ಮತದಾನದ ಹಕ್ಕು ರಕ್ಷಣೆಗೆ ಕಾಂಗ್ರೆಸ್ನಿಂದ ಪ್ರತಿಭಟನೆ
ಲೋಕದರ್ಶನ ವರದಿ
ಹಾವೇರಿ, ಅ. 9: ಪ್ರಧಾನಿ ನರೇಂದ್ರ ಮೋದಿ ಅವರಾಗಲಿ, ಚುನಾವಣಾ ಆಯೋಗದ ಅಧಿಕಾರಿಗಳಾಗಲಿ ನಮ್ಮ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ. ಪ್ರತಿಯೊಬ್ಬ ಮತದಾರನ ಮತದಾನದ ಹಕ್ಕನ್ನು ರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಸಚಿವ ರುದ್ರ್ಪ ಲಮಾಣಿ ಹೇಳಿದರು.
ನಗರದ ಮೈಲಾರ ಮಹದೇವಪ್ಪ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ‘ಪ್ರಜಾಪ್ರಭುತ್ವ ಉಳಿಸಿ, ಮತ ಬಚಾವೋ, ದೇಶ ಬಚಾವೋ’ ಪ್ರತಿಭಟನಾ ಸಮಾವೇಶದಲ್ಲಿ ಅವರು ಮಾತನಾಡಿದರು.
ಮತದಾರರ ಹಕ್ಕುಗಳನ್ನು ರಕ್ಷಿಸುವುದು ಅತ್ಯಂತ ಮಹತ್ವದ ಜವಾಬ್ದಾರಿಯಾಗಿದೆ. ಮತದಾರರ ಪಟ್ಟಿಯಲ್ಲಿ ಅರ್ಹರ ಹೆಸರು ಕೈಬಿಟ್ಟಿದ್ದರೆ ಗುರುತಿಸಿ ಸೇರೆ್ಡಗೊಳಿಸಬೇಕು. ಯಾವುದೇ ಮತದಾರರ ಹೆಸರೂ ತಪ್ಪಾಗಿ ಕೈಬೀಳದಂತೆ ಕಾಂಗ್ರೆಸ್ನ ಬೂತ್ ಮಟ್ಟದ ಏಜೆಂಟರು (ಬಿಎಲ್‌ಎ) ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು.
ಚುನಾವಣಾ ಪ್ರಕ್ರಿಯೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿದೆಯೇ ಎಂಬುದನ್ನು ಪರೀಶೀಲಿಸಿಕೊಳ್ಳಬೇಕು ಎಂದು ತಿಳಿಸಿದರು.
ಜೀವನ ಎಷ್ಟು ಮುಖ್ಯವೋ ಮತವೂ ಅಷ್ಟೇ ಮುಖ್ಯ. ಆದ್ದರಿಂದ ಮತದಾರರು ತಮ್ಮ ಹಕ್ಕಿನ ಬಗ್ಗೆ ಜಾಗೃತರಾಗಿರಬೇಕು.
ಮತದಾರರ ಪಟ್ಟಿಯ ಬಗ್ಗೆ ವಿಶೇಷ ಗಮನ ಹರಿಸಬೇಕು. ಕುತಂತ್ರದ ಮೂಲಕ ಪ್ರಜಾಪ್ರಭುತ್ವಕ್ಕೆ ಧಕ್ಕೆ ತರಲು ಬಿಜೆಪಿ ಪ್ರಯತ್ನಿಸುತ್ತಿದೆ. ಪಶ್ಚಿಮ ಬಂಗಾಳದಲ್ಲಿಯೂ ಇದೇ ರೀತಿಯ ಪ್ರಯತ್ನ ನಡೆದಿದೆ ಎಂದು ಆರೋಪಿಸಿದರು.