ಸರ್ವೆ ಮಾಡಿ ನಿವೇಶನ ರಹಿತ ಸಫಾಯಿ ಕರ್ಮಚಾರಿಗಳ ಸೌಲಭ್ಯ ಕಲ್ಪಿಸಿ ; ಸಹಾಯಕ ಆಯುಕ್ತ ಸಿದ್ರಾಮೇಶ್ವರ ಸೂಚನೆ: ವಿಜಯನಗರ ಉಪವಿಭಾಗ ಮಟ್ಟದ ಜಾಗೃತಿ, ಉಸ್ತುವಾರಿ ಸಮಿತಿ ಸಭೆ
ಲೋಕದರ್ಶನ ವರದಿ
ಹೊಸಪೇಟೆ(ವಿಜಯನಗರ),ಡಿ.27(ಕರ್ನಾಟಕ ವಾರ್ತೆ): ಹೊಸಪೇಟೆಯ ಸಹಾಯಕ ಆಯುಕ್ತರಾದ ಸಿದ್ರಾಮೇಶ್ವರ ಅವರ ಅಧ್ಯಕ್ಷತೆಯಲ್ಲಿ ಮ್ಯಾನುವಲ್ ಸ್ಕ್ಯಾವೆಂಜರ್ಸಗಳ ನಿಷೇಧ ಮತ್ತು ಉದ್ಯೋಗ, ಪುನರ್ವಸತಿ ಕಾಯಿದೆ 2013 ಕ್ಕೆ ಸಂಬಂಧಿಸಿದಂತೆ ಹೊಸಪೇಟೆ ಉಪವಿಭಾಗ ಮಟ್ಟದ ನಿಗಾ ಸಮಿತಿ ಸಭೆ ಹಾಗೂ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ (ದೌರ್ಜನ್ಯ ನಿಯಂತ್ರಣ) ನಿಯಮಗಳು 1995ರ ನಿಯಮ 17 ರಂತೆ ಉಪವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯು ಸಹಾಯಕ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ಮಂಗಳವಾರದಂದು ನಡೆಯಿತು.
ಸಹಾಯಕ ಆಯುಕ್ತರಾದ ಸಿದ್ರಾಮೇಶ್ವರ ಅವರು ಹೊಸಪೇಟೆ ನಗರದ ಎಲ್ಲಾ ಸಫಾಯಿ ಕರ್ಮಚಾರಿಗಳ ವಸತಿ ಸೌಲಭ್ಯ ಇರುವ ಕುರಿತು ಸರ್ವೆ ಮಾಡಿ, ನಿವೇಶನ ರಹಿತ ಫಲಾನುಭವಿಗಳಿಗೆ ನಿವೇಶನ ಸೌಲಭ್ಯವನ್ನು ಕಲ್ಪಿಸಿಕೊಡುವಂತೆ ನಗರಸಭೆ ಅಧಿಕಾರಿಗೆ ಸೂಚಿಸಿದರು.
ಎಲ್ಲಾ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಸುತ್ತಿರುವ ಪೌರಕಾರ್ಮಿಕರಿಗೆ ಕನಿಷ್ಠ ವೇತನ ಮತ್ತು ಇ.ಎಸ್.ಐ, ಪಿ.ಎಫ್ ಪಾವತಿಯಾಗುತ್ತಿರುವ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಮಾಹಿತಿ ಸಂಗ್ರಹಿಸಿ ಸಹಾಯಕ ಆಯುಕ್ತರ ಕಚೇರಿಗೆ ಸಲ್ಲಿಸಬೇಕು ಎಂದು ಹೇಳಿದರು.
ಕೂಡ್ಲಿಗಿ, ಕಮಲಾಪುರ, ಹಗರಿಬೊಮ್ಮನಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಪೌರಕಾರ್ಮಿಕರಿಗೆ ನಿವೇಶನ ಕಲ್ಪಿಸಲಾಗಿದ್ದು, ಮರಿಯಮ್ಮನಹಳ್ಳಿ ಪಟ್ಟಣ ಪಂಚಾಯಿತಿಯ ಪೌರಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ 4 ಜನರಿಗೆ ವಸತಿ ಸೌಲಭ್ಯ ಕಲ್ಪಿಸಲಾಗಿದ್ದು, ನಿವೇಶನ ರಹಿತ 4 ಜನರಿಗೆ ನಿವೇಶನ ಕಲ್ಪಿಸಿ ವಸತಿ ಸೌಲಭ್ಯಕ್ಕೆ ಕ್ರಮವಹಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀನಿವಾಸ್‌ನಾಯ್ಕ್ ಅವರು ಸಭೆಯಲ್ಲಿ ತಿಳಿಸಿದರು.
ಹೊಸಪೇಟೆ ನಗರಸಭೆ ವ್ಯಾಪ್ತಿಯಲ್ಲಿ ಒಟ್ಟು 17 ಸಮುದಾಯ ಸ್ಯಾನಿಟರಿ ಶೌಚಾಲಯಗಳಲ್ಲಿ 15 ಕಾಮಗಾರಿಗಳು ಪೂರ್ಣಗೊಂಡಿದ್ದು, 2 ಕಾಮಗಾರಿಗಳು ಪ್ರಗತಿಯಲ್ಲಿವೆ. ಮರಿಯಮ್ಮನಹಳ್ಳಿ, ಹಗರಿಬೊಮ್ಮನಹಳ್ಳಿ, ಕೂಡ್ಲಿಗಿ ಹಾಗೂ ಕಮಲಾಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಎಲ್ಲಾ ಸಮುದಾಯ ಸ್ಯಾನಿಟರಿ ಶೌಚಾಲಯಗಳ ಕಾಮಗಾರಿ ಪೂರ್ಣಗೊಂಡಿವೆ ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಸಭೆಗೆ ವಿವರಿಸಿದರು.
ಮರಿಯಮ್ಮನಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸಫಾಯಿ ಕರ್ಮಚಾರಿಗಳು ದ್ವಿಚಕ್ರ ವಾಹನ, ಐರಾವತ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿದ್ದು, ನಿಯಮಾನುಸಾರ ಕ್ರಮವಹಿಸಲಾಗುವುದು ಎಂದು ಮರಿಯಮ್ಮನಹಳ್ಳಿಯ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ತಿಳಿಸಿದರು. ಹಾಗೆಯೇ ಪುರಸಭಾ ವ್ಯಾಪ್ತಿಯ ಎಲ್ಲಾ ಪೌರಕಾರ್ಮಿಕರಿಗೆ ಕಾಲಕಾಲಕ್ಕೆ ಆರೋಗ್ಯ ತಪಾಸಣಾ ಶಿಬಿರ ಮತ್ತು ಸಾಮಾನ್ಯ ಆರೋಗ್ಯ ತಪಾಸಣೆ ಮಾಡಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಸಫಾಯಿ ಕರ್ಮಚಾರಿಗಳ ಮರು ಸಮೀಕ್ಷೆ ಮಾಡಲಾಗಿದ್ದು, ಹೊಸಪೇಟೆ ನಗರ ವ್ಯಾಪ್ತಿಯಲ್ಲಿ 2 ಹಾಗೂ ಮರಿಯಮ್ಮನಹಳ್ಳಿಯಲ್ಲಿ 7 ಜನ ಅರ್ಜಿ ಸಲ್ಲಿಸಿದ್ದು, ಇವರ ಅರ್ಜಿಗಳನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.
ಹೊಸಪೇಟೆ ನಗರಸಭೆ, ಕಮಲಾಪುರ, ಕೂಡ್ಲಿಗಿ, ಮರಿಯಮ್ಮನಹಳ್ಳಿ, ಹಗರಿಬೊಮ್ಮನಹಳ್ಳಿ ಹಾಗೂ ಕೂಡ್ಲಿಗಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಆರೋಗ್ಯ ಕಾರ್ಡ್ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದರು.
ದೌರ್ಜನ್ಯ ತಡೆ ಕಾಯ್ದೆ; ಅನುಸೂಚಿತ ಜಾತಿ ಮತ್ತು ಪಂಗಡದವರ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಹೊಸಪೇಟೆಯಲ್ಲಿ 16, ಕೂಡ್ಲಿಗಿಯಲ್ಲಿ 42 ಪ್ರಕರಣಗಳು ಹಾಲಿ ನ್ಯಾಯಾಲಯದಲ್ಲಿ ನಡೆಯುತ್ತಿದ್ದು, ಕೂಡ್ಲಿಗಿ ತಾಲ್ಲೂಕಿನ 5 ಪ್ರಕರಣಗಳಲ್ಲಿ 4 ನ್ಯಾಯಾಲಯದಲ್ಲಿ ಖುಲಾಸೆಯಾಗಿದ್ದು, 1 ಪ್ರಕರಣವು ಅಂತಿಮ ವರದಿಗೆ ಬಂದಿರುತ್ತವೆ ಎಂಬ ಮಾಹಿತಿಯನ್ನು ಹೊಸಪೇಟೆಯ ಉಪ ಪೊಲೀಸ್ ಅಧೀಕ್ಷಕರಿಂದ ಮಾಹಿತಿ ಸಂಗ್ರಹಿಸಿರುವುದಾಗಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಿಳಿಸಿದರು.
ಈ ಸಂದರ್ಭದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಅರುಣ್ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀನಿವಾಸ್‌ನಾಯ್ಕ್, ನಗರಸಭೆಯ ಅಧಿಕಾರಿಗಳು, ವಿವಿಧ ಪಟ್ಟಣ ಪಂಚಾಯಿತಿಯ ಅಧಿಕಾರಿಗಳು ಸೇರಿದಂತೆ ಇತರರು ಇದ್ದರು.