಾರ್ಥಿಗಳ ವಸತಿ ನಿಲಯದ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಲಾ 40 ಕೋಟಿ ರೂ. ವೆಚ್ಚದಲ್ಲಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರ ವಸತಿ ನಿಲಯ ಕಟ್ಟಡ ನಿರ್ಮಾಣ ಮಾಡಲಾಗುವುದು. ಹಳೆಯ ಕಟ್ಟಡದ ದುರಸ್ತಿ ಹಾಗೂ ನಿರ್ವಹಣೆಗೂ ಗಮನ ಹರಿಸುತ್ತೇವೆ ಎಂದು ಅವರು ಭರವಸೆ ನೀಡಿದರು.
ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಕಾಮಗಾರಿ ಏಪ್ರಿಲ್‌ನಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ. ಆಸ್ಪತ್ರೆಯಲ್ಲಿ ಅಗತ್ಯ ಮೂಲ ಸೌಕರ್ಯ, ಸಿಬ್ಬಂದಿ ಮತ್ತು ಇನ್ನಿತರ ಸವಲತ್ತು ಒದಗಿಸಲಾಗುವುದು. ಹೊರ ರೋಗಿಗಳ ಘಟಕಕ್ಕೂ ಒತ್ತಾಯ ಕೇಳಿಬಂದಿದ್ದು, ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅಶ್ವತ್ಥ ನಾರಾಯಣ ತಿಳಿಸಿದರು.