ಜುಲೈ 5ರೊಳಗೆ ಮತದಾರರ ಪಟ್ಟಿ ಪರಿಷ್ಕರಣೆ ಶೇ.100 ಪೂರ್ಣಗೊಳಿಸಿ
ವಿಜಯನಗರ (ಹೊಸಪೇಟೆ) 4: ಜುಲೈ 5ರೊಳಗೆ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ಶೇ.100ರಷ್ಟು ಪೂರ್ಣಗೊಳಿಸುವಂತೆ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿ ಡಾ. ಕೆ.ಜಿ. ಜಗದೀಶ್ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಯಾವುದೇ ಅರ್ಹ ಮತದಾರರ ಹೆಸರು ಕೈಬಿಡದಂತೆ ಬಿಎಲ್ಒಗಳು ಮನೆ ಮನೆಗೆ ಭೇಟಿ ನೀಡಿ ನಿಖರ ಮಾಹಿತಿ ಸಂಗ್ರಹಿಸಬೇಕು ಎಂದು ಸೂಚಿಸಿದರು. ಸಾರ್ವಜನಿಕರು ಮನೆಯಲ್ಲಿ ಇಲ್ಲದಿದ್ದರೂ ನಿರ್ಲಕ್ಷ್ಯ ವಹಿಸದೆ ಅಗತ್ಯ ಮಾಹಿತಿ ಸಂಗ್ರಹಿಸಿ, ಹಿರಿಯ ಅಧಿಕಾರಿಗಳು ಪ್ರತಿದಿನ ಕಾರ್ಯದ ಪ್ರಗತಿಯನ್ನು ಪರೀಶೀಲಿಸಬೇಕು ಎಂದರು. ನಗರ ಹಾಗೂ ಗ್ರಾಮೀಣ ಪ್ರದೇಶಗಳಿಂದ ತಾತ್ಕಾಲಿಕವಾಗಿ ಸ್ಥಳಾಂತರಗೊಂಡಿರುವವರ ಮಾಹಿತಿಯನ್ನೂ ಸೂಕ್ತವಾಗಿ ದಾಖಲಿಸಬೇಕು ಎಂದು ತಿಳಿಸಿದರು.
ಮಳೆ ಕೊರತೆ; ಕೃಷಿ ಇಲಾಖೆಗೆ ಸೂಚನೆ
ಈ ವರ್ಷ ಮುಂಗಾರು ಮಳೆ ನೀರೀಕ್ಷಿತ ಪ್ರಮಾಣದಲ್ಲಿ ಆಗದಿರುವ ಹಿನ್ನೆಲೆಯಲ್ಲಿ ಕೃಷಿ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಪರ್ಯಾಯ ಬೆಳೆ ಬೀಜಗಳ ದಾಸ್ತಾನು ಸಿದ್ಧವಾಗಿರಬೇಕು ಹಾಗೂ ಬೆಳೆ ಸಮೀಕ್ಷೆ ಪಾರದರ್ಶಕವಾಗಿ ನಡೆಯಬೇಕು ಎಂದು ಸೂಚಿಸಿದರು. ಮಳೆ ಕೊರತೆ ಅಥವಾ ನೆರೆ ಹಾನಿಯಿಂದ ರೈತರಿಗೆ ನೆರವಾಗಲು ಬೆಳೆ ವಿಮೆ ನೋಂದಣಿ ಕಾರ್ಯವನ್ನು ಶೇ.100ರಷ್ಟು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕುಡಿಯುವ ನೀರಿನ ಸಮಸ್ಯೆ ಎದುರಿಸಲು ಸಿದ್ಧತೆ
ಮುಂಗಾರು ವೈಫಲ್ಯದ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇರುವ ಗ್ರಾಮಗಳನ್ನು ಮುಂಚಿತವಾಗಿ ಗುರುತಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಅಗತ್ಯವಿದ್ದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಲು ಸಿದ್ಧತೆ ಮಾಡಿಕೊಳ್ಳಬೇಕು. ಹೊಸ ಕೊಳವೆಬಾವಿ ಕೊರೆಸುವುದನ್ನು ಕೊನೆಯ ಆಯ್ಕೆಯಾಗಿ ಪರಿಗಣಿಸಬೇಕು ಎಂದು ತಿಳಿಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಮಾತನಾಡಿ, ಎಸ್ಐಆರ್ ನೋಂದಣಿ ಪ್ರಕ್ರಿಯೆಯನ್ನು ನಿಗದಿತ ಅವಧಿಯೊಳಗೆ ಶೇ.100ರಷ್ಟು ಪೂರ್ಣಗೊಳಿಸಿದ ಬಿಎಲ್ಒಗಳನ್ನು ಪ್ರಶಂಸಾಪತ್ರ ನೀಡಿ ಗೌರವಿಸಲಾಗುವುದು ಎಂದು ಹೇಳಿದರು. ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ, ಅಪರ ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ, ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.