ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ
ಲೋಕದರ್ಶನ ವರದಿ
ಕಾರವಾರ 05 : ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಟಿ. ನಾಯ್ಕ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಹಾಗೂ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಕಾಂಗ್ರೆಸ್ ಜಿಲ್ಲಾ ಘಟಕದ ವತಿಯಿಂದ ಗುರುವಾರ ನಗರದಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು. ವಿದೇಶಿ ನುಸುಳು ಕೋರರ ಪತ್ತೆಗೆ ಎಸ್ ಐ ಆರ್ ಎಂದು ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗ ಹೇಳಿತ್ತು.
ಆದರೆ ಹದಿಮೂರು ರಾಜ್ಯಗಳಲ್ಲಿ ಮುಗಿದ ವಿಶೇಷ ಮತ ಪರಿಷ್ಕರಣೆಯಲ್ಲಿ ಸಿಕ್ಕಿದ್ದು ಒಬ್ಬ ಬಾಂಗ್ಲಾದೇಶದ ಪ್ರಜೆ ಮಾತ್ರ. ಒಬ್ಬ ಪಾಕಿಸ್ತಾನಿ ಪ್ರಜೆ. ಪಾಕಿಸ್ತಾನದ ಮಹಿಳೆ ವಿವಾಹ ಕಾರಣದಿಂದ ಭಾರತದಲ್ಲಿ ಉಳಿದಾಕೆ. 700 ಜನ ನೇಪಾಳಿಗಳು. ನೇಪಾಳ ಮತ್ತು ಭಾರತದ ನಡುವೆ ವಿಶೇಷ ಸಂಬಂಧ ಗಳಿವೆ. ನೇಪಾಳಕ್ಕೆ ಹೋಗಲು ಪಾಸ್ ಪೋರ್ಟ್ ಸಹ ಬೇಕಿಲ್ಲ. ಆದರೆ ಕೇಂದ್ರದ ಬಿಜೆಪಿ ಹೇಳಿದಂತೆ ಅಪಾರ ಸಂಖ್ಯೆಯ ಪಾಕಿಸ್ತಾನಿಗಳು, ಬಾಂಗ್ಲಾದೇಶಿಯರು ಎಲ್ಲಿದ್ದಾರೆ.
ಎಸ್ ಐ ಆರ್ ನಲ್ಲಂತೂ ಅವರು ಸಿಕ್ಕಿಲ್ಲ. ಪಾಕಿಸ್ತಾನಿ, ಬಾಂಗ್ಲಾ ಪ್ರಜೆಗಳ ಹೆಸರಲ್ಲಿ 13 ಕೋಟಿ ನಾಗರಿಕರನ್ನು ಮತಗಳಿಂದ ವಂಚಿಸಲಾಯಿತು. ಕರ್ನಾಟಕದಲ್ಲಿ 99 ಲಕ್ಷ ಅರ್ಹ ಮತದಾರರನ್ನು ಹೊರಗಿಡಲಾಗಿದೆ ಎಂದು ಡಿಸಿಸಿ ಅಧ್ಯಕ್ಷರು ಅಪಾದಿಸಿದರು. ಇದು ಅನ್ಯಾಯ. ಮತ ಕಸಿಯುವುದು ದೊಡ್ಡ ಅಘಾತದ ಕೆಲಸವಾಗಿದೆ. ಇದನ್ನು ಪ್ರತಿಭಟಿಸಿ ಕಾಂಗ್ರೆಸ್ ಹೋರಾಟಕ್ಕೆ ಕಳೆದ ಎರಡು ತಿಂಗಳಿಂದ ಹೋರಾಡುತ್ತಿದೆ ಎಂದರು.
ಇದಕ್ಕೂ ಮೊದಲು ‘ಮತ ಉಳಿಸಿ, ದೇಶ ಉಳಿಸಿ’ ಎಂಬ ಘೋಷವಾಕ್ಯದಡಿ ನಡೆದ ಪ್ರತಿಭಟನೆಯಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡು ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಗರದ ಮಿತ್ರ ಸಮಾಜ ಮೈದಾನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಪ್ರಮುಖ ರಸ್ತೆಗಳಲ್ಲಿ ಸಾಗುತ್ತ ಜಿಲ್ಲಾಧಿಕಾರಿ ಕಚೇರಿಗೆ ತಲುಪಿತು.
ಅಲ್ಲಿ ಜಮಾಯಿಸಿದ ಕಾರ್ಯಕರ್ತರು ಕೆಲಕಾಲ ಧರಣಿ ನಡೆಸಿ, ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಶಾಸಕ ಸತೀಶ್ ಸೈಲ್, ದೇಶದಲ್ಲಿ ಮತದಾನದ ಹಕ್ಕು ಪ್ರಜಾಪ್ರಭುತ್ವದ ಪ್ರಮುಖ ಆಧಾರವಾಗಿದ್ದು, ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಮತ ಚಲಾಯಿಸುವ ಅವಕಾಶವನ್ನು ಸಂರಕ್ಷಿಸುವುದು ಚುನಾವಣಾ ಆಯೋಗದ ಜವಾಬ್ದಾರಿಯಾಗಿದೆ.
ಆದರೆ, ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಆರೋಪಿಸಿದರು. ನುಸುಳುಕೋರರ ಮತಗಳನ್ನು ತೆಗೆದುಹಾಕುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ, ವಾಸ್ತವದಲ್ಲಿ ಅರ್ಹ ಮತದಾರರ ಹಕ್ಕುಗಳಿಗೆ ಧಕ್ಕೆಯಾಗುವ ಆತಂಕ ಎದುರಾಗಿದೆ ಎಂದು ದೂರಿದರು. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸುವುದರ ಜತೆಗೆ, ಅವರ ವಿರುದ್ಧ ಪ್ರಾಸಿಕ್ಯೂಷನ್ಗೆ ಕ್ರಮ ಕೈಗೊಳ್ಳಬೇಕು. ಅಕ್ರಮಗಳಿಗೆ ಸಹಕರಿಸಿದ ಅಥವಾ ಕರ್ತವ್ಯಲೋಪ ಎಸಗಿದ ಅಧಿಕಾರಿಗಳ ವಿರುದ್ಧವೂ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು. ಕೊನೆಯಲ್ಲಿ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಅವರಿಗೆ ಲಿಖಿತ ಮನವಿ ಅರ್ಿಸಲಾಯಿತು. ಮನವಿಯನ್ನು ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರಕ್ಕೆ ಕಳುಹಿಸುವುದಾಗಿ ಜಿಲ್ಲಾಧಿಕಾರಿ ಹೇಳಿದರು. ಪ್ರತಿಭಟನೆಯಲ್ಲಿ ಶಾಸಕ ಸತೀಶ ಸೈಲ್, ಕಾಂಗ್ರೆಸ್ ಮುಖಂಡರಾದ ಕೆ. ಶಂಭು ಶೆಟ್ಟಿ,
ಅಬ್ಬಾಸ್ ತೊನ್ಸೆ, ವಸಂತ ನಾಯ್ಕ, ಜಗದೀಪ ತಂಗೇರಿ, ವಿಷ್ಣು ದೇವಾಡಿಗ, ಜಿಲ್ಲೆಯ ಎಲ್ಲಾ ತಾಲ್ಲೂಕಿನ ಕಾಂಗ್ರೆಸ್ ಮುಖಂಡರು, ಸೇರಿದಂತೆ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು, ಮಹಿಳಾ ಘಟಕದ ಸುಜಾತ ಗಾಂವ್ಕರ್ ಹಾಗೂ ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು. ಪೊಲೀಸರು ಬಿಗಿ ಬಂದೋಬಸ್ತ ಏರಿ್ಡಸಿದ್ದರು.